ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಖುರ್ಚಿಗಾಗಿ ಕಾಳಗ ತೀವ್ರಗೊಂಡಿದ್ದು, ರೈತರ ಸಮಸ್ಯೆ ಕೇಳಲು ಯಾರಿಗೂ ಸಮಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಟನ್ ಕಬ್ಬಿಗೆ 3,500 ರೂ. ನೀಡುವಂತೆ ಗುರ್ಲಾಪುರ ಬಳಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಲು ಇಲ್ಲಿಗೆ ಬಂದಿದ್ದೇವೆಂದು ಹೇಳಿದರು.
ರಾಜ್ಯದಲ್ಲಿ 2014ರಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆದ ವೇಳೆ ಕಬ್ಬಿನ ವಿಚಾರವಾಗಿಯೇ ರೈತ ವಿಠ್ಠಲ ಅರಭಾವಿ ಪ್ರಾಣ ಕಳೆದುಕೊಂಡರು. ಆಗ ಬಿ.ಎಸ್.ಯಡಿಯೂರಪ್ಪ ಹೋರಾಟ ಮಾಡಿ ಅಂದಿನ ಮುಖ್ಯಮಂತ್ರಿ ಮೇಲೆ ಒತ್ತಡ ತಂದು, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಇಂದು ರೈತರು ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಕಿಂಚಿತ್ತು ಕಾಳಜಿ ತೋರುತ್ತಿಲ್ಲ ಎಂದು ಕಿಡಿಕಾರಿದರು.
ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ಏರ್ಪಟ್ಟಿದ್ದು, ಬೀದಿಗಿಳಿದು ಹೊಡೆದಾಟ-ಬಡಿದಾಟ ನಡೆದಿದೆ. ನವೆಂಬರ್ ತಿಂಗಳಿಗೆ ಏನಾಗುತ್ತೋ ಕಾದು ನೋಡೋಣ. ಆದರೆ, ಸಿಎಂ, ಡಿಸಿಎಂ, ಸಚಿವರುಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿವೆ. ಇವುಗಳ ಕಡೆ ರಾಜ್ಯ ಸರಕಾರ ಗಂಭೀರ ಚಿಂತನೆ ಮಾಡುತ್ತಿಲ್ಲ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕಗಳಲ್ಲಿ ಅತಿವೃಷ್ಟಿಯಿಂದ ರೈತರು ಸಂಕಷ್ಟದಲ್ಲಿದ್ದರು. ನಾವೂ ಪ್ರವಾಸ ಮಾಡಿದ್ದೆವು. ಜಿಲ್ಲಾ ಉಸ್ತುವಾರಿಗಳು ನಾಪತ್ತೆಯಾಗಿದ್ದಾರೆ ಎಂದು ಸಿಎಂ ಗಮನಕ್ಕೆ ತಂದಿದ್ದೇವೆ.
ಇಲಾಖಾ ಅಧಿಕಾರಿಗಳೂ ತಲೆ ಕೆಡಿಸಿಕೊಳ್ಳುತ್ತಿಲ್ಲ, ತಕ್ಷಣ ಪರಿಹಾರ ಬಿಡುಗಡೆಗೆ ಒತ್ತಾಯಿಸಿದ್ದೇವೆ. ಆದರೆ, ಸಚಿವರು ಬೆಂಗಳೂರಿನಲ್ಲಿ ಕುಳಿತು ಕೇಂದ್ರ ಸರಕಾರ ಪರಿಹಾರ ಕೊಟ್ಟಿಲ್ಲ ಎಂಬ ಹೇಳಿಕೆಗೆ ಸೀಮಿತ ಮಾಡಿದ್ದಾರೆಯೇ ವಿನಃ ಸಂಕಷ್ಟದಲ್ಲಿರುವ ರೈತರಿಗೆ ಕಾಂಗ್ರೆಸ್ ಸರಕಾರ ಪರಿಹಾರ ಕೊಟ್ಟಿಲ್ಲ ಎಂದು ಅವರು ಆಕ್ಷೇಪಿಸಿದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಿಲ್ಲವೆಂದು ಅಲ್ಲಿನ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ವಿಷಯದಲ್ಲೂ ಸರಕಾರ ಗಮನ ಹರಿಸುತ್ತಿಲ್ಲ. ಒಟ್ಟಾರೆಯಾಗಿ ನಾಡಿನ ರೈತರ ಸಮಸ್ಯೆಗಳ ಬಗ್ಗೆ ಚಕಾರವನ್ನೂ ಎತ್ತದ ಈ ಕಾಂಗ್ರೆಸ್ ಸರಕಾರವು ರೈತರ ವಿಚಾರದಲ್ಲಿ ಕಿಂಚಿತ್ತೂ ಕಾಳಜಿ ತೋರಿಸುತ್ತಿಲ್ಲ, ಇದು ಸರಿಯಲ್ಲ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಹೊಸ ಸಿ.ಎಂ ಬರುತ್ತಾರೆ' ಎಂಬ ರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿ, ಶ್ರೀ'ರಾಮುಲು ಹೇಳಿದ್ದನ್ನು ಪಕ್ಕಕ್ಕೆ ಇಡಿ. ಸ್ವತಃ ಆಡಳಿತ ಪಕ್ಷದ ಸಚಿವರು, ಶಾಸಕರೇ ಇದನ್ನು ಹೇಳುತ್ತಿದ್ದಾರೆ. ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಯಾವ ರೀತಿ ಯುದ್ದ ಆರಂಭವಾಗಿದೆ ಎಂಬುದು ಬಿಹಾರ ಚುನಾವಣೆ ಫಲಿತಾಂಶದ ನಂತರ ಎಲ್ಲರಿಗೂ ಗೊತ್ತಾಗುತ್ತದೆ ಎಂದರು.
ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್. ನೆರೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಕಬ್ಬು ಬೆಳೆಗಾರರು ʼಪ್ರತಿ ಟನ್ ಕಬ್ಬಿಗೆ ರೂ.0 ದರ ನಿಗದಿ ಪಡಿಸುವಂತೆ ಆಗ್ರಹಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳ ಲಾಬಿಗೆ ಮಣಿದಿರುವ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಅನ್ನದಾತರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದೆ.
ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಸಿಡಿದೆದ್ದಿರುವ ಕಬ್ಬು ಬೆಳೆಗಾರರು, ರೈತ ಸಂಘಟನೆಗಳು ಬೆಳಗಾವಿ, ಬಾಗಲಕೋಟೆ, ಹಾವೇರಿ ಸೇರಿ ಹಲವು ಜಿಲ್ಲೆಗಳಲ್ಲಿ ಅಹೋರಾತ್ರಿ ಧರಣಿ, ಪ್ರತಿಭಟನೆಗಳನ್ನು ನಡೆಸುತ್ತಿದ್ದು ಬೀದಿಗಿಳಿದ್ದಾರೆ. ದಪ್ಪ ಚರ್ಮದ ಸಿದ್ದರಾಮಯ್ಯ ಸರ್ಕಾರ ಇನ್ನಾದರೂ ಎಚ್ಚೆತ್ತು ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಗ್ರಹಿಸಿದೆ.