ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆಂದು ಹೇಳಲಾಗುತ್ತಿದ್ದು, ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಷ್ಟು ದಿನ ಮೌನ ತಾಳಿದ್ದ ನಾಯರು ಇದೀಗ ಸಚಿವ ಸ್ಥಾನಕ್ಕಾಗಿ ಲಾಬಿ ಶುರು ಮಾಡಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟ ಹೀನಾಯ ಸೋಲು ಕಂಡ ಬೆನ್ನಲ್ಲೇ, ಸಿದ್ದರಾಮಯ್ಯ ಸೌಜನ್ಯಕ್ಕಾಗಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದರು.
ಭೇಟಿ ವೇಳೆ ರಾಹುಲ್ ಗಾಂಧಿಯವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತನಾಡಿರುವ ಸಿದ್ದರಾಮಯ್ಯ ಅವರು, ರಾಜ್ಯ ರಾಜಕೀಯದ ಕುರಿತಂತೆಯೂ ಮಾತುಕತೆ ನಡೆಸಿದ್ದು, ಈ ವೇಳೆ ಸಚಿವ ಸಂಪುಟ ಪುನಾರಚನೆಗೆ ಅನುಮತಿ ನೀಡಿದ್ದಾರೆಂದು ಹೇಳಲಾಗುತ್ತಿದೆ. ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಕೂಡ ಹಾಜರಿದ್ದರು ಎಂದು ತಿಳಿದುಬಂದಿದೆ.
ಸಚಿವ ಸಂಪುಟ ಪುನಾರಚನೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸುವಂತೆ ರಾಹುಲ್ ಗಾಂಧಿಯವರು ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ.
ಹೈಕಮಾಂಡ್ ಅನುಮೋದನೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಈ ಬಾರಿ 10-12 ಸಚಿವರ ಕೈಬಿಟ್ಟು, ಆಪ್ತರ ನೇಮಿಸಿ ಮುಖ್ಯಮಂತ್ರಿ ಸ್ಥಾನವನ್ನು ಬಲಪಡಿಸಿಕೊಳ್ಳುವ ಸಾಧ್ಯತೆಗಳಿದ್ದು, ಇದರಿಂದ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಂಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿನ್ನಡೆಯುಂಟಾಗಲಿದೆ ಎಂದು ಹೇಳಲಾಗುತ್ತಿದೆ.
2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಡಿಕೆ.ಶಿವಕುಮಾರ್ ಅವರು ಅಧಿಕಾರ ಹಂಚಿಕೆಯ ಬೇಡಿಕೆಯಿದ್ದು, ಇದಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಿತ್ತು ಎಂದು ಹೇಳಲಾಗುತ್ತಿದೆ. ಒಪ್ಪಂದದಂತೆ 2.5 ವರ್ಷಗಳ ಅಧಿಕಾರಾವಧಿಯನ್ನು ಸಿದ್ದರಾಮಯ್ಯ ಅವರು ಪೂರೈಸಿದ್ದಾರೆ. ಇದೀಗ ಡಿಕೆ.ಶಿವಕುಮಾರ್ ಅವರು ಸಿಎಂ ಪಟ್ಟಕ್ಕಾಗಿ ಒತ್ತಡ ಹೇರುತ್ತಿದ್ದು, ಬಿಹಾರ ಚುನಾವಣೆಯಲ್ಲಿ ಸೋಲು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿ ಹೈಕಮಾಂಡ್ ಈ ಬದಲಾವಣೆಗೆ ಒಪ್ಪಿಗೆ ನೀಡದಿರಬಹುದು ಎಂದು ಹೇಳಲಾಗುತ್ತಿದೆ.
ಹೀಗಾಗಿ, ತಮ್ಮ ತಮ್ಮ ಆಕಾಂಕ್ಷೆಗಳನ್ನು ಬದಿಗೊತ್ತಿ, ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ.ಶಿವಕುಮಾರ್ ಮುಂದುವರೆಯಬಹುದು ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
ಈ ನಡುವೆ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಸುಪ್ರೀಂ ಕೋರ್ಟ್ ವಕೀಲ ಕಪಿಲ್ ಸಿಬಲ್ ಅವರು ಬರೆದಿರುವ 'ದಿಲ್ ಸೆ' ಪುಸ್ತಕದ 100 ನೇ ಕಂತಿನ ಬಿಡುಗಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಭಾಗವಹಿಸಿದ್ದರು.
ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆಪ್ತರಾದ ಸಚಿವ ಬೈರತಿ ಸುರೇಶ್, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಕೂಡ ಹಾಜರಿದ್ದರು.
ಏತನ್ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಮೋದಿ ಅವರು ಭೇಟಿಗೆ ಅವಕಾಶ ನೀಡಿದ್ದಾರೆಂದು ಹೇಳಲಾಗುತ್ತಿದೆ.
ಭೇಟಿ ವೇಳೆ ನೈಋತ್ಯ ಮಾನ್ಸೂನ್ ಮಳೆಯಿಂದಾಗಿ, ವಿಶೇಷವಾಗಿ ರಾಜ್ಯದ ಉತ್ತರ ಭಾಗಗಳಲ್ಲಿ ನಷ್ಟ ಸಂಭವಿಸಿದ್ದು, ಪುನರ್ನಿರ್ಮಾಣ ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 1,545 ಕೋಟಿ ರೂ.ಗಳ ಬೇಡಿಕೆ ಮುಂದಿಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಮಸ್ಯೆಗಳನ್ನೂ ಮುಖ್ಯಮಂತ್ರಿಗಳು ಚರ್ಚಿಸುವ ಸಾಧ್ಯತೆಯಿದೆ,
ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಹೆಚ್ಚಿಸಲು ಕೇಂದ್ರದ ನೀತಿಯ ಹಸ್ತಕ್ಷೇಪ, ಸಕ್ಕರೆ ಮತ್ತು ಅದರ ರಫ್ತಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ತೈಲ ಕಂಪನಿಗಳಿಗೆ ಎಥೆನಾಲ್ ಹಂಚಿಕೆಯನ್ನು ಕೋರುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.