ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷದ ನಡುವೆ ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶನಿವಾರ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಜೆಡಿ(ಎಸ್) ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದರು.
ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಭ್ರಷ್ಟಾಚಾರ, ಕೆಟ್ಟ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ತೆರಿಗೆ, ಬೆಲೆ ಏರಿಕೆ ಸುಲಿಗೆಯಿಂದ ಬೇಸತ್ತು ಹೋಗಿದ್ದಾರೆ. ಮುಂದೆ ನಮ್ಮ ಪಕ್ಷಕ್ಕೆ ಒಂದು ಅವಕಾಶ ಕೊಡಿ. ಐದು ವರ್ಷದಲ್ಲಿ ಯಾವ ರೀತಿ ಆಡಳಿತ ಕೊಡಬೇಕು, ಜನರಿಗೆ ಏನೆಲ್ಲ ಒಳ್ಳೆಯದು ಮಾಡಬೇಕು ಎಂಬುದನ್ನು ಸಾಬೀತು ಮಾಡಿ ತೋರಿಸುತ್ತೇನೆ ಎಂದರು.
ಆಡಳಿತ ಪಕ್ಷದಲ್ಲಿ ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಜತೆಯೇ ಇರಬೇಕು. ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವರು ಕರೆ ನೀಡಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರಾಜ್ಯದ ಸಾಲ 7.50 ಲಕ್ಷ ಕೋಟಿ ದಾಟಿದೆ. ಸಿದ್ಧರಾಮಯ್ಯ ಒಬ್ಬರೇ 5ರಿಂದ 5.50 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇಷ್ಟು ಸಾಲವನ್ನು ಏಕೆ ಮಾಡಿದ್ರು? ಯಾವ ಪುರುಷಾರ್ಥಕ್ಕೆ ಮಾಡಿದ್ರು ಎಂಬುದನ್ನು ಜನರಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು.