ಬೆಂಗಳೂರು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶುಕ್ರವಾರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
83 ವರ್ಷದ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ನಗರದ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ, ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಕಳೆದ ಮಂಗಳವಾರ ಖರ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಶೀಘ್ರದಲ್ಲೇ ಚೇತರಿಸಿಕೊಂಡ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪ್ರಸ್ತುತ ಮಲ್ಲಿಕಾರ್ಜುನ ಖರ್ಗೆ ಅವರು ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಈ ನಡುವೆ ಇಂದು ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದಾರೆ. ಸುರ್ಜೇವಾಲರಿಗೆ ಸಚಿವ ಕೆ.ಜೆ ಜಾರ್ಜ್, ಶಾಸಕ ಹ್ಯಾರೀಸ್ ಸಾಥ್ ನೀಡಿದರು.
"ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಅವರ ಮನೆಗೆ ಭೇಟಿ ನೀಡಿದೆ. ಖರ್ಗೆ ಅವರ ಉತ್ಸಾಹ ನಿಜಕ್ಕೂ ಹೃದಯಸ್ಪರ್ಶಿಯಾಗಿದೆ. ಅವರ ನಿರಂತರ ಮಾರ್ಗದರ್ಶನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ" ಎಂದು ಸುರ್ಜೇವಾಲ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.