ಮೈಸೂರು: ನವೆಂಬರ್ನಲ್ಲಿ ರಾಜ್ಯ ರಾಜಕೀಯದಲ್ಲಿ ಕ್ರಾಂತಿಯಾಗಲಿದೆ. ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಡೆ ಇದೆ. ಡಿ.ಕೆ.ಶಿವಕುಮಾರ್ ನಡೆ ಸಿದ್ದರಾಮಯ್ಯ ಕಡೆ ಇದೆ. ಆದರೆ ಶಾಸಕರ ನಡೆ ಬೇರೆ ಕಡೆ ಇದೆ ಎಂದರು.
ರಾಜಕೀಯ ಅಲ್ಲೋಲ ಕಲ್ಲೋಲವಾದಾಗ ಬಿಜೆಪಿ ನಡೆ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ. ರಾಜಕೀಯ ಅವಕಾಶ ಬಂದರೆ ಆಗ ನೋಡೋಣ ಎಂದಿದ್ದಾರೆ.
ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬೇಡಿ ಅದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ. ಅಂದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಪಕ್ಷದ ವರಿಷ್ಠರು ಎಲ್ಲಿಯೂ ಹೇಳಿಲ್ಲ. ಅರ್ಥಾತ್ ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗುವುದಿಲ್ಲ, ಅಲ್ಲೋಲ ಕಲ್ಲೋಲವಾಗುವುದು ಸ್ಪಷ್ಟ ಎಂದರು.
ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಪ್ರವಾಹದಿಂದ ಬೆಳೆ ಸಂಪೂರ್ಣವಾಗಿ ನಾಶವಾಗಿ ರೈತರು, ಬಡವರಿಗೆ ಸಾಕಷ್ಟು ತೊಂದರೆಯಾಗಿದೆ. ಆದರೆ ರಾಜ್ಯ ಸರ್ಕಾರ ಗಮನಹರಿಸಿಲ್ಲ. ರಾಜ್ಯ ಸರ್ಕಾರ ಹೇಳಿಕೆಗಳಿಗೆ ಸೀಮಿತವಾಗದೆ ಸಂಕಷ್ಟದಲ್ಲಿರುವ ರೈತರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.