ಬೆಂಗಳೂರು: ನವೆಂಬರ್ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಶೇ.50ರಷ್ಟು ಸಚಿವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಂಪುಟದಲ್ಲಿ ಖಾಲಿಯಿರುವ ಎರಡು ಸಚಿವ ಸ್ಥಾನಗಳ ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ಸುಕರಾಗಿದ್ದಾರೆ. ಆದರೆ, ಬಿಹಾರ ಚುನಾವಣೆ ಬಳಿಕವೇ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈತನ್ಮಧ್ಯೆ ಆಡಳಿತಕ್ಕೆ ಶಕ್ತಿ ತುಂಬಲು ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತಂತೆಯೂ ಚಿಂತನೆಗಳು ನಡೆಯುತ್ತಿವ ಎಂದು ತಿಳಿದುಬಂದಿದೆ.
ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಇತ್ತೀಚೆಗಷ್ಟೇ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡಿದ್ದು, ಈ ವೇಳೆ ಪಕ್ಷ ಅಧಿಕಾರಕ್ಕೆ ಬಂದಾಗ ತಮಗೆ ಅವಕಾಶ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆಂದು ಹೇಳಲಾಗುತ್ತಿದೆ.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾತನಾಡಿ, ಮಹರ್ಷಿ ವಾಲ್ಮೀಕಿ ಎಸ್‌ಟಿ ಕಾರ್ಪೊರೇಷನ್‌ನಲ್ಲಿ ನಡೆದ ಬಹುಕೋಟಿ ಹಗರಣದ ಆರೋಪದ ಮೇಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಸ್‌ಟಿ ನಾಯಕ ನಾಯಕ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನಕ್ಕೆ ಮರಳಿ ಸೇರ್ಪಡೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ನಡುವೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಮ್ಮ ಮಗಳು, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್‌ಗಾಗಿ ತಮ್ಮ ಹುದ್ದೆಯನ್ನು ಬಿಟ್ಟುಕೊಡಲು ಸಿದ್ಧರಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದ್ದು, ಅಬಕಾರಿ ಸಚಿವ ಸ್ಥಾನಕ್ಕೆ ಆರ್‌ಬಿ ತಿಮ್ಮಾಪುರ ಅವರ ಕೈಬಿಟ್ಟು ಮತ್ತೊಬ್ಬ ಎಸ್‌ಸಿ (ಎಡ) ನಾಯಕನನ್ನು ನೇಮಕ ಮಾಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸ್ಥಾನಕ್ಕೆ ಮಾಜಿ ಇಡಿ ಅಧಿಕಾರಿ ಮತ್ತು ಎಂಎಲ್‌ಸಿ ಸುಧಾಮ್ ದಾಸ್ ಅವರ ಹೆಸರು ಕೇಳಿಬರುತ್ತಿದೆ. ಏಕೆಂದರೆ ಸುಧಾಮ್ ದಾಸ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಸ್ಥಾನಕ್ಕೆ ಹಳೇ ಮೈಸೂರಿನ ಮತ್ತೊಬ್ಬ ಎಸ್‌ಸಿ (ಬಲ) ಸಮುದಾಯದ ಶಾಸಕರನ್ನು ನೇಮಿಸುವ ಸಾಧ್ಯತೆ ಇದ್ದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಕೂಡ ಪ್ರಬಲ ಸ್ಪರ್ಧಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಚಿವರ ಕಾರ್ಯಕ್ಷಮತೆಯ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ.ಶಿವಕುಮಾರ್ ಅವರು ಈಗಾಗಲೇ ಪಕ್ಷದ ಹೈಕಮಾಂಡ್‌ಗೆ ರಿಪೋರ್ಟ್ ಸಲ್ಲಿಸಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆನ್ನಲಾಗಿದೆ.
ಏತನ್ಮಧ್ಯೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಸಚಿವರ ಬಗ್ಗೆ ಪಕ್ಷದ ಶಾಸಕರಿಂದ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಸಚಿವ ಸ್ಥಾನದಿಂದ ಕೈಬಿಟ್ಟ ನಾಯಕರಿಗೆ ಪಕ್ಷವನ್ನು ಸಂಘಟಿಸುವ ಜವಾಬ್ದಾರಿ ನೀಡುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಮಹರ್ಷಿ ವಾಲ್ಮೀಕಿ ಎಸ್‌ಟಿ ಕಾರ್ಪೊರೇಷನ್‌ನಲ್ಲಿ ನಡೆದ ಬಹುಕೋಟಿ ಹಗರಣದ ಆರೋಪದ ಮೇಲೆ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ 'ವೋಟ್ ಚೋರಿ' ಅಭಿಯಾನದ ಬಗ್ಗೆ ಕೆ.ಎನ್. ರಾಜಣ್ಣ ಅವರನ್ನು ಟೀಕಿಸಿದ್ದಕ್ಕಾಗಿ ಅವರನ್ನು ವಜಾಗೊಳಿಸಲಾಗಿತ್ತು.
ಖಾಲಿ ಇರುವ ಎರಡು ಸಚಿವ ಸ್ಥಾನಕ್ಕೆ ಎಸ್‌ಟಿ ನಾಯಕ ಸಮುದಾಯದ ಶಾಸಕರು ಭಾರೀ ಲಾಬಿ ನಡೆಸುತ್ತಿದ್ದಾರೆ. ಈ ನಡುವೆ ರಾಜಣ್ಣ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರನ್ನು ಮನವೊಲಿಸುವ ಪ್ರಯತ್ನವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದು, ಈ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮಾತಿನಂತೆ ರಾಹುಲ್ ಮನವೊಲಿಸಲು ವೇಣುಗೋಪಾಲ್ ಅವರು ಮುಂದಾಗಿದ್ದಾರೆ. ಆದರೆ, ರಾಹುಲ್ ಗಾಂಧಿ ಅವರು ನಿರ್ಧಾರ ಪರಿಶೀಲಿಸುವಂತೆ ವೇಣುಗೋಪಾಲ್ ಅವರಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.