ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಗೆ ಮಿತ್ರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಬಿಕ್ಕಟ್ಟನ್ನು 'ಪರಿಹರಿಸುವ' ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಕ್ಷದ ನಾಯಕರ ಸಭೆ ಇಂದು ನಡೆಯಲಿದ್ದು, ಅದರಲ್ಲಿ ತಾವು ವರ್ಚುವಲ್ ಆಗಿ ಭಾಗವಹಿಸುವುದಾಗಿ ಮಲ್ಲಿಕಾರ್ಜುನ್ ಖರ್ಗೆ ಅವರು ತಿಳಿಸಿದ್ದಾರೆ.
"ನಾವು ಸೀಟು ಹಂಚಿಕೆ ಬಿಕ್ಕಟ್ಟನ್ನು ಪರಿಹರಿಸುತ್ತೇವೆ. ಇಂದು ಮಧ್ಯಾಹ್ನ ಸಭೆ ಇದೆ. ನಾನು ಕೂಡ ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ನಾವು ಅದನ್ನು ಬಗೆಹರಿಸುತ್ತಿದ್ದೇವೆ..." ಎಂದು ಖರ್ಗೆ ಬಿಹಾರ ಚುನಾವಣೆಗೆ ಸೀಟು ಹಂಚಿಕೆ ಬಿಕ್ಕಟ್ಟು ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ.
ಕಾಂಗ್ರೆಸ್ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ, "ನಾವು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ ಎಂಬುದನ್ನು ಈಗಲೇ ಬಹಿರಂಗಪಡಿಸುವುದಿಲ್ಲ. ಇಂದಿನ ಸಭೆಯಲ್ಲಿ ಎಲ್ಲದರ ಬಗ್ಗೆ ಚರ್ಚಿಸುತ್ತೇವೆ ಎಂದರು.
ಕಳೆದ ವಾರ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾದ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದರು.