ಬೆಂಗಳೂರು: ಬಿಹಾರ ರಾಜ್ಯ ವಿಧಾನಸಭೆ ಚುನಾವಣೆ ಪೂರ್ಣಗೊಂಡ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಿದ್ಧತೆ ನಡೆದಿದೆ. ಸುಮಾರು 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಏತನ್ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಆಪ್ತರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆಂದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ ಎಂದು ಹೇಳಿದ್ದಾರೆ.
ಹೈಕಮಾಂಡ್ ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿ, ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರವೂ ಸಿದ್ದರಾಮಯ್ಯ ಅವರಿಗೆ ಸಿಎಂ ಆಗಿ ಮುಂದುವರೆಯಲು ಅವಕಾಶ ನೀಡಿದ್ದೇ ಆದರೆ, ಡಿಕೆ.ಶಿವಕುಮಾರ್ ಅವರು ಹೈಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
2023 ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ವೇಳೆ, ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಯ ಕುರಿತು ಒಪ್ಪಂದ ಮಾಡಿಕೊಂಡಿತ್ತು ಎಂದು ಹೇಳಲಾಗುತ್ತಿದೆ. ಆದರೆ, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ.
ಈ ನಡುವೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆಯವರು ಸಂಪುಟ ಪುನಾಪತನೆ ಮಾಡಬೇಕಾದರೆ ಅಥವಾ ನಾಯಕತ್ವ ಬದಲಾಯಿಸಬೇಕಾದರೆ ಸಿಎಂ ಮತ್ತು ಡಿಸಿಎಂ ಇಬ್ಬರೂ ಹೈಕಮಾಂಡ್ ಜೊತೆ ಸಮಾಲೋಚಿಸಿ ನಿರ್ಧರಿಸುತ್ತಾರೆಂದು ಹೇಳಿದ್ದಾರೆ.
ಸಿಎಂ ಇರ್ತಾರೋ ಬಿಡ್ತಾರೋ ಬೇರೆ ಪ್ರಶ್ನೆ. ಈ ಸರ್ಕಾರ ಬಂದಾಗಲೇ ಮಂತ್ರಿ ಮಂಡಲದಿಂದ ಹೊರಗಿರುವವರಿಗೆ ಅವಕಾಶ ಕೊಡಬೇಕು ಅನ್ನೋದು ಮಂಡನೆ ಆಗಿದೆ. ಆ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ವರಿಷ್ಠರು ತೀರ್ಮಾನ ಮಾಡುತ್ತಾರೆಂದು ತಿಳಿಸಿದರು.
ಸೂಕ್ತ ಸಮಯದಲ್ಲಿ ಸಂಪುಟದಿಂದ ಹೊರಗಿರುವ ಅರ್ಹರಿಗೆ ಅವಕಾಶ ಕೊಡಬೇಕೆಂದು ವರಿಷ್ಠರು ತೀರ್ಮಾನಿಸಿದ್ದಾರೆ. ಸಂಪುಟದ ಒಳಗಿರುವವರು ಕೂಡ ಇದಕ್ಕೆ ಒಪ್ಪಿದ್ದಾರೆ. ಇದು ಸ್ವಾಭಾವಿಕ ನ್ಯಾಯ, ಧರ್ಮ. ನಾನು ಹೊರಗೆ ಹೋದರು ಪರವಾಗಿಲ್ಲ. ಬೇರೆಯವರಿಗೆ ಅವಕಾಶ ಸಿಗಬೇಕು, ಇದು ತ್ಯಾಗ ಅಲ್ಲ ಕರ್ತವ್ಯ ಎಂದು ಭಾವಿಸುತ್ತೇವೆ ಎಂದರು.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಸಹಾಯ ಮಾಡಲು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ.
ಏತನ್ಮಧ್ಯೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಕೃಷ್ಣಬೈರೇ ಗೌಡ ಮತ್ತು ದಿನೇಶ್ ಇಬ್ಬರಿಗೂ ಪಕ್ಷದ ಸಾಂಸ್ಥಿಕ ಜವಾಬ್ದಾರಿಯನ್ನು ನೀಡಬಹುದು ಎಂದು ಮೂಲಗಳು ತಿಳಿಸಿವೆ.
ನವೆಂಬರ್ ವೇಳೆಗೆ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಿದರೆ, ಇದು ಮುಂಬರುವ ಐದು ಪಾಲಿಕೆಗಳ ಮತ್ತು ಜಿಲ್ಲಾ ಪಂಚಾಯತ್/ತಾಲ್ಲೂಕುಗಳಿಗೆ ನಡೆಯುವ ಚುನಾವಣೆಗೆ ಹೊಸ ಶಕ್ತಿ ನೀಡಿದಂತಾಗುತ್ತದೆ ಮತ್ತು ಆಡಳಿತ ವಿರೋಧಿ ಅಲೆಯನ್ನು ಹೋಗಲಾಡಿಸಲು ಪಕ್ಷಕ್ಕೆ ಸಹಾಯ ಮಾಡುತ್ತದೆ ಎಂದು ಸಚಿವ ಸ್ಥಾನದ ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಕೂಡ ಸಂಪುಟ ಪುನಾರಚನೆ ಮತ್ತು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುವುದನ್ನು ಬೆಂಬಲಿಸಿದ್ದಾರೆ ಎಂದು ಮತ್ತೊಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಆಯೋಜಿಸಿದ್ದ ಭೋಜನ ಕೂಟ ಕೂಡ ಸಚಿವ ಸಂಪುಟ ಪುನಾರಚನೆ ಮತ್ತು ಸಿಎಂ ಆಗಿ ಮುಂದುವರಿಯಲು ಸಿದ್ದರಾಮಯ್ಯ ಅವರಿಗೆ ಸಹಾಯ ಮಾಡಿದೆ ಎನ್ನಲಾಗುತ್ತಿದ್ದು, ಭೋಜನ ಕೂಟದಲ್ಲಿ ಸಿದ್ದರಾಮಯ್ಯ ಅವರು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆಂದು ಹೇಳಲಾಗುತ್ತಿದೆ.
ಬಿಹಾರ ಚುನಾವಣೆಯ ನಂತರ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಿದರೆ, ಅದು ಡಿಕೆ.ಶಿವಕುಮಾರ್ ಅವರಿಗೆ ಹಿನ್ನಡೆಯಾಗುತ್ತದೆ ಎಂದು ಹೇಳಲಾಗುತ್ತಿದೆ.
ಆದರೆ, ಹೈಕಮಾಂಡ್ ಸಿಎಂ ಅನ್ನು ಬದಲಾಯಿಸುವ ಅಪಾಯವನ್ನು ತೆಗೆದುಕೊಳ್ಳುತ್ತದೆಯೇ ಅಥವಾ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನೇ ಮುಂದುರೆಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.