ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ. ಶಾ ಅವರನ್ನು ಭೇಟಿಯಾಗಲು ನನಗೆ ತಲೆ ಕೆಟ್ಟಿದೆಯಾ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೆಲವರಿಗೆ ನನ್ನ ನೆನಪಿಸಿಕೊಳ್ಳದಿದ್ದರೆ ನಿದ್ದೆಯೇ ಬರುವುದಿಲ್ಲ ಎಂದು ವ್ಯಂಗ್ಯವಾಡಿದರು. ಮೇಕೆದಾಟು ಪ್ರಕರಣದ ವಿಚಾರಣೆ ಮಂಗಳವಾರಕ್ಕೆ ನಿಗದಿಯಾಗಿತ್ತು. ಸಾಂವಿಧಾನಿಕ ಪೀಠದ ವಿಚಾರಣೆ ಇರುವುದರಿಂದ ಈ ಪ್ರಕರಣ ಮುಂದೂಡಿಕೆಯಾಗಿದೆ ಎಂದರು.
ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಿಸಿದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಈ ಬಗ್ಗೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಮಹಾಶಿವರಾತ್ರಿ ಆಚರಣೆ ಸಂಬಂಧ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರ ಸಮ್ಮುಖದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗಿಯಾಗಿದ್ದರು. ಇದರ ಜೊತೆಗೆ ಡಿಕೆ ಶಿವಕುಮಾರ್ ಸಹ ವೇದಿಕೆ ಹಂಚಿಕೊಂಡಿದ್ದರು. ರಾಜಕೀಯದಲ್ಲಿ ಶತ್ರುಗಳಂತೆ ಇರುವ ಇವರಿಬ್ಬರು ಒಂದೇ ವೇದಿಕೆಯಲ್ಲಿ ಕಾಣಸಿಕೊಂಡಿದ್ದಕ್ಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು.