ಬೀದರ್: ಭಾರೀ ಮಳೆ ಮತ್ತು ಮಹಾರಾಷ್ಟ್ರ ಜಲಾಶಯಗಳಿಂದ ನೀರು ಬಿಡುಗಡೆಯಿಂದಾಗಿ ಬೀದರ್ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೋಮವಾರ ಪಕ್ಷದ ಹಿರಿಯ ನಾಯಕರೊಂದಿಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ANI ಜೊತೆ ಮಾತನಾಡಿದ ಬಿ.ವೈ. ವಿಜಯೇಂದ್ರ, "ನಾನು, ನಮ್ಮ ಎಲ್‌ಒಪಿ ಛಲವಾದಿ ನಾರಾಯಣಸ್ವಾಮಿ, ನಮ್ಮ ಹಿರಿಯ ಶಾಸಕರು ಮತ್ತು ಮಾಜಿ ಸಚಿವ ಪ್ರಭು ಚೌಹಾಣ್ ಅವರೊಂದಿಗೆ ಬೀದರ್‌ನ ಪ್ರಹಾವ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇವೆ. ಮಹಾರಾಷ್ಟ್ರ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿರುವುದರಿಂದ ಭಾರೀ ಮಳೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ" ಎಂದರು.
ಪ್ರವಾಹದಿಂದ ಹಾನಿಗೊಳಗಾದ ರೈತರು ಮತ್ತು ಕುಟುಂಬಗಳಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು ಎಂದು ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.
"ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಂತ್ರಸ್ತ ರೈತರು ಮತ್ತು ಮನೆ ಕಳೆದುಕೊಂಡ ಜನರಿಗೆ ಪರಿಹಾರ ಒದಗಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ತೀವ್ರ ಪ್ರವಾಹ ಉಂಟಾಗಿತ್ತು ಮತ್ತು ಅವರು ಕೇಂದ್ರ ಸರ್ಕಾರದ ಹಣಕ್ಕಾಗಿ ಕಾಯದೆ ಕರ್ನಾಟಕದಾದ್ಯಂತ ಪ್ರಯಾಣಿಸಿ, ತಕ್ಷಣವೇ ಪರಿಹಾರವನ್ನು ಬಿಡುಗಡೆ ಮಾಡಿದ್ದರು. ಸಿದ್ದರಾಮಯ್ಯ ಅವರು ಅದೇ ರೀತಿ ವರ್ತಿಸಬೇಕೆಂದು ನಾನು ಒತ್ತಾಯಿಸುತ್ತೇನೆ" ಎಂದು ವಿಜಯೇಂದ್ರ ಹೇಳಿದರು.
ಏತನ್ಮಧ್ಯೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್(RDPR) ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲೆಯ ಮಳೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರು ಮತ್ತು ಸಂತ್ರಸ್ತ ಜನರ ಕುಂದುಕೊರತೆಗಳನ್ನು ಆಲಿಸಿದರು ಎಂದು RDPR ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ(PRO) ತಿಳಿಸಿದ್ದಾರೆ.