ದಾವಣಗೆರೆ/ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಸೋಮವಾರ ಭಾರೀ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಸರ್ಕಾರ 2023ರಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಆಧಾರದ ಮೇಲೆ ಜನರಿಂದ ಮತ ಕೇಳುತ್ತಿರುವುದಾಗಿ ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ಜನಸಾಮಾನ್ಯರ ಹಿತಾಸಕ್ತಿಗೆ ಒತ್ತು ನೀಡಿದೆ. ಗ್ಯಾರಂಟಿ ಯೋಜನೆಗಳು ಜನರ ಜೀವನದಲ್ಲಿ ಸ್ಪಷ್ಟ ಬದಲಾವಣೆ ತಂದಿವೆ ಎಂದು ಅಭಿಪ್ರಾಯಪಟ್ಟರು.
ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಸೇರಿದಂತೆ ಹಲವು ಯೋಜನೆಗಳು ಜನರಿಗೆ ನೇರ ಪ್ರಯೋಜನ ನೀಡುತ್ತಿದೆ ಎಂದು ಹೇಳಿದರು.
ಇದೇ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹಲವು ಬಾರಿ ಗೆದ್ದಿರುವ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಸೇವೆಯನ್ನು ಉಲ್ಲೇಖಿಸಿದ ಸಿದ್ಧರಾಮಯ್ಯ ಅವರು, ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು, ಈ ಬಾರಿ ಸಮರ್ಥ್ ಶಾಮನೂರನ್ನು ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡಿದರು. ಈ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಶಾಮನೂರಿನ ಕೊಡುಗೆ ಮಹತ್ತರವಾಗಿದೆ ಎಂದು ಹೇಳಿದರು.
ಬಳಿಕ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಯಾವುದೇ ಗಮನಾರ್ಹ ಅಭಿವೃದ್ಧಿ ಮಾಡಿಲ್ಲ, ಭ್ರಷ್ಟಾಚಾರದಲ್ಲಿ ಮುಳುಗಿತ್ತು ಎಂದು ಆರೋಪಿಸಿದರು. ಟೀಕೆಗಳ ಮೂಲಕ ಮಾತ್ರ ಮತ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದರು.
ಬಿಜೆಪಿ ಆರೋಪಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಮಾಡಿದ ಆರೋಪಗಳನ್ನು ನೆನಪಿಸಿದರು.
“ಇಷ್ಟೊಂದು ದೊಡ್ಡ ಮೊತ್ತದ ಭ್ರಷ್ಟಾಚಾರದ ಆರೋಪಗಳ ನಡುವೆ ಅವರು ನಮ್ಮ ಮೇಲೆ ಟೀಕೆ ಮಾಡಲು ನೈತಿಕ ಹಕ್ಕು ಹೊಂದಿದ್ದಾರೆಯೇ..?” ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಸಮಾಜವನ್ನು ವಿಭಜಿಸುವುದಿಲ್ಲ. ಬಿಜೆಪಿ ಮಾತ್ರ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸುವ ರಾಜಕಾರಣ ಮಾಡುತ್ತದೆ ಎಂದು ಆರೋಪಿಸಿದರು.