ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದ್ದು, ಒಂದು ಕಡೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಟ್ಟ ಮಾತು ನೆನಪಿಸುತ್ತಿದ್ದರೆ, ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಮಾತೇ ಅಂತಿಮ ಎನ್ನುತ್ತಿದ್ದಾರೆ.
ಸಿಎಂ ಕುರ್ಚಿ ಕಾಳಗದ ನಡುವೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಮೈಸೂರಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನ ಅವರನ್ನು ಜಂಟಿಯಾಗಿ ಸ್ವಾಗತಿಸಿದರು.
ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿ, ಮೈಸೂರು ಅರಮನೆ ಮಾದರಿಯನ್ನು ಉಡುಗೊರೆಯಾಗಿ ನೀಡಿದರು. ಬಳಿಕ ರಾಹುಲ್ ಗಾಂಧಿ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ತೆರಳಿದರು.
ಸಂಜೆ ಮತ್ತೆ ರಾಹುಲ್ ಗಾಂಧಿ
ಸಂಜೆ ತಮಿಳುನಾಡಿನಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಅವರು ಇಬ್ಬರೂ ನಾಯಕರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿಯನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತನಾಡಿದ್ದಾರೆ. ಬಳಿಕ ರಾಹುಲ್ ಗಾಂಧಿ ಡಿಕೆಶಿಯನ್ನು ಬಿಟ್ಟು ಸಿದ್ದರಾಮಯ್ಯನವರನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ ಚುಟುಕು ಮಾತುಕತೆ ನಡೆಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.