ಬೆಂಗಳೂರು: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ರಾಜ್ಯದಲ್ಲಿ ವಿಶೇಷವಾಗಿ ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ.
ಈ ಬಗ್ಗೆ ಇಂದು ನಗರದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ತಮ್ಮ ಪಕ್ಷ ಜೆಡಿಎಸ್, ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಶೇಷವಾಗಿ ಬೆಂಗಳೂರಿನಲ್ಲಿ ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿಟ್ಟಿದೆ ಎಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರ ಉಪಸ್ಥಿತಿಯಲ್ಲಿ ನಡೆದ ಗ್ರೇಟರ್ ಬೆಂಗಳೂರು ಚುನಾವಣೆ ಕುರಿತ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿಗೆ ಧಕ್ಕೆಯಾಗದಂತೆ ಕಾರ್ಯಕರ್ತರು, ಮುಖಂಡರು ಕೆಲಸ ಮಾಡಬೇಕು. ಹೆಚ್ಚು ವಾರ್ಡುಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಗ್ಗಟ್ಟಾಗಿ ದುಡಿಯಬೇಕು ಎಂದು ಕುಮಾರಸ್ವಾಮಿ ಒತ್ತಿ ಹೇಳಿದ್ದಾರೆ.
ಆದರೆ ಕುಮಾರಸ್ವಾಮಿ ಅವರ ಈ ಹೇಳಿಕೆಯು ಅವರ ತಂದೆ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹೇಳಿಕೆಗೆ ವಿರುದ್ಧವಾಗಿದೆ. ದೇವೇಗೌಡರು, ಬಿಜೆಪಿಯೊಂದಿಗೆ ಜೆಡಿ(ಎಸ್) ಮೈತ್ರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಮಾತ್ರ ಸೀಮಿತವಾಗಿದೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಇದು ಅನ್ವಯವಾಗುವುದಿಲ್ಲ ಎಂದಿದ್ದಾರೆ.
ಜೆಡಿಎಸ್ ವರಿಷ್ಠ ದೇವೇಗೌಡರು ತಮ್ಮ ಪಕ್ಷವು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಅದ್ಭುತ ವಿಜಯಕ್ಕಾಗಿ ಅಭಿನಂದನೆ ಸಲ್ಲಿಸಿದರು.
ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜೊತೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೂ ತಮ್ಮ ಪಕ್ಷ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತು ದೇವೇಗೌಡರ ನಿರ್ಧಾರದ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ, "ನಾವು ನಮ್ಮ ಆಯ್ಕೆಗಳನ್ನು ಮುಕ್ತವಾಗಿಟ್ಟಿದ್ದೇವೆ. ಮೈತ್ರಿಕೂಟದ ಬಗ್ಗೆ ಯಾವುದೇ ಗೊಂದಲ ಇರಬಾರದು ಎಂಬುದು ನಮ್ಮ ಅಭಿಪ್ರಾಯ" ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಹೊರಹೊಮ್ಮಬಹುದಾದ ರಾಜಕೀಯ ಬೆಳವಣಿಗೆಗಳು ಮತ್ತು ಸ್ಥಳೀಯ ಬಿಜೆಪಿ ನಾಯಕರ ನಿರ್ಧಾರಗಳನ್ನು ನಾವು ಪರಿಗಣಿಸಬೇಕು. ಕಾಂಗ್ರೆಸ್ "ದುರಾಡಳಿತ" ವನ್ನು ಕೊನೆಗೊಳಿಸುವುದು ನಮ್ಮ ಪಕ್ಷದ ಉದ್ದೇಶವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಬೆಂಗಳೂರಿನಲ್ಲಿ ಮೂಲಸೌಕರ್ಯವನ್ನು ಸರ್ವನಾಶ ಮಾಡಿದ್ದಾರೆ. ಕಾಲಿಟ್ಟ ಕಡೆಯಲ್ಲೆಲ್ಲಾ ಗುಂಡಿಗಳು ಕಾಣುತ್ತವೆ. ತೆರಿಗೆ, ಬೆಲೆ ಹೇರಿಕೆಯಿಂದ ಜನರನ್ನು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ. ಇದಕ್ಕೆಲ್ಲ ತಕ್ಕ ಪಾಠ ಕಲಿಸಲು ಜನರು ಸಿದ್ಧರಾಗಿದ್ದಾರೆ. ಹೀಗಾಗಿ ನಾವು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕುಮಾರಸ್ವಾಮಿ ಹೇಳಿದರು.