ಬೆಂಗಳೂರು: ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಈ ಫಲಿತಾಂಶ ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಡಿಯಲ್ಲಿರುವ ಐದು ಪಾಲಿಕೆಗಳಲ್ಲಿ ನಡೆಯುವ ಚುನಾವಣೆಯಲ್ಲಿಯೂ ಪ್ರತಿಧ್ವನಿಸಲಿದೆ ಎಂದು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಬಿಎ ಚುನಾವಣೆಯಿಂದ ದೂರ ಹೋಗುವ ಪ್ರಯತ್ನವನ್ನೇ ಅವರು ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಬಂದಂಥ ಫಲಿತಾಂಶವು ಬೆಂಗಳೂರಿನ ಜಿಬಿಎ ಚುನಾವಣೆಯಲ್ಲೂ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿಯವರ ಜನಪ್ರಿಯತೆ ಇಡೀ ದೇಶದಲ್ಲಿ ದಿನೇದಿನೇ ಹೆಚ್ಚಾಗುತ್ತಿದೆ. ಅದು ಭಾರತಕ್ಕೆ ಶಕ್ತಿಯನ್ನು ಕೊಟ್ಟಿದೆ. ಅಲ್ಲದೇ ಬಿಜೆಪಿಗೂ ಬಲವನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ನಿರೀಕ್ಷಿತ ಫಲಿತಾಂಶವೇ ಬಂದಿದೆ. ಮಹಾರಾಷ್ಟ್ರ ಮಾತ್ರವಲ್ಲ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ತಾವು ನೋಡಿದ್ದೀರಿ. ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳ ಅಬ್ಬರದ ನಡುವೆಯೂ ನಾವು ಕರ್ನಾಟಕದಲ್ಲಿ 19 ಸ್ಥಾನಗಳನ್ನು ಗೆದ್ದಿದ್ದೆವು ಎಂದು ತಿಳಿಸಿದರು.
ಇದೊಂದು ಐತಿಹಾಸಿಕ ಗೆಲುವು. ಮಹಾರಾಷ್ಟ್ರದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಫಲಿತಾಂಶವನ್ನು ಅಲ್ಲಿನ ಮತದಾರರು ನೀಡಿದ್ದಾರೆ ಎಂದು ಹೇಳಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಈಗ ಮಹಾರಾಷ್ಟ್ರದ ಪ್ರತಿಷ್ಠಿತ ಬಿಎಂಸಿ (BMC) ಸೇರಿದಂತೆ ಪುಣೆ, ನಾಗಪುರ ಹಾಗೂ ರಾಜ್ಯದ ಎಲ್ಲಾ ಪ್ರಮುಖ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ್ ಶಿಂಧೆ ಬಣ) ಮೈತ್ರಿಕೂಟ ಮತ್ತೊಮ್ಮೆ ಅಭೂತಪೂರ್ವ ಜಯಭೇರಿ ಬಾರಿಸಿದ್ದು ಇದು ಜನತೆ ಮತ್ತೊಮ್ಮೆ ಬಿಜೆಪಿಯ ಅಭಿವೃದ್ಧಿ ರಾಜಕಾರಣಕ್ಕೆ ಮನ್ನಣೆ ನೀಡಿದ್ದಾರೆಂದು ಹೇಳಿದ್ದಾರೆ.
ಮುಂಬೈ ಮಹಾನಗರದ ಜನತೆ ಬಿಜೆಪಿಗೆ ಬೆಂಬಲಿಸಿದಂತೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿಯೂ ಸಹ ಬೆಂಗಳೂರಿನ ಮಹಾ ಜನತೆ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಆಶೀರ್ವಾದ ಮಾಡಲಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪತನದ ಹಾದಿ ಆರಂಭವಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿ, GBA ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಗಳಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಕ್ಕೆ ಗೆಲುವು ಸಿಗುವುದು ಖಚಿತ ಎಂದು ಹೇಳಿದ್ದಾರೆ.