ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಇಂದು ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಮ್ಮ ಪಕ್ಷ ರಾಜೀವ್ ಗೌಡಗೆ ಕಾರಣ ಕೇಳಿ ನೋಟಿಸ್ ನೀಡಿತ್ತು. ಆದ್ರೆ ಅವರು ಉತ್ತರ ಕೊಡದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ ಸಿ ಸುಧಾಕರ್ ಅವರು ತಿಳಿಸಿದ್ದಾರೆ.
ಸಚಿವ ಮುನಿಯಪ್ಪನವರು ಸಂಪೂರ್ಣವಾಗಿ ಅವರ ಪರ ಇದ್ದಾರೆ ಎಂದಲ್ಲ, ಬಹಳ ಸೌಮ್ಯ ಸ್ವಭಾವದವನಾಗಿದ್ದ ರಾಜೀವ್ ಗೌಡ ಹೀಗೆ ಮಾತಾಡಿದ್ದು ಆಶ್ಚರ್ಯ ತಂದಿದೆ. ತಪ್ಪು ಎಂದೆ ಅವರೂ ಹೇಳಿದ್ರು, ನಾನು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇನೆ, ಅವರನ್ನ ಇಂದಲ್ಲ ನಾಳೆ ಬಂದಿಸುತ್ತೇವೆ ಎಂದರು.