ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

99 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ ಸ್ಥಿತಿಗೆ ತಲುಪಿದ್ದೀರಿ, ಆತ್ಮಾವಲೋಕನ ಮಾಡಿಕೊಳ್ಳಿ: ಕಾಂಗ್ರೆಸ್ ಕುರಿತು ವಿಜಯೇಂದ್ರ ಟೀಕೆ

ಬಡತನ ನಿರ್ಮೂಲನೆ ಮಾಡುತ್ತೇವೆ. ಗರೀಬಿ ಹಠಾವೋ ಎಂದು ಹೇಳಿ, ಈ ದೇಶದ ಬಡವರಿಗೂ ಮಕ್ಮಲ್ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಿದ ಪರಿಣಾಮವಾಗಿ ಇಂಥ ಹೀನಾಯ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ದೇಶ ಮತ್ತು ರಾಜ್ಯದಲ್ಲಿ ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
Manjula VN
Updated On : 31 Jan 2026, 11:00 am

ಬೆಂಗಳೂರು: 1984‌ ರಲ್ಲಿ ಸುಮಾರು 415 ಸಂಸದರನ್ನು ಹೊಂದಿದ್ದ ಕಾಂಗ್ರೆಸ್‌, ಇಂದು 99 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ ಸ್ಥಿತಿಗೆ ತಲುಪಿದೆ. ಒಂದು ಕ್ಷಣ ನಿಂತು ಈ ಸ್ಥಿತಿಗೆ ಏಕೆ ತಲುಪಿದೆವು ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಂಥ ಹೀನಾಯ ಪರಿಸ್ಥಿತಿ ಬಂದಿದೆ ಎಂದು ಒಂದು ಕ್ಷಣ ಯೋಚಿಸಬೇಕಾಗುತ್ತದೆ. ಹಿಂದೆ ಸೀತೆಯನ್ನು ರಾವಣ ಅಪಹರಿಸಿ ಲಂಕೆಗೆ ತೆಗೆದುಕೊಂಡು ಹೋದನೋ, ಅದೇ ರೀತಿ ಕಾಂಗ್ರೆಸ್ಸಿನವರು ಮಹಾತ್ಮ ಗಾಂಧಿಯವರ ಹೆಸರನ್ನು ಬಳಸಿಕೊಂಡಿದೆ. ಈ ನಕಲಿ ಕಾಂಗ್ರೆಸ್ ಪಕ್ಷವು, ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು.

ಬಡತನ ನಿರ್ಮೂಲನೆ ಮಾಡುತ್ತೇವೆ. ಗರೀಬಿ ಹಠಾವೋ ಎಂದು ಹೇಳಿ, ಈ ದೇಶದ ಬಡವರಿಗೂ ಮಕ್ಮಲ್ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಿದ ಪರಿಣಾಮವಾಗಿ ಇಂಥ ಹೀನಾಯ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ದೇಶ ಮತ್ತು ರಾಜ್ಯದಲ್ಲಿ ಬಂದಿದೆ ಎಂದು ಹೇಳಿದರು.

Advertisement

Advertisement

ಕಾಂಗ್ರೆಸ್ ಪಕ್ಷವು ದೇಶದಲ್ಲಿ ಇಂಥ ಹೀನಾಯ ಪರಿಸ್ಥಿತಿಗೆ ಇವತ್ತು ಯಾಕೆ ಬಂದಿದೆ ಎಂದು ಬೆಳಕು ಚೆಲ್ಲಬೇಕಾಗಿತ್ತು. ಈ ದೇಶದಲ್ಲಿ 1961ರಲ್ಲಿ ಕಾಂಗ್ರೆಸ್ಸಿನ 364 ಸಂಸದರಿದ್ದು, 1984ರಲ್ಲಿ 415 ಸಂಸದರು ಸಂಸತ್ತಿನಲ್ಲಿದ್ದರು ಎಂದು ಗಮನಕ್ಕೆ ತಂದರು.

ನಮ್ಮ ರಾಜ್ಯದಿಂದ ಜಿಎಸ್‍ಟಿ ತೆರಿಗೆ ಮೂಲಕ ಕೇಂದ್ರಕ್ಕೆ ಎಷ್ಟು ಮೊತ್ತ ಹೋಗಿದೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿವೆ ಎಂದ ಅವರು, ಆಡಳಿತ ಪಕ್ಷದವರ ಮಾತನ್ನು ಕೇಳುತ್ತಿದ್ದರೆ ನಮ್ಮ ರಾಜ್ಯದ ತೆರಿಗೆ ಹಣದಿಂದ ಕೇಂದ್ರ ಸರಕಾರವು ಬಹಳ ಭ್ರಷ್ಟಾಚಾರ ಮಾಡಿದೆ; ಲೂಟಿ ಮಾಡಿದೆ; ಈ ದೇಶದಲ್ಲಿ, ರಾಜ್ಯದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂಬ ಅರ್ಥದಲ್ಲಿ ಮಾತನಾಡುತ್ತಿದ್ದಾರೆ. ಇದು ಒಂದು ರೀತಿ ಅರ್ಥಹೀನ ಎಂದು ತಿಳಿಸಿದರು.

ನಮ್ಮ ರಾಜ್ಯ ಮತ್ತು ಹೊರರಾಜ್ಯಗಳಿಂದ ತೆರಿಗೆ ಮೂಲಕ ಕೇಂದ್ರವು ಜಿಎಸ್‍ಟಿ ಸಂಗ್ರಹ ಮಾಡುತ್ತಿದೆ. ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ, ಇಡೀ ದೇಶದಲ್ಲಿ 2 ಜಿ ಸ್ಕ್ಯಾಮ್, ಕಲ್ಲಿದ್ದಲು ಹಗರಣ, ಕಾಮನ್‍ವೆಲ್ತ್ ಗೇಮ್ಸ್ ಹಗರಣದ ಚರ್ಚೆ ಆಗುತ್ತಿತ್ತು. ಈ ದೇಶದಲ್ಲಿ ಅಭಿವೃದ್ಧಿ ಕುರಿತು ಚರ್ಚೆಯೇ ಆಗುತ್ತಿರಲಿಲ್ಲ. ಭ್ರಷ್ಟಾಚಾರದ ಬಗ್ಗೆಯೇ ಚರ್ಚೆ ನಡೆಯುತ್ತಿತ್ತು. ಆದರೆ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಅದರಲ್ಲೂ ವಿಶೇಷವಾಗಿ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ಅಧಿಕಾರ ನಡೆಸುವ ನಂತರದಲ್ಲಿ ಇವತ್ತು ಈ ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಚರ್ಚೆ ಆಗುತ್ತಿಲ್ಲ.

Also Read

ಸಿದ್ದರಾಮಯ್ಯ ಸರ್ಕಾರ ಕುಡುಕರ ರಾಜ್ಯವನ್ನಾಗಿ ಮಾಡುತ್ತಿದೆ: ಬಿ.ವೈ ವಿಜಯೇಂದ್ರ

2014ರಿಂದ 2025ರ ಅವಧಿಯಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ವಿರುದ್ಧ ಯಾವುದೇ ಒಂದು ಭ್ರಷ್ಟಾಚಾರದ ಆರೋಪ ಮಾಡಲು ಕಾಂಗ್ರೆಸ್ಸಿನವರಿಗೆ ಸಾಧ್ಯವಾಗಿಲ್ಲ.ನರೇಂದ್ರ ಮೋದಿಯವರು ಆ ರೀತಿಯ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವುದನ್ನು ಈ ದೇಶದ ಜನರು ಚರ್ಚೆ ಮಾಡುತ್ತಿದ್ದಾರೆ ಎಂದು ಗಮನ ಸೆಳೆದರು.

ಇವತ್ತು ದೇಶದಲ್ಲಿ ವಿಕಸಿತ ಭಾರತದ ಕುರಿತು ಚರ್ಚೆ ಆಗುತ್ತಿದೆ. ಭಾರತದ ಅಭಿವೃದ್ಧಿ ಪಥದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಜಿಎಸ್‍ಟಿ ವಿಷಯದಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯ ಆಗುತ್ತಿದೆ ಎಂಬ ಚರ್ಚೆ ಆಗುತ್ತಿದೆ. ಆದರೆ, ದೇಶದಲ್ಲಿ 2014ರಿಂದ 2025ರ ನಡುವೆ ಆಗಿರುವ ಆಡಳಿತದಲ್ಲಿನ ಆಮೂಲಾಗ್ರ ಬದಲಾವಣೆ ಕುರಿತು ಯಾರೂ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.

ಕೇಂದ್ರ ಸರಕಾರವು ಜಿಎಸ್‍ಟಿಯ ಲಕ್ಷಾಂತರ ಕೋಟಿ ಮೊತ್ತವನ್ನು ಬಂಡವಾಳವಾಗಿ ಹೂಡುತ್ತಿರುವ ಕುರಿತು ಚರ್ಚೆ ಮಾಡಬೇಕಿದೆ. ಮೋದಿಯವರ ಸರಕಾರವು ಈ ದೇಶದ ಮೂಲಭೂತ ಸೌಕರ್ಯ, ಭದ್ರತಾ ವ್ಯವಸ್ಥೆ, ಉದ್ಯೋಗ ಸೃಷ್ಟಿ ಕ್ಷೇತ್ರಕ್ಕೆ ಆದ್ಯತೆಯಿಂದ ಹಣ ನೀಡುತ್ತಿದೆ. ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರವು ರಾಷ್ಟ್ರ ಮೊದಲು ಚಿಂತನೆಯಡಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಮುಂದಾಗಿದೆ ಎಂದು ವಿವರಿಸಿದರು.

ರಕ್ಷಣಾ ಬಜೆಟ್ ಮೊತ್ತ ಹಲವು ಪಟ್ಟು ಹೆಚ್ಚಾಗಿದೆ. ಹೆದ್ದಾರಿಯ ನಿರ್ಮಾಣವೂ ಭರದಿಂದ ಸಾಗಿದೆ ಎಂದು ಗಮನಕ್ಕೆ ತಂದರು. ಉದ್ಯೋಗ ಸೃಷ್ಟಿಗೆ ಪೂರಕವಾಗಿ ಕಾಯ್ದೆಗಳನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ ಎಂದು ತಿಳಿಸಿದರು. ಕೇಂದ್ರ ಸರಕಾರದ ನೀತಿಯ ಪರಿಣಾಮವಾಗಿ ಇಡೀ ದೇಶದಲ್ಲಿ 2 ಲಕ್ಷ ಸ್ಟಾರ್ಟಪ್‍ಗಳಿಗೆ ಅವಕಾಶವಾಗಿದೆ ಎಂದರು. ಯೂನಿಕಾರ್ನ್‍ಗಳೂ ಆರಂಭವಾಗಿದ್ದು, ಇದರಿಂದ 2024ರವರೆಗೆ 16.6 ಲಕ್ಷ ನೇರ ಉದ್ಯೋಗ ದೇಶದಲ್ಲಿ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಸ್ವಾತಂತ್ರ್ಯಾನಂತರದ 60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೂ, ಶೇ 17 ಗ್ರಾಮೀಣ ಜನರಿಗೆ ಮಾತ್ರ ಕುಡಿಯುವ ನೀರಿನ ವ್ಯವಸ್ಥೆ ಆಗಿತ್ತು. ಆದರೆ, ನರೇಂದ್ರ ಮೋದಿಯವರ ಪ್ರಾಮಾಣಿಕ ಪ್ರಯತ್ನದಿಂದಾಗಿ ಶೇ 74 ರಷ್ಟು ಗ್ರಾಮೀಣ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಆಗಿದೆ. ಸುಮಾರು 12 ಕೋಟಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವು ಕೇಂದ್ರ ಸರಕಾರದ ನೇತೃತ್ವದಲ್ಲಿ ಆಗಿದೆ ಎಂದು ನುಡಿದರು.

ಈ ದೇಶದ ಸುರಕ್ಷತೆ ಮತ್ತು ಭದ್ರತೆ ಅಷ್ಟೇ ಮುಖ್ಯವಾದುದು. ಈಶಾನ್ಯ ಭಾಗದ ರಾಜ್ಯಗಳಿಗೆ ಹಿಂದಿನ ಕೇಂದ್ರ ಸರಕಾರವು ಗಮನ ಕೊಡುತ್ತಿರಲಿಲ್ಲ. ಆದರೆ, ನರೇಂದ್ರ ಮೋದಿಯವರ ಸರಕಾರ ಆಡಳಿತ ವಹಿಸಿಕೊಂಡ ಬಳಿಕ ಕಳೆದ 10 ವರ್ಷಗಳಲ್ಲಿ 6.5 ಲಕ್ಷ ಕೋಟಿ ನೀಡಿದ್ದು, ಅಲ್ಲಿ ಹೆದ್ದಾರಿ ನಿರ್ಮಾಣ, ಮೂಲಭೂತ ಸೌಕರ್ಯಗಳಿಗಾಗಿ ಖರ್ಚು ಮಾಡಿದ್ದಾರೆ ಎಂದರು.

ಇಡೀ ದೇಶದಲ್ಲಿ ಇವತ್ತು ನಕ್ಸಲಿಸಂ ಬಗ್ಗೆ ಚರ್ಚೆ ಆಗುತ್ತಿಲ್ಲ; 2014ರ ಮೊದಲಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ನಕ್ಸಲರು ಅಲ್ಲಿ ದಾಳಿ ಮಾಡಿದರು; ಇಲ್ಲಿ ಪೊಲೀಸರು ನಕ್ಸಲರಿಂದ ಸತ್ತರು; ಇಲ್ಲಿ ಬಡವರ ಪ್ರಾಣಹಾನಿ ಆಗಿದೆ ಎಂದು ಪ್ರಕಟವಾಗಿ ಚರ್ಚೆ ಆಗುತ್ತಿತ್ತು. 2014ರ ಪೂರ್ವದಲ್ಲಿ ಹಲವಾರು ರಾಜ್ಯಗಳಲ್ಲಿ ನಕ್ಸಲರ ಕಾಟ ತೀವ್ರವಾಗಿತ್ತು. ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿಯವರ ಸರಕಾರದ ನೀತಿಯಿಂದ, ಅಲ್ಲಿ ಹೆಚ್ಚು ಉದ್ಯೋಗಾವಕಾಶ ಸೇರಿ ಮೂಲಭೂತ ಸೌಕರ್ಯಗಳಿಂದ ನಕ್ಸಲರ ಸಮಸ್ಯೆ ಇಲ್ಲವಾಗಿದೆ ಎಂದು ಗಮನ ಸೆಳೆದರು.

ನಂತರ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪರೋಕ್ಷವಾಗಿ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದರು,

ಮೋದಿ ಸರ್ಕಾರವನ್ನು ಹೊಗಳುವ ರಾಜ್ಯ ಬಿಜೆಪಿ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರವನ್ನು ತಡೆಯಲು ಏನೂ ಮಾಡಲಿಲ್ಲ. ಭ್ರಷ್ಟಾಚಾರವನ್ನು ನಿಯಂತ್ರಿಸಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ" ಎಂದು ಟೀಕಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments