ಬೆಂಗಳೂರಿನಲ್ಲಿ ಶನಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದರು. ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಕೂಡ ಉಪಸ್ಥಿತರಿದ್ದರು. 
ರಾಜಕೀಯ

'ಕೈ' ಕಮಾಂಡ್ ಅಂಗಳದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ; ಹೊಸ ಮುಖಗಳಿಗೆ ಚಾನ್ಸ್; ಬುಧವಾರವೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ..!

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಶಾಸಕರಿಂದಲೂ ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಒತ್ತಡ ಹೆಚ್ಚಾಗಿದೆ. ಈ ಕಾರಣದಿಂದ ಹೈಕಮಾಂಡ್ ಇನ್ನು ವಿಳಂಬ ಮಾಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ವ್ಯಕ್ತವಾಗಿದೆ.

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಮರಳಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ವೇಗ ಸಿಕ್ಕಿದೆ. ಎಲ್ಲವೂ ಯೋಜನೆಯಂತೆ ನಡೆದರೆ ಬುಧವಾರವೇ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.

ಸದ್ಯ ಸಚಿವ ಸಂಪುಟದಲ್ಲಿ 20 ಸ್ಥಾನಗಳು ಖಾಲಿ ಇದ್ದರೂ, ಎಲ್ಲ ಸ್ಥಾನಗಳನ್ನು ಒಂದೇ ಹಂತದಲ್ಲಿ ಭರ್ತಿ ಮಾಡಲಾಗುತ್ತದೆಯೇ ಅಥವಾ ಭಿನ್ನಮತದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕೆಲ ಹುದ್ದೆಗಳನ್ನು ಖಾಲಿ ಉಳಿಸಿಕೊಳ್ಳಲಾಗುತ್ತದೆಯೇ ಎಂಬ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ.

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಶಾಸಕರಿಂದಲೂ ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಒತ್ತಡ ಹೆಚ್ಚಾಗಿದೆ. ಈ ಕಾರಣದಿಂದ ಹೈಕಮಾಂಡ್ ಇನ್ನು ವಿಳಂಬ ಮಾಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ವ್ಯಕ್ತವಾಗಿದೆ.

ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಬೀಳ್ಕೊಟ್ಟರು.

ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ವರಿಷ್ಠರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದರು.

ಪಕ್ಷದ ಮೂಲಗಳ ಪ್ರಕಾರ, ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ಪರವಾಗಿದ್ದು, ರಾಯಚೂರು ಉತ್ತರ ಶಾಸಕ ಬಸನಗೌಡ ದದ್ದಲ್, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್, ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ, ಎ.ಆರ್. ಕೃಷ್ಣಮೂರ್ತಿ, ದಕ್ಷಿಣ ಕನ್ನಡದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ರಾಯಚೂರಿನ ಎಂಎಲ್‌ಸಿ ಎ. ವಸಂತಕುಮಾರ್ ಅವರ ಹೆಸರುಗಳು ಖರ್ಗೆ ಅವರ ಪಟ್ಟಿಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿವೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ, ಆನೇಕಲ್ ಶಾಸಕ ಶಿವಣ್ಣ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ, ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಹಾಗೂ ವಿಧಾನ ಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ ಅವರ ಹೆಸರನ್ನು ಮುಂದಿರಿಸಿದ್ದಾರೆ ಎನ್ನಲಾಗಿದೆ.

ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹಾಗೂ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಸಚಿವ ಸ್ಥಾನ ಸಿಗದಿದ್ದರೆ, ಅವರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ನಾಯಕರಿಗೆ ಸಚಿವ ಸ್ಥಾನ ಕಲ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಟಿ. ನರಸೀಪುರ ಶಾಸಕ ಡಾ. ಎಚ್.ಸಿ. ಮಹದೇವಪ್ಪ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಕನಕಗಿರಿ ಶಾಸಕ ಶಿವರಾಜ್ ತಂಗಡಗಿ, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಕಲಘಟಗಿ ಶಾಸಕ ಸಂತೋಷ್ ಲಾಡ್, ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್, ಯಲಬುರ್ಗ ಶಾಸಕ ಬಸವರಾಜ ರಾಯರೆಡ್ಡಿ, ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ರಾಮದುರ್ಗ ಶಾಸಕ ಅಶೋಕ್ ಎಂ. ಪಟ್ಟಣ, ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಹೆಸರುಗಳನ್ನು ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದಲ್ಲದೆ,ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್, ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಮಾಜಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ಹಾಗೂ ಟಿ.ಬಿ. ಜಯಚಂದ್ರ ಅವರು ತಮ್ಮ ಆಡಳಿತ ಅನುಭವವನ್ನು ಪರಿಗಣಿಸಿ ಮತ್ತೊಮ್ಮೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಹೆಸರೂ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಜೊತೆಗೆ ತಮ್ಮ ಬೆಂಬಲಿಗರ ಹೆಸರುಗಳನ್ನೂ ಅವರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಆದರೆ, ಕಾಂಗ್ರೆಸ್ ಹೈಕಮಾಂಡ್ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ್ದು, ಪಕ್ಷದ ಚುನಾವಣಾ ತಂತ್ರಗಾರ ಸುನೀಲ್ ಕನುಗೋಳು ನಡೆಸಿರುವ ಸಮೀಕ್ಷೆಯ ವರದಿಯನ್ನೂ ಪರಿಶೀಲಿಸಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಗೆಲುವಿನ ಸಾಧ್ಯತೆ, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನದ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.

ಸೋಮವಾರ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿ.ಕೆ. ಹರಿಪ್ರಸಾದ್ ಅವರನ್ನು ಅಂತಿಮ ಸುತ್ತಿನ ಚರ್ಚೆಗಾಗಿ ದೆಹಲಿಗೆ ಕರೆಯುವ ಸಾಧ್ಯತೆ ಇದೆ. ಮಂಗಳವಾರ ಸಂಜೆ ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನು ವಿಧಾನಸಭೆಯ ನೂತನ ಸಭಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆಯೂ ಇದೆ ಎಂದು ಪಕ್ಷದ ವಲಯದಲ್ಲಿ ಚರ್ಚೆಯಾಗುತ್ತಿದೆ.

ಇನ್ನೊಂದೆಡೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಕೂಡ ಶನಿವಾರ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಆಡಳಿತಾತ್ಮಕ ವಿಷಯಗಳು ಹಾಗೂ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಖರ್ಗೆ ಅವರೊಂದಿಗೆ ಸೌಹಾರ್ದಯುತ ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಗಾರು ಅಧಿವೇಶನ ಹಿನ್ನಲೆ ದೆಹಲಿಯಲ್ಲಿ ನಿಷೇಧಾಜ್ಞೆ; CJP 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!

178 ತಾಲೂಕುಗಳಲ್ಲಿ ಮಳೆ ಕೊರತೆ: ಸಿಎಂ ಡಿ.ಕೆ ಶಿವಕುಮಾರ್

'ವಂದೇ ಮಾತರಂ'ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾ

ಚಿಕಿತ್ಸೆ ವೇಳೆ ಫ್ಯಾನ್ ಬಿದ್ದು ರೋಗಿ ಸಾವು: ಸರ್ಕಾರಿ ಆಸ್ಪತ್ರೆಯಲ್ಲಿ ದುರಂತ; ವ್ಯಾಪಕ ಆಕ್ರೋಶ, Video Viral

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾದ Bollywood Hot ನಟಿ ಪೂನಂ ಪಾಂಡೆ; ಪ್ರತಿಭಟನಾಕಾರರಲ್ಲಿ ಹೆಚ್ಚಿದ ಹುಮ್ಮಸ್ಸು, Video!