ಬೆಳಗಾವಿ: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಊಹಾಪೋಹಗಳು ಜೋರಾಗಿರುವ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಉಪಮುಖ್ಯಮಂತ್ರಿಯಾಗಿ (ಡಿಸಿಎಂ) ನೇಮಕ ಮಾಡುವ ಸಾಧ್ಯತೆಗಳ ಕುರಿತಂತೆಯೂ ಚರ್ಚೆಗಳು ತೀವ್ರಗೊಂಡಿವೆ.
ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯಿಸಿರುವ ಜಾರಕಿಹೊಳಿ ಅವರು, ತಮಗೂ ಡಿಸಿಎಂ ಆಗುವ ಅವಕಾಶ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
'ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್'ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, "ಇನ್ನೂ ಎರಡು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ. ನನಗೂ ಅವಕಾಶ ಸಿಗುವ ನಿರೀಕ್ಷೆಯಿದೆ. ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕೇ ಎಂಬುದರ ಬಗ್ಗೆ ಅಂತಿಮ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ" ಎಂದು ತಿಳಿಸಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ, ರಾಜ್ಯದ ವಿವಿಧ ಪ್ರದೇಶಗಳು ಹಾಗೂ ಸಮುದಾಯಗಳಿಗೆ ಸೂಕ್ತ ಪ್ರತಿನಿಧಿತ್ವ ಕಲ್ಪಿಸುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಎರಡು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕಾರ್ಯತಂತ್ರದ ಭಾಗವಾಗಿಯೂ ಈ ಕ್ರಮವನ್ನು ಪರಿಗಣಿಸಲಾಗುತ್ತಿದೆ ಎಂದು ತಿಳಿದುಬಂದಿದೆ,
ಈ ಹುದ್ದೆಗಳಿಗೆ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ. ಪಾಟೀಲ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇತ್ತೀಚಿನ ದಿನಗಳಲ್ಲಿ ಜಾರಕಿಹೊಳಿ ಅವರು ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪ್ರಚಾರ ಮಾಡುವ ಮೂಲಕ ಅಹಿಂದ ಮತಬ್ಯಾಂಕ್ ಅನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನ ನಡೆಸುತ್ತಿದ್ದಾರೆ.
ವಿವಿಧ ಸಮುದಾಯಗಳಲ್ಲಿ ಹೊಂದಿರುವ ಸ್ವೀಕಾರಾರ್ಹತೆ, ಸಂಘಟನಾ ಸಾಮರ್ಥ್ಯ, ಇತ್ತೀಚಿನ ಉಪಚುನಾವಣೆಗಳಲ್ಲಿ ನಡೆಸಿದ ಪರಿಣಾಮಕಾರಿ ಪ್ರಚಾರ ಹಾಗೂ ಕಾಂಗ್ರೆಸ್‌ನ ಸಾಮಾಜಿಕ ನೆಲೆಯನ್ನು ವಿಸ್ತರಿಸಲು ಮಾಡಿದ ಪ್ರಯತ್ನಗಳು ಅವರಿಗೆ ಸರ್ಕಾರದಲ್ಲಿ ಉನ್ನತ ಹುದ್ದೆ ಸಿಗುವ ಸಾಧ್ಯತೆಯನ್ನು ಹೆಚ್ಚಿಸಿವೆ ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಗಮನಾರ್ಹವಾಗಿ, ಉತ್ತರ ಕರ್ನಾಟಕ ಭಾಗದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತ್ರ ಉಪಮುಖ್ಯಮಂತ್ರಿಯಾಗಿದ್ದರು. ಇದೀಗ ಮತ್ತೊಮ್ಮೆ ಉತ್ತರ ಕರ್ನಾಟಕಕ್ಕೆ ಡಿಸಿಎಂ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆ ಜೋರಾಗಿದೆ.