ಬೆಂಗಳೂರು: ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಿಂದ ಉಸ್ತುವಾರಿ ಸಮಿತಿ ರಚನೆ ಮಾಡಿ ಕೆಪಿಸಿಸಿಸ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಸಚಿವರು ಸೇರಿದಂತೆ 31 ಮಂದಿಗೆ ಜವಾಬ್ದಾರಿ ನೀಡಲಾಗಿದೆ.
ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ವೈಎಸ್ ಮೇಟಿ ನಿಧನದ ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿದ್ದವು. ಮುಂದಿನ 2-3 ತಿಂಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ.
ಈ ಹಿನ್ನೆಲೆ ಉಸ್ತುವಾರಿ ಸಮಿತಿ ನೇಮಕ ಮಾಡಲಾಗಿದೆ. ಈ ಸಮಿತಿಯು ಅಭ್ಯರ್ಥಿಗಳ ಆಯ್ಕೆ, ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರ ರೂಪಿಸುವ ಬೇಕಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಾಗಿ ಹಾಗೂ ನಮ್ಮ ಅಭ್ಯರ್ಥಿಯು ಜಯಶಾಲಿಯಾಗಲು ಅಗತ್ಯ ಚುನಾವಣಾ ತಂತ್ರಗಳನ್ನು ರೂಪಿಸುವ ಸಲುವಾಗಿ ಎಐಸಿಸಿ ನಿರ್ದೇಶನದ ಮೇರೆಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಾಗಲಕೋಟೆ ಉಸ್ತುವಾರಿ ಸಮಿತಿ:
ಬಾಗಲಕೋಟೆ ಉಪಚುನಾವಣೆ ಉಸ್ತುವಾರಿ ಸಮಿತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಪರಿಷತ್ ಸದಸ್ಯ ವಸಂತಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ.
ಉಳಿದಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಬೈರತಿ ಸುರೇಶ್, ರಹೀಂ ಖಾನ್, ಸಿ.ಎಸ್. ನಾಡಗೌಡ, ರಾಜಶೇಖರ್ ಪಾಟೀಲ್, ವಿಜಯಾನಂದ ಕಾಶಪ್ಪನವರ್, ಎಫ್.ಎಚ್. ಜಕ್ಕಪ್ಪನವರ್, ಬಸನಗೌಡ ಬಾದರ್ಲಿ, ಸೋಮಣ್ಣ ಬೇವಿನಮರದ್ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.
ಅಭ್ಯರ್ಥಿ ಆಯ್ಕೆ ಬಗ್ಗೆ ವರದಿಗೆ ಸೂಚನೆ:
ಸಮಿತಿಗಳು ಸಂಬಂಧಪಟ್ಟ ಕ್ಷೇತ್ರದಲ್ಲಿ ಪಕ್ಷದ ಸಂಭಾವ್ಯ ಅಭ್ಯರ್ಥಿಯನ್ನು ಕೆಪಿಸಿಸಿಗೆ ಶಿಫಾರಸು ಮಾಡಲು ಹಾಗೂ ಸದರಿ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲುವಿಗೆ ಅಗತ್ಯವಾದ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಸಚಿವರು, ಶಾಸಕರು, ಸಂಸದರು, ಜಿಲ್ಲಾ ಹಾಗೂ ಬ್ಲಾಕ್ ಅಧ್ಯಕ್ಷರು ಸೇರಿದಂತೆ ಎಲ್ಲ ನಾಯಕರನ್ನೂ ಸಮಾಲೋಚನೆ ನಡೆಸಿ ಕೆಪಿಸಿಸಿಗೆ ತಕ್ಷಣ ವರದಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.