ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುವ ಖರ್ಗೆ ಅವರು ನಾಯಕತ್ವ ಬದಲಾವಣೆ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ನಾಯಕರು ಪರಮೇಶ್ವರ್ ಅವರನ್ನು ಮುಂದಿನ ಸಿಎಂ ಆಗಿ ಬಿಂಬಿಸಲು ತನ್ನ ಪ್ರಯತ್ನಗಳನ್ನು ಮುಂದುವರೆಸಿದೆ.
ಇದರ ನಡುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಖಾಯಂ ಆಹ್ವಾನಿತರಾಗಿರುವ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಆಪ್ತರು ಎಂದು ಹೇಳಲಾಗುವ ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಅವರು, ಅಖಾಡಕ್ಕಿಳಿದಿರುವಂತೆ ಕಾಣುತ್ತಿದೆ.
ಶುಕ್ರವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ, ಹರಿಪ್ರಸಾದ್ ಅವರು ಪರಮೇಶ್ವರ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾಯಿಸಲು ನಿರ್ಧರಿಸಿದರೆ ಸಿಎಂ ಹುದ್ದೆಗೆ ಕಣಕ್ಕೆ ಇಳಿಯಲು ಸಿದ್ಧರಾಗಿರಬೇಕೆಂದು ಸೂಚಿಸಿದ್ದಾರೆಂದು ಮೂಲಗಳು ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ಈ ಮಹತ್ವದ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
90 ನಿಮಿಷಗಳಿಗೂ ಹೆಚ್ಚು ಕಾಲ ಈ ಸಭೆ ನಡೆದಿದ್ದು, ಅವಕಾಶ ಸಿಕಿದ್ದೇ ಆದರೆ, ದಲಿತ ಕೋಟಾದಡಿಯಲ್ಲಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೇರಿಸುವ ಕುರಿತು ಚರ್ಚೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.
ವಿವಿಧ ಕಾರಣಗಳಿಂದಾಗಿ ಮುಖ್ಯಮಂತ್ರಿ ಹುದ್ದೆಯನ್ನು ಮಲ್ಲಿಕಾರ್ಜುನ ಖರ್ಗೆಯವರು ತಿರಸ್ಕರಿಸುತ್ತಿದ್ದಾರೆಂಬ ಮಾಹಿತಿ ಹರಿಪ್ರಸಾದ್‌ಗೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಊಹಾಪೋಹಗಳ ಕುರಿತು ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್ ಅವರು, “ನಾವು ಒಟ್ಟಾಗಿ ಊಟ ಮಾಡಿದೆವು. ರಾಜಕಾರಣಿಗಳಾಗಿರುವುದರಿಂದ ರಾಜಕೀಯ ಚರ್ಚೆ ಸಹಜ. ಆದರೆ, ಮುಖ್ಯವಾಗಿ ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ಚುನಾವಣಾ ಫಲಿತಾಂಶಗಳ ಬಗ್ಗೆ ಚರ್ಚೆ ನಡೆಸಿದೆವು. ರಾಜ್ಯ ರಾಜಕೀಯದ ಬಗ್ಗೆ ಹೆಚ್ಚಿನ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.
ಇದಲ್ಲದೆ, ಎಸ್‌ಸಿ ಸಮುದಾಯಗಳ ಒಳ ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ರಾಜಕೀಯ ಸಮೀಕರಣಗಳು ಬದಲಾಗುತ್ತಿವೆ. ಅಹಿಂದ ಚಳುವಳಿಯ ನಂತರ ರಾಜಕೀಯದ ದಿಕ್ಕೇ ಬದಲಾಗಿದೆ. ಮುಂದಿನ ದಿನಗಳಲ್ಲಿ ಏನೆಲ್ಲ ಬದಲಾವಣೆಗಳು ಸಂಭವಿಸುತ್ತವೆ ಎಂಬುದನ್ನು ಕಾದು ನೋಡಬೇಕು ಎಂದು ತಿಳಿಸಿದರು.