ಬಿಜೆಪಿ ಪಾದಯಾತ್ರೆ 
ರಾಜಕೀಯ

ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಯತ್ನ: ಬಿಜೆಪಿ ಪ್ರತಿಭಟನೆಯಲ್ಲಿ ವಿಜಯೇಂದ್ರ ವಾಗ್ದಾಳಿ

ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರದ್ಧವೂ ತೀವ್ರ ವಾಗ್ದಾಳಿ ನಡೆಸಿದ ವಿಜಯೇಂದ್ರ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ ಮತ್ತು ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ ಎಂದು ಆರೋಪಿಸಿದರು.

ಕೋಲಾರ: ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ 'ರಾಜಕೀಯಗೊಳಿಸುತ್ತಿದೆ' ಮತ್ತು ಅರಾಜಕತೆಗೆ ಪ್ರಚೋದನೆ ನೀಡಲು ಯುವಜನರನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಂಗಳವಾರ ಕೋಲಾರದಲ್ಲಿ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ನಡೆಸಿತು.

'ಡೂಮ್ ಲೈಟ್ ಸರ್ಕಲ್'ನಿಂದ ಆರಂಭವಾದ ಪಾದಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಿರಂತರ ಜನಪ್ರಿಯತೆಯನ್ನು ಸಹಿಸಿಕೊಳ್ಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಾಧ್ಯವಾಗುತ್ತಿಲ್ಲ ಮತ್ತು ಅವರು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

'ಸರ್ಕಾರ ಬದಲಾವಣೆ' (regime change) ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಪ್ರಸ್ತಾಪಿಸಿದ ವಿಜಯೇಂದ್ರ, ಪ್ರಜಾಸತ್ತಾತ್ಮಕ ಜನಾದೇಶ ಪಡೆದ ಸರ್ಕಾರವನ್ನು ಕಿತ್ತೊಗೆಯಲು ವಿರೋಧ ಪಕ್ಷಗಳು ಯತ್ನಿಸುತ್ತಿವೆ ಎಂದು ದೂರಿದರು.

"ರಾಹುಲ್ ಗಾಂಧಿ ಹತಾಶರಾಗಿದ್ದಾರೆ. ಲೋಕಸಭಾ ಚುನಾವಣೆಗಳಲ್ಲಿ ಪದೇ ಪದೇ ಈ ದೇಶದ ಜನರು, ವಿಶೇಷವಾಗಿ ರಾಜಕೀಯ ಪ್ರಜ್ಞೆಯುಳ್ಳ ಮತದಾರರು ನರೇಂದ್ರ ಮೋದಿ ಅವರಿಗೆ ಆಶೀರ್ವಾದ ನೀಡಿದ್ದಾರೆ. ಇದನ್ನು ಸಹಿಸಿಕೊಳ್ಳಲು ರಾಹುಲ್ ಗಾಂಧಿ ಅವರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ಅವರು ಪ್ರತಿದಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶಾದ್ಯಂತ ಅರಾಜಕತೆಯ ವಾತಾವರಣವನ್ನು ಸೃಷ್ಟಿಸಲು ರಾಹುಲ್ ಗಾಂಧಿ ಯತ್ನಿಸುತ್ತಿದ್ದಾರೆ" ಎಂದು ಆರೋಪಿಸಿದರು.

ದೇಶಾದ್ಯಂತ ಈ ಹಿಂದೆಯೂ ಹಲವು ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದ್ದರೂ, ಕಾಂಗ್ರೆಸ್ ಪಕ್ಷವು ಈಗಿನ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸುತ್ತಿದೆ ಎಂದು ವಿಜಯೇಂದ್ರ ಹೇಳಿದರು.

"ಕಾಂಗ್ರೆಸ್‌ಗೆ SIR ಪ್ರಕ್ರಿಯೆಯ ಮೇಲೆ ನಂಬಿಕೆಯಿಲ್ಲ. ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಮೇಲೂ ನಂಬಿಕೆಯಿಲ್ಲ. ಕೊನೆಗೆ ಸುಪ್ರೀಂ ಕೋರ್ಟ್ ಮೇಲೂ ಅವರಿಗೆ ನಂಬಿಕೆಯಿಲ್ಲ. ಈ ಪಕ್ಷವು ಸಾಂವಿಧಾನಿಕ ಸಂಸ್ಥೆಗಳ ಬಗ್ಗೆಯೇ ಅನುಮಾನ ವ್ಯಕ್ತಪಡಿಸುತ್ತಿದೆ" ಎಂದು ಅವರು ಆರೋಪಿಸಿದರು.

ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರದ್ಧವೂ ತೀವ್ರ ವಾಗ್ದಾಳಿ ನಡೆಸಿದ ವಿಜಯೇಂದ್ರ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ ಮತ್ತು ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ ಎಂದು ಆರೋಪಿಸಿದರು.

"ಹಾಲು ಮತ್ತು ಮೊಸರಿನ ಬೆಲೆ ಏರಿಸಲಾಗಿದೆ. ಇದರಿಂದ ಜನ ಜೀವನ ನಡೆಸುವುದು ಇರಲಿ, ಉಸಿರಾಡುವುದಕ್ಕೂ ಕಷ್ಟಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಹಿಂದೆಂದೂ ಕಾಣದಂತಹ ಸಂಕಷ್ಟವನ್ನು ಎದುರಿಸುತ್ತಿದ್ದು, ಬದುಕುಳಿಯುವುದೇ ಕಷ್ಟಕರವಾಗಿದೆ" ಎಂದು ಅವರು ವಿಜಯೇಂದ್ರ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ': ನಾಲಿಗೆ ಹರಿಬಿಟ್ಟ ನಾರಾಯಣಸ್ವಾಮಿ!

'ಹೆಸರಿಗೆ ಮಾತ್ರ ನಿರ್ಬಂಧ, ಅಂಗಡಿಗಳಲ್ಲಿ ಎಲ್ಲ ರೀತಿಯ ಪಟಾಕಿಗಳೂ ಸಿಗುತ್ತಿವೆ’: ಸುಪ್ರೀಂ ಕೋರ್ಟ್ ಕಳವಳ, ಕೇಂದ್ರಕ್ಕೆ ಖಡಕ್ ಸೂಚನೆ

'ಯಾವಾಗಲೂ PUBG ಆಡುತ್ತಿದ್ದ': ಪಂಚಕುಲ ಶಾಲೆ ದಾಳಿ ಆರೋಪಿ ಬಾಲಕನ ಚಟದ ಕುರಿತು ಅಂಕಲ್ ರೋಚಕ ಮಾಹಿತಿ!

ಉತ್ತರಾಖಂಡ ಹೆಲಿಕಾಪ್ಟರ್ ಅಪಘಾತ ಸ್ಥಳದ ಬಳಿ AAIB ಅಧಿಕಾರಿಗೆ ಅನಾರೋಗ್ಯ

ಹಿಂದೂ ಹಬ್ಬಗಳಲ್ಲಿ ಮಾತ್ರ ಇವರಿಗೆ ಪರಿಸರ ನೆನಪಾಗುತ್ತೆ; ಈದ್, ಬಕ್ರೀದ್ ಬಂದಾಗ...: ನಸೀರುದ್ದೀನ್ ಶಾ, ದಿಯಾ ವಿರುದ್ಧ ಬಿಜೆಪಿ ಕಿಡಿ