ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಕೆ.ಎಂ. ಸುರೇಶ್ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು.
ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಸಲೀಂ ಅಹಮ್ಮದ್ ಅವರು ನೂತನ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.
ಇತ್ತೀಚೆಗೆ ಅಕ್ಟೋಬರ್ 2026ರಲ್ಲಿ ನಡೆದ ಕರ್ನಾಟಕ ವಿಧಾನ ಪರಿಷತ್ತಿನ 2 ಶಿಕ್ಷಕರ ಮತ್ತು 2 ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿ.ಜೆ.ಪಿ ಅಭ್ಯರ್ಥಿಯಾಗಿ ಶಶೀಲ್ ಜಿ. ನಮೋಶಿ, ಪಶ್ಚಿಮ ಪದವೀಧರರ ಕ್ಷೇತ್ರದಿಂದ ಬಿ.ಜೆ.ಪಿ ಅಭ್ಯರ್ಥಿಯಾಗಿ ಎಸ್.ವಿ. ಸಂಕನೂರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದಿಂದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಕೆ.ಎಂ. ಸುರೇಶ್ ಆಯ್ಕೆಯಾಗಿದ್ದರು.
ಈ ವೇಳೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಶಿಕ್ಷಕರು ಮತ್ತು ಪದವೀಧರರು ಸಮಾಜದ ಪ್ರಗತಿಯ ಪ್ರಮುಖ ಶಕ್ತಿಯಾಗಿದ್ದಾರೆ. ಅವರ ಆಶೋತ್ತರಗಳಿಗೆ ಧ್ವನಿಯಾಗಿ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಹಾಗೂ ಪದವೀಧರ ಯುವಜನರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನೂತನ ಸದಸ್ಯರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ, ವಿಧಾನ ಪರಿಷತ್ತಿನ ಘನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ರಾಜ್ಯದ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಉಮಾಶ್ರೀ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ಸದಸ್ಯರಾದ ಟಿ.ಎ. ಶರವಣ, ಎನ್. ರವಿಕುಮಾರ್ ವಿಧಾನ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಹಾಗೂ ಸದಸ್ಯರ ಕುಟುಂಬ ವರ್ಗ ಮತ್ತಿತರರು ಉಪಸ್ಥಿತರಿದ್ದರು.