ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

'ಚುನಾವಣೆ ನಡೆಯುತ್ತೋ ಇಲ್ಲವೋ ಗೊತ್ತಿಲ್ಲ; ಹಿರಿಯೂರು ಟಿಕೆಟ್ ವಿಚಾರದಲ್ಲಿ ಆತುರವಿಲ್ಲ': HD ಕುಮಾರಸ್ವಾಮಿ

ಹಿರಿಯೂರು ಟಿಕೆಟ್ ವಿಚಾರದಲ್ಲಿ ನನಗೆ ಯಾವುದೇ ಆತುರವಿಲ್ಲ. ಚುನಾವಣೆ ನಡೆಯುತ್ತದೆಯೋ ಇಲ್ಲವೋ ಎಂಬುದೂ ನನಗೆ ತಿಳಿದಿಲ್ಲ. ಮೈತ್ರಿಕೂಟದಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದೇ ನನ್ನ ಆದ್ಯತೆ.

ಹೆಚ್.ಡಿ.ಕುಮಾರಸ್ವಾಮಿ
Manjula VN
Updated On : 24 Nov 2026, 8:10 am

ಬೆಂಗಳೂರು: ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಯಾವುದೇ ಆತುರವಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ.

ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ನಡೆಸುವುದು ಮತ್ತು ಹಿರಿಯೂರು ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯ ಗೆಲುವು ಖಚಿತಪಡಿಸಿಕೊಳ್ಳುವುದು ತಮ್ಮ ಆದ್ಯತೆಯಾಗಿದೆ ಎಂದು ಹೇಳಿದರು.

ಚಳಿಗಾಲದ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ರೂಪಿಸಲು ಹಾಗೂ ಪ್ರಸ್ತಾಪಿಸಬೇಕಾದ ಪ್ರಮುಖ ವಿಚಾರಗಳನ್ನು ಚರ್ಚಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗುವುದು. ಅಗತ್ಯಬಿದ್ದರೆ ಮೈತ್ರಿ ಪಕ್ಷವಾದ ಬಿಜೆಪಿಯೊಂದಿಗೂ ಜಂಟಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

Advertisement

Advertisement

ಬಳಿಕ ಹಿರಿಯೂರು ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಹಿರಿಯೂರು ಟಿಕೆಟ್ ವಿಚಾರದಲ್ಲಿ ನನಗೆ ಯಾವುದೇ ಆತುರವಿಲ್ಲ. ಚುನಾವಣೆ ನಡೆಯುತ್ತದೆಯೋ ಇಲ್ಲವೋ ಎಂಬುದೂ ನನಗೆ ತಿಳಿದಿಲ್ಲ. ಮೈತ್ರಿಕೂಟದಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದೇ ನನ್ನ ಆದ್ಯತೆ ಎಂದರು.

ಹಿರಿಯೂರು ಕ್ಷೇತ್ರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪದೇಪದೆ ಭೇಟಿ ನೀಡುತ್ತಿರುವುದನ್ನು ವ್ಯಂಗ್ಯವಾಡಿದ ಕುಮಾರಸ್ವಾಮಿ, ಮುಖ್ಯಮಂತ್ರಿಗಳು ಈ ಕ್ಷೇತ್ರದ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವಂತೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಹಿರಿಯೂರಿನಲ್ಲಿ ಹೆಚ್ಚಾಗಿ ಓಡಾಡುತ್ತಿದ್ದಾರೆ. ಕನಕಪುರದ ಮಾದರಿಯಲ್ಲಿ ಹಿರಿಯೂರನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ಅವರು ಬಯಸಿದ್ದಾರೆಯೇ ಎಂದು ಲೇವಡಿ ಮಾಡಿದರು.

Also Read

ಆಶಾ ಕಾರ್ಯಕರ್ತೆಯರ ಬೇಡಿಕೆ ನ್ಯಾಯಸಮ್ಮತವಾಗಿದೆ; ಸರ್ಕಾರ ಏಕೆ ಗಮನಹರಿಸುತ್ತಿಲ್ಲ: H D ಕುಮಾರಸ್ವಾಮಿ; Video

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯಲು ಮುಂದಾಗಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಈ ವಿಚಾರವನ್ನು ಜೆಡಿಎಸ್ ಚರ್ಚಿಸಲಿದೆ ಎಂದರು. ಹಿಂದೂ ಕಾರ್ಯಕರ್ತ ಪ್ರಮೋದ್ ಮುತಾಲಿಕ್ ತಮ್ಮನ್ನು ಭೇಟಿಯಾಗಿದ್ದು, ಈ ವಿಷಯವನ್ನು ಪಕ್ಷ ಪರಿಶೀಲಿಸಲಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿಲ್ಲ ಎಂಬ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿದರು. ಈ ವೇಳೆ ನೈಸ್ ಯೋಜನೆ ವಿವಾದಕ್ಕೆ ಸಂಬಂಧಿಸಿದ ಲಂಡನ್ ನ್ಯಾಯಾಲಯದ ವಿಚಾರವನ್ನು ಪ್ರಸ್ತಾಪಿಸಿ ವ್ಯಂಗ್ಯವಾಡಿದರು.

"ರಾಜ್ಯ ಸರ್ಕಾರ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತದೆಯೋ ಅಥವಾ ಲಂಡನ್ ನ್ಯಾಯಾಲಯದ ಮೊರೆ ಹೋಗುತ್ತದೆಯೋ ಗೊತ್ತಿಲ್ಲ. ನೈಸ್ ಯೋಜನೆಯ ವಿವಾದವನ್ನು ಲಂಡನ್ ನ್ಯಾಯಾಲಯಕ್ಕೆ ಕೊಂಡೊಯ್ಯಲು ನಿರ್ಧರಿಸಿದವರು ಯಾರು? ಕೇಂದ್ರ ಸರ್ಕಾರ ಬರ ಪರಿಹಾರದ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದಾದರೆ ರಾಜ್ಯ ಸರ್ಕಾರ ಲಂಡನ್ ನ್ಯಾಯಾಲಯದ ಮೊರೆ ಹೋಗಬಹುದು" ಎಂದು ಹೇಳಿದರು.

ಮುಖ್ಯಮಂತ್ರಿ, ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ನಡುವೆ ಉತ್ತಮ ಸಂಬಂಧವಿದೆ ಎನ್ನಲಾಗುತ್ತಿರುವಾಗ ಕೇಂದ್ರದೊಂದಿಗೆ ಸಂಘರ್ಷಕ್ಕೆ ಇಳಿಯುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ನ್ಯಾಯಾಲಯಗಳ ಮೊರೆ ಹೋಗಿರಲಿಲ್ಲ ಅಥವಾ ಕೇಂದ್ರದೊಂದಿಗೆ ಸಂಘರ್ಷಕ್ಕೂ ಇಳಿದಿರಲಿಲ್ಲ. ಮಡಿಕೇರಿಯಲ್ಲಿ ಮನೆ ಕಳೆದುಕೊಂಡವರಿಗೆ ಕೇಂದ್ರದ ನೆರವಿಗಾಗಿ ಕಾಯದೆ ಮನೆಗಳನ್ನು ನಿರ್ಮಿಸಿಕೊಡುವ ವ್ಯವಸ್ಥೆ ಮಾಡಿದ್ದೆ ಎಂದು ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments