ಹಿರಿಯೂರು ಉಪಚುನಾವಣೆ ಟಿಕೆಟ್ ಹಂಚಿಕೆ ಗೊಂದಲ ಮಧ್ಯೆ ಬಿ.ಕೆ. ಹರಿಪ್ರಸಾದ್ ಭೇಟಿ ಮಾಡಿದ ಜಮೀರ್ ಅಹ್ಮದ್; AHINDA ಒಗ್ಗಟ್ಟಿನ ಸಂದೇಶವೇ ?
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮುನ್ನ ಪಕ್ಷದ ಅಹಿಂದ ಬೆಂಬಲ ನೆಲೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.
ಬೆಂಗಳೂರು: ವಸತಿ ಸಚಿವ ಜಮೀರ್ ಅಹಮದ್ ಖಾನ್ ನಿನ್ನೆ ಬುಧವಾರ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮೈಸೂರಿಗೆ ಇಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿರುವುದು ರಾಜಕೀಯ ಮಹತ್ವ ಪಡೆದುಕೊಂಡಿದೆ.
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮುನ್ನ ಪಕ್ಷದ ಅಹಿಂದ ಬೆಂಬಲ ನೆಲೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಸರ್ಕಾರದ ನೇತೃತ್ವ ವಹಿಸಿಕೊಂಡಿದ್ದರೂ, ತಮ್ಮ ರಾಜಕೀಯ ಬಾಂಧವ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂಬ ಸಂದೇಶವನ್ನು ಪ್ರಭಾವಿ ಅಹಿಂದ ನಾಯಕರು ರವಾನಿಸುವ ಪ್ರಯತ್ನ ಇದಾಗಿದೆ ಎಂದು ಈ ಬೆಳವಣಿಗೆಗಳನ್ನು ವಿಶ್ಲೇಷಿಸಲಾಗುತ್ತಿದೆ.
ಜಮೀರ್ ಖಾನ್ ಮತ್ತು ಬಿ ಕೆ ಹರಿಪ್ರಸಾದ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಆದರೆ, ಸಭೆಯ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ. ವಿವಿಧ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿ ಮಾತುಕತೆ ನಡೆಸುತ್ತಿರುವ ಬಿ ಕೆ ಹರಿಪ್ರಸಾದ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿದ್ದಾರೆ. ಪಕ್ಷದ ವಿವಿಧ ಬಣಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಕಾಂಗ್ರೆಸ್‌ನ ಸಾಂಪ್ರದಾಯಿಕ ಅಹಿಂದ ಮತದಾರ ಸಮುದಾಯಗಳನ್ನು ರಾಜಕೀಯವಾಗಿ ಸಂಘಟಿಸುವ ವಿಚಾರದಲ್ಲಿ ಪಕ್ಷ ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಸಿದ್ದರಾಮಯ್ಯನವರಿಗೆ ಆಪ್ತರೆಂದು ಗುರುತಿಸಿಕೊಂಡಿರುವ ಹಲವು ನಾಯಕರು, ಹೊಸ ನಾಯಕತ್ವದ ಅಡಿಯಲ್ಲಿ ತಮ್ಮ ರಾಜಕೀಯ ಪ್ರಸ್ತುತತೆಯನ್ನು ಉಳಿಸಿಕೊಳ್ಳಲು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.
ಸಂವಿಧಾನ ದಿನಾಚರಣೆಯ ಮುನ್ನಾದಿನದಂದು ಪ್ರಮುಖ ಅಹಿಂದ ನಾಯಕರ ಸಮಾಗಮ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಅದರಲ್ಲೂ ಕಾಂಗ್ರೆಸ್ ಹಿರಿಯೂರು ಉಪ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಕುತೂಹಲ ಮೂಡಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಅಹಿಂದ ನಾಯಕರು, ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯಾದರೂ ತಮ್ಮ ಒಗ್ಗಟ್ಟು ಮತ್ತು ರಾಜಕೀಯ ಬಾಂಧವ್ಯಕ್ಕೆ ಯಾವುದೇ ಧಕ್ಕೆಯಾಗಿಲ್ಲ ಎಂಬ ಸಂದೇಶವನ್ನು ರವಾನಿಸಲು ಬಯಸಿದ್ದರು ಎಂದು ತಿಳಿದುಬಂದಿದೆ.
ಇನ್ನೊಂದೆಡೆ, ಹಿರಿಯೂರು ಉಪ ಚುನಾವಣೆ ಕಾಂಗ್ರೆಸ್‌ಗೆ ತಕ್ಷಣದ ಸವಾಲಾಗಿ ಪರಿಣಮಿಸಿದೆ. ಪಕ್ಷದ ಟಿಕೆಟ್‌ಗಾಗಿ ಹಲವು ನಾಯಕರು ಪೈಪೋಟಿ ನಡೆಸುತ್ತಿದ್ದು, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿಯೂ ಬಣ ಭಿನ್ನಾಭಿಪ್ರಾಯಗಳಿವೆ.
ಹಿರಿಯೂರು ಟಿಕೆಟ್‌ಗಾಗಿ ಪೂರ್ಣಿಮಾ ಶ್ರೀನಿವಾಸ್ ಪಟ್ಟು
ಮಾಜಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ಗಾಗಿ ಪ್ರಬಲವಾಗಿ ಬೇಡಿಕೆ ಸಲ್ಲಿಸಿದ್ದಾರೆ. ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಪೂರ್ಣಿಮಾ, ನಿನ್ನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಮಾಜಿ ಸಚಿವ ಹೆಚ್. ಆಂಜನೇಯ ಅವರೊಂದಿಗೂ ಚರ್ಚಿಸಿದರು. ಉಪ ಚುನಾವಣೆಯಲ್ಲಿ ತಮಗೆ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿರುವುದಾಗಿ ಹೇಳಿದ್ದಾರೆ.