ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಕಾಂಗ್ರೆಸ್‌ಗೆ ಟಕ್ಕರ್ ಕೊಡಲು BJP-JDS ಮಾಸ್ಟರ್ ಪ್ಲ್ಯಾನ್; ಮುಂಬರುವ ಎಲ್ಲ ಚುನಾವಣೆಗಳನ್ನೂ ಒಗ್ಗಟ್ಟಿನಿಂದ ಎದುರಿಸಲು ನಿರ್ಧಾರ..!

ಮೈತ್ರಿಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲು ಎರಡೂ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ.

ಎಚ್ ಡಿ ಕುಮಾರಸ್ವಾಮಿ
Manjula VN
Updated On : 27 Nov 2026, 7:40 am

ಬೆಂಗಳೂರು: ರಾಜ್ಯದಲ್ಲಿ ತಮ್ಮ ಮೈತ್ರಿ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮಹತ್ವದ ನಿರ್ಧಾರ ಕೈಗೊಂಡಿವೆ.

ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಒಟ್ಟಾಗಿ ಸ್ಪರ್ಧಿಸಲು ಉಭಯ ಪಕ್ಷಗಳು ನಿರ್ಧರಿಸಿವೆ. ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳನ್ನು ಮೈತ್ರಿಯಾಗಿಯೇ ಎದುರಿಸಲು ಗುರುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮೈತ್ರಿಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲು ಎರಡೂ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ.

Advertisement

Advertisement

ರಾಜ್ಯಮಟ್ಟದ ಸಮಿತಿಯನ್ನು ಮುಂದಿನ ನಾಲ್ಕು ದಿನಗಳಲ್ಲಿ ರಚಿಸುವ ಸಾಧ್ಯತೆಯಿದೆ. ಜಿಲ್ಲಾ ಮಟ್ಟದ ಸಮಿತಿಗಳು ಅಭ್ಯರ್ಥಿಗಳ ಆಯ್ಕೆ ಹಾಗೂ ಪಂಚಾಯಿತಿ ಚುನಾವಣೆಗಳ ಸಿದ್ಧತೆಯ ಜವಾಬ್ದಾರಿ ನಿರ್ವಹಿಸಲಿವೆ.

ರಾಜ್ಯಮಟ್ಟದ ಸಮಿತಿಯಲ್ಲಿ ಬಿಜೆಪಿಯ ಐವರು ಹಾಗೂ ಜೆಡಿಎಸ್‌ನ ನಾಲ್ವರು ಸದಸ್ಯರು ಇರುವ ಸಾಧ್ಯತೆಯಿದೆ. ಇದೇ ಮಾದರಿಯನ್ನು ಜಿಲ್ಲಾ ಸಮಿತಿಗಳಲ್ಲೂ ಅನುಸರಿಸುವ ನಿರೀಕ್ಷೆಯಿದೆ.

ಆದರೆ, ಆಯಾ ಜಿಲ್ಲೆಗಳಲ್ಲಿ ಎರಡೂ ಪಕ್ಷಗಳ ಬಲಾಬಲವನ್ನು ಆಧರಿಸಿ ಸಮಿತಿಗಳ ಸದಸ್ಯರ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ. ಕೆಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರಬಲವಾಗಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಜೆಡಿಎಸ್ ಹೆಚ್ಚಿನ ಪ್ರಾಬಲ್ಯ ಹೊಂದಿದೆ. ಹೀಗಾಗಿ ಯಾವ ಪಕ್ಷ ಹೆಚ್ಚು ಪ್ರಬಲವಾಗಿದೆಯೋ ಆ ಪಕ್ಷಕ್ಕೆ ಜಿಲ್ಲಾ ಸಮಿತಿಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುತ್ತದೆ ಎಂದು ಜೆಡಿಎಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

Also Read

ಹಿರಿಯೂರು ಉಪಚುನಾವಣೆ ಹಗ್ಗ ಜಗ್ಗಾಟ; ನಿಲ್ಲದ ಬಿಜೆಪಿ- ಜೆಡಿಎಸ್ ತಿಕ್ಕಾಟ; ಒಮ್ಮತದ ಅಭ್ಯರ್ಥಿಗಾಗಿ ತಿಣುಕಾಟ: ಡಿ. ಸುಧಾಕರ್ ಪುತ್ರ ಕಣಕ್ಕೆ?

ಏತನ್ಮಧ್ಯೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗಿನ ತಮ್ಮ ಪಕ್ಷದ ಮೈತ್ರಿ ದೀರ್ಘಕಾಲ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿರುವುದನ್ನು ಉಲ್ಲೇಖಿಸಿದ ಅವರು, "ಫಲಿತಾಂಶಗಳು ಜನರು ಮೈತ್ರಿಕೂಟದ ಪರವಾಗಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿವೆ" ಎಂದಿದ್ದಾರೆ.

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಮೈತ್ರಿಕೂಟದ ಗೆಲುವಿಗಾಗಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಕೆಲಸ ಮಾಡಲಿವೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಲು ಬಿಜೆಪಿ ಕೇಂದ್ರ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗುವ ಮುನ್ನವೇ ಈ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ನಾಯಕರು ತಿಳಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ, ಎರಡು ಉಪಚುನಾವಣೆಗಳು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು ಚರ್ಚಿಸಿದ್ದೇವೆ. ನಮ್ಮ ಕೇಂದ್ರ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಎರಡೂ ಪಕ್ಷಗಳ ಹಿರಿಯ ನಾಯಕರು ಭಾಗವಹಿಸಿದ್ದರು.

15 ದಿನಗಳ ಕಾಲ ಅಧಿವೇಶನ ನಡೆಸಲು ಪ್ರತಿಪಕ್ಷಗಳ ಒತ್ತಾಯ

ಏತನ್ಮಧ್ಯೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು 15 ದಿನಗಳ ಕಾಲ ನಡೆಸಬೇಕು ಎಂದು ಆರ್.ಅಶೋಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಹಲವು ಪ್ರಮುಖ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲು ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಹೇಳಿದ್ದಾರೆ.

ನೈಸ್ ಯೋಜನೆ ಹಗರಣ, ಬಿಡದಿಯಲ್ಲಿ ಪ್ರಸ್ತಾಪಿತವಾಗಿರುವ ಟೌನ್‌ಶಿಪ್, ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಬರಪೀಡಿತ ರೈತರಿಗೆ ನೀಡಬೇಕಾದ 2,500 ರೂ. ಪರಿಹಾರ ವಿತರಣೆಯಲ್ಲಿನ ವಿಳಂಬ ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳಿನಿಂದ ಹಣ ಪಾವತಿಸದಿರುವುದು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement