ಮೈಸೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಕಾರ್ಯಾಚರಣೆ ವಿವಾದ ಬೆನ್ನಲ್ಲೇ ನಿನ್ನೆ ಶುಕ್ರವಾರ ತಡರಾತ್ರಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದಿಢೀರನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಮೈಸೂರು ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಕೆಆರ್ ಎಸ್ ಅಣೆಕಟ್ಟಿನ ಬೃಂದಾವನ ಉದ್ಯಾನದಲ್ಲಿ ಕಾವೇರಿ ಮಾತೆಗೆ ಪತ್ನಿ ಜೊತೆಗೂಡಿ ನಿನ್ನೆ ಸಾಯಂಕಾಲ ಆರತಿ ನೆರವೇರಿಸಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬೆಂಗಳೂರಿಗೆ ಆಗಮಿಸುವ ಮಧ್ಯೆ ಮೈಸೂರಿನಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಗೌಪ್ಯವಾಗಿ ಚರ್ಚೆ ನಡೆಸಿದ್ದಾರೆ.
ನಿನ್ನೆ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಯಾಗಿರಲಿಲ್ಲ. ದಿಢೀರನೆ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ. ಇದಕ್ಕೂ ಮುನ್ನ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರು ಕೂಡ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದರು.
ಸ್ಟಿಂಗ್ ಆಪರೇಷನ್ ವಿಚಾರ ಪ್ರಸ್ತಾಪ?
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾತ್ರಿ ಊಟಕ್ಕೆ ಆಗಮಿಸಿದ್ದರು ಎಂದು ಕೆಲವರು ಹೇಳುತ್ತಿದ್ದರೆ, ರಾಜ್ಯದ ಪ್ರಚಲಿತ ರಾಜಕೀಯ ಬೆಳವಣಿಗೆಗಳನ್ನು ಚರ್ಚಿಸಲು ಹೋಗಿದ್ದರು ಎಂದು ಇನ್ನು ಕೆಲವರು ಹೇಳುತ್ತಿದ್ದಾರೆ. ಇತ್ತೀಚೆಗೆ ಚರ್ಚೆಯಲ್ಲಿರುವ ಸ್ಟಿಂಗ್ ಆಪರೇಷನ್ ವಿಚಾರವೂ ಉಭಯ ನಾಯಕರ ಮಾತುಕತೆಯಲ್ಲಿ ಪ್ರಸ್ತಾಪವಾಗಿದೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.
ಈ ವಿಚಾರವಾಗಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿ, ಧೈರ್ಯ ತುಂಬಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಕುರಿತು ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಭೇಟಿಯ ಉದ್ದೇಶ ಹಾಗೂ ಮಾತುಕತೆಯ ನಿಖರ ವಿವರಗಳೂ ಬಹಿರಂಗವಾಗಿಲ್ಲ.