ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಹುದ್ದೆಯಲ್ಲಿ (ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ) 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅಕ್ಟೋಬರ್ 1ರಿಂದ ‘ಬೂತ್ ವಿಜಯ ಸಂಕಲ್ಪ ಯಾತ್ರೆ’ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮೋದಿ ಅವರು ಆರಂಭಿಸಿದ್ದ ಜನಸೇವಾ ಕಾರ್ಯಕ್ರಮಗಳು ಪ್ರಧಾನಿಯಾದ ನಂತರವೂ ಮುಂದುವರಿದಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಒಂದು ತಿಂಗಳ ಅವಧಿಯ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿಜಯೇಂದ್ರ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಪ್ರೀತಂ ಗೌಡ ವಿವರಿಸಿದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಪ್ರವಾಸ
ಎಲ್ಲಾ ಚುನಾವಣಾ ಸವಾಲುಗಳಿಗೆ ತಯಾರು ಮಾಡುವ ನಿಟ್ಟಿನಲ್ಲಿ ಸಭೆಗಳನ್ನು ನಡೆಸಲಾಗುವುದು. ಬೂತ್ ಮಟ್ಟದ ವಿಚಾರಗಳನ್ನು ಇಟ್ಟುಕೊಂಡು ಈ ಬೂತ್ ವಿಜಯ ಸಂಕಲ್ಪ ಯಾತ್ರೆ ನಡೆಸಲಾಗುವುದು. ಹತ್ತನೇ ತಾರೀಕಿನವರೆಗೆ ಹದಿನಾರು ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಮುಂದಿನ ಮೂರು ತಿಂಗಳ ಒಳಗಾಗಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಪ್ರವಾಸ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರದ ಪ್ರಮುಖರ ಸಭೆ ನಡೆಸಲಾಗುವುದು. ಬಿಎಲ್‍ಎ ಹಾಗೂ ಬೂತ್ ಅಧ್ಯಕ್ಷರು, ಕಾರ್ಯಕರ್ತರು, ಇತರ ಚುನಾವಣಾ ಪ್ರತಿನಿಧಿಗಳ ಸಲಹೆ ಪಡೆಯಲಾಗುವುದು ಎಂದರು.
ಬಳ್ಳಾರಿ ಪಾದಯಾತ್ರೆ
ಬಳ್ಳಾರಿ ಚಲೋ ಪಾದಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿದೆ. ಇದರಿಂದಾಗಿ ಸರ್ಕಾರ ಎಚ್ಚೆತ್ತುಕೊಂಡು ವಿಶೇಷ ಅಧಿವೇಶನ ನಡೆಸಿತು. ರಾಜ್ಯದಲ್ಲಿನ ಭಂಡ ಸರ್ಕಾರ ಯಾವ ರೀತಿಯ ಆಡಳಿತ ನೀಡುತ್ತಾ ಇದೆ ಎಂಬುದನ್ನು ಜನರಿಗೆ ತಿಳಿಸಿ ಅದಕ್ಕೆ ಪರಿಣಾಮಕಾರಿಯಾದ ವಿರೋಧ ಪಕ್ಷವಾಗಿ ಹೇಗೆ ಸರ್ಕಾರವನ್ನು ಕಿವಿ ಹಿಂಡಬೇಕು ಎಂಬುದರ ಬಗ್ಗೆಯೂ ಕಾರ್ಯತಂತ್ರ ರೂಪಿಸಲಾಗುವುದು. ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು. ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ನಮ್ಮ ಕಾರ್ಯಕರ್ತರಿಗೆ ಅಧಿಕಾರ ಸಿಗಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.
ಎರಡು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ
ಸ್ಥಳೀಯ ಸಮಸ್ಯೆಗಳ ಬಗ್ಗೆಯೂ ಈ ಯಾತ್ರೆಯಲ್ಲಿ ಗಮನ ಹರಿಸಲಾಗುವುದು. ಪ್ರತಿ ದಿನ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ನಡೆಯಲಿದೆ. ಪಾದಯಾತ್ರೆಯನ್ನೂ ನಡೆಸಲಾಗುವುದು. ಚುನಾವಣಾ ತಂಡದ ಜೊತೆಗೆ ಸಮಾಲೋಚನೆ ಮಾಡಲಾಗುವುದು. ಕಾರ್ಯಕರ್ತರಿಗೆ ಹೊಸ ಹುರುಪು ನೀಡಲಾಗುವುದು ಎಂದು ಪ್ರೀತಂ ಗೌಡ ತಿಳಿಸಿದರು.