ಮೇ 4, 6ರ ಪಂದ್ಯಗಳು ಸ್ಥಳಾಂತರ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬರುವ ಮೇ 4 ಮತ್ತು 6ರಂದು ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರಿಸುವ ಅಥವಾ ವೇಳಾಪಟ್ಟಿಯನ್ನು ಬದಲಾಯಿಸುವ ಸಾಧ್ಯತೆಗಳಿವೆ.
'ರಾಜ್ಯದಲ್ಲಿ ಚುನಾವಣೆಗಳು ನಡೆಯುವ ಹಿನ್ನೆಲೆಯಲ್ಲಿ ಮೇ 4 ಮತ್ತು 6ರಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳನ್ನು ಸ್ಥಳಾಂಥರಿಸಲು ಅಥವಾ ವೇಳಾಪಟ್ಟಿಯನ್ನು ಬದಲಾಯಿಸಲಾಗುವುದು. ಒಂದೆರಡು ದಿನಗಳಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು' ಎಂದು ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 5ರಿಂದ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 8ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ಸಂದರ್ಭದಲ್ಲಿ ಪಂದ್ಯಗಳಿಗೆ ಭದ್ರತೆಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಜೋತಿ ಪ್ರಕಾಶ್ ಮಿರ್ಜಿ ಹೇಳಿದ ನಂತರ, ಈ ಬಗ್ಗೆ ಕೆಎಸ್‌ಸಿಎ ಸಭೆ ನಡೆಸಿದೆ. ಮೇ 4 ಮತ್ತು 6ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕ್ರಮವಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ವಿರುದ್ಧ ಸೆಣೆಸಲಿದೆ.