ಚೆನ್ನೈ: ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಸಿಸಿಐ ಮಾಜಿ ಅಧ್ಯಕ್ಷ ಎನ್ ಶ್ರೀನಿವಾಸನ್, ನಾನೇಕೆ ಧೋನಿ ರಾಜಿನಾಮೆ ಕೇಳಲಿ ಎಂದು ಹೇಳಿದ್ದಾರೆ.
ಚೆನ್ನೈನಲ್ಲಿ ನಡೆದ ಐಸಿಸಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಶ್ರೀನಿವಾಸನ್ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿದ್ದು, ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ರಾಜಿನಾಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭಾರತ ಸಿಮೆಂಟ್ ಸಂಸ್ಥೆಯಲ್ಲಿ ಧೋನಿ ಪಾತ್ರವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಸಿಡುಕಿದ ಶ್ರೀನಿವಾಸನ್ ಅದರ ಬಗ್ಗೆ ನಾನೇಕೆ ನಿಮಗೆ ಹೇಳಬೇಕು ಎಂದು ಹೇಳಿದ್ದಾರೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ಆರಂಭಿಸಿರುವ ಸುಪ್ರೀಂ ಕೋರ್ಟ್ ಮುದ್ಗಲ್ ವರದಿಯ ಅನುಸಾರ ಬಿಸಿಸಿಐ ಕ್ರಮ ಕೈಗೊಳ್ಳಬೇಕೆಂದು ಅಭಿಪ್ರಾಯ ಪಟ್ಟಿದ್ದು, ಈ ಕುರಿತು ಶ್ರೀನಿವಾಸನ್ ಒತ್ತಡದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಅಲ್ಲದೆ, ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದವಿರುವ ಆರೋಪ ತೀರಾ ಗಂಭೀರವಾಗಿದ್ದು, ಐಪಿಎಲ್‌ನಿಂದ ತಂಡವನ್ನು ಅನರ್ಹಗೊಳಿಸುವ ಸಂಭವವಿದೆ ಎಂದು ತಿಳಿದು ಬಂದಿದೆ.