ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮಳೆಗಾಲ ಮುಗಿದ ಕೂಡಲೇ ರಸ್ತೆ ದುರಸ್ತಿ: ಮಹದೇವಪ್ಪ

Vishwanath S
Updated On : 31 Aug 2013, 11:37 am

ಕ.ಪ್ರ.ವಾರ್ತೆ, ಬೆಂಗಳೂರು, ಆ.30-
ಮಳೆಗಾಲ ಮುಗಿದ ತಕ್ಷಣ ಹಾನಿಗೊಳಗಾಗಿರುವ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಸುದ್ದಿಗಾರರಿಗೆ ಶುಕ್ರವಾರ ಈ ವಿಷಯ ತಿಳಿಸಿರುವ ಅವರು, ರು. 1200 ಕೋಟಿ ವೆಚ್ಚದಲ್ಲಿ ಗುಂಡಿಗಳಿಗೆ ತೇಪೆ ಹಾಕುವ ಕಾಮಗಾರಿ ಆರಂಭಿಸಲಾಗುವುದು. ಈ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಹಾದು ಹೋಗುವ 75,000 ಕಿ.ಮೀ. ವಿಸ್ತೀರ್ಣದ ರಸ್ತೆಗಳ ಪೈಕಿ 49,000 ಕಿ.ಮೀ. ಜಿಲ್ಲಾ ರಸ್ತೆಗಳು, 20,000 ಕಿ.ಮೀ. ರಾಜ್ಯ ಹೆದ್ದಾರಿ, 5,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿಯಾಗಿದೆ. 10,000 ಕಿ.ಮೀ. ವಿಸ್ತೀರ್ಣದ ರಸ್ತೆಗಳು ಗಂಭೀರವಾಗಿ ಹಾನಿಗೊಂಡಿವೆ. ರಸ್ತೆ ಗುಂಡಿಗಳಿಗೆ ತೇಪೆ ಹಾಕುವುದಕ್ಕೆ ರು. 1200 ಕೋಟಿ ಅಗತ್ಯವಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಪರಾಮರ್ಶೆ ಸಭೆ ನಡೆಸುವರು ಎಂದು ತಿಳಿಸಿದರು.
ಸೆಪ್ಟೆಂಬರ್ ಕೊನೆಯವರೆಗೂ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಮಳೆ ನಿಂತ ತಕ್ಷಣ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
ಬೆಂಗಳೂರು ಮತ್ತು ಮೈಸೂರು ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಿಸುವುದಕ್ಕೂ ಮುನ್ನ ಅದನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ಈ ಬಗ್ಗೆ ಅಂಗೀಕಾರ ನೀಡಿದರೆ ಬೈಪಾಸ್ ಮತ್ತು ಮಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಮೇಲಿರುವ ಹಣಕಾಸು ಹೊರೆ ತಗ್ಗುತ್ತದೆ. ಈ ಸಂಬಂಧ ತಮ್ಮ ದೆಹಲಿ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಭೂ ಸಾರಿಗೆ ಸಚಿವ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ ಎಂದರು.
2009ರಿಂದ ಹಲವು ರಸ್ತೆ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. 4,377 ಕಿ. ಮೀ. ಉದ್ದದ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಬೇಕಿದೆ. ಈ ಸಂಬಂಧ ಕೇಂದ್ರಕ್ಕೆ 23 ಪ್ರಸ್ತಾವನೆಗಳನ್ನು ಕಳುಹಿಸಲಾಗಿದೆ. ಈ ಪೈಕಿ 2,365 ಕಿ.ಮೀ. ಉದ್ದದ ರಸ್ತೆಗೆ ಸಂಬಂಧಿಸಿದ 9 ಪ್ರಸ್ತಾವನೆಗಳನ್ನು ಆದ್ಯತೆ ಮೇಲೆ ಪರಿಗಣಿಸುವಂತೆ ಸೂಚನೆ ನೀಡಲಾಗಿದೆ. ಕರಾವಳಿ, ಮುಂಬಯಿ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿನ 4,283 ಕಿ.ಮೀ. ಉದ್ದದ ರಸ್ತೆ ಮೇಲ್ದರ್ಜೆಗೆ ಏರಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement