ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಆಗ್ರಹಿಸಿದ್ದಕ್ಕೆ ಲಾಠಿ ಏಟು
ರಾಯಚೂರು: ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಪಟ್ಟಾ ವಿತರಣೆ, ಕಲ್ಲಿನ ಅಕ್ರಮ ಗಣಿಗಾರಿಕೆ ತಡೆಯುವಂತೆ ಆಗ್ರಹಿಸಿ ನಗರದಲ್ಲಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ವೇಳೆ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿ, ಉದ್ರಿಕ್ತರನ್ನು ಚದುರಿಸಿದ ಘಟನೆ ಸೋಮವಾರ ನಡೆದಿದೆ.
ಈ ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿ ಅನೇಕರಿಗೆ ಗಾಯಗಳಾಗಿವೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಂಘದ ರಾಜ್ಯಾಧ್ಯಕ್ಷ ಆರ್. ಮಾನಸಯ್ಯ ಸೇರಿದಂತೆ 16 ಜನರನ್ನು ಬಂಧಿಸಿದ್ದಾರೆ. ಸದರ್ ಬಜಾರ್ ಪೊಲೀಸ್ ಠಾಣೆಯ ಮಹಿಳಾ ಪೇದೆ ಸವಿತಾ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಗರ್ಭಿಣಿಯೊಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಮಾನವಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಲ್ಲಿನ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಅದನ್ನು ತಡೆಯುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ಗಣಿಗಾರಿಕೆಯಲ್ಲಿ ಶಾಮೀಲಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಂಘ ಮಾಡಿದ್ದ ಮನವಿಗೆ ಬೆಲೆ ನೀಡಿಲ್ಲ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ನೂರಾರು ಕಾರ್ಯಕರ್ತರು ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದರು.
ಲಾಠಿ ಪ್ರಹಾರ: ಈ ವೇಳೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಮತ್ತು ಹೋರಾಟಗಾರರ ಮಧ್ಯೆ ವಾಗ್ವಾದ ಮತ್ತು ನೂಕಾಟ ನಡೆಯಿತು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಉದ್ರಿಕ್ತರನ್ನು ಹೊರಹಾಕಲು ಪೊಲೀಸರು ಬೆನ್ನಟ್ಟಿ ಲಾಠಿ ಪ್ರಹಾರ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಹಾಕಿದ್ದ ಶಾಮಿಯಾನ ಕಿತ್ತು ಹಾಕಲಾಯಿತು. ಈ ಘಟನೆಯಲ್ಲಿ ಮಹಿಳಾ ಪೊಲೀಸ್ ಪೇದೆ ಸೇರಿದಂತೆ ರೈತ ಸಂಘದ ಅನೇಕರಿಗೆ ಗಾಯಗಳಾಗಿವೆ. ಈ ಮಧ್ಯೆ ನಗರದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಪ್ರತಿಭಟನಾ ಕಾರರಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಅಲ್ಲಿಂದ ಉದ್ರಿಕ್ತರನ್ನು ಲಾಠಿ ಬೀಸಿ ಚದುರಿಸಿದರು.
ಬಂದೋಬಸ್ತ್: ನಗರದಲ್ಲಿ ಸೋಮವಾರ ನಡೆದ ಲಾಠಿ ಪ್ರಹಾರದ ಘಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಕಾವಲು ಹಾಕಲಾಗಿತ್ತು.