26ಕ್ಕೆ ಕೇಜ್ರಿವಾಲ್ ಪ್ರಮಾಣ ವಚನ
ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರ ರಚನೆಗೆ ಸಂಬಂಧಿಸಿ ದೆಹಲಿಯಲ್ಲಿ ಸೃಷ್ಟಿಯಾಗಿದ್ದ ಬಿಕ್ಕಟ್ಟಿಗೆ ಕೊನೆಗೂ ತೆರೆ ಬಿದ್ದಿದೆ...
ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರ ರಚನೆಗೆ ಸಂಬಂಧಿಸಿ ದೆಹಲಿಯಲ್ಲಿ ಸೃಷ್ಟಿಯಾಗಿದ್ದ ಬಿಕ್ಕಟ್ಟಿಗೆ ಕೊನೆಗೂ ತೆರೆ ಬಿದ್ದಿದೆ. ಜನಾಭಿಪ್ರಾಯಕ್ಕೆ ಮಣಿದು ಕಾಂಗ್ರೆಸ್ನ ಬಾಹ್ಯ ಬೆಂಬಲದೊಂದಿಗೆ ದೆಹಲಿಯಲ್ಲಿ ಸರ್ಕಾರ ರಚಿಸುವುದಾಗಿ ಆಮ್ ಆದ್ಮಿ ಪಕ್ಷ ಘೋಷಿಸಿದೆ. ಈ ಮೂಲಕ ಅರವಿಂದ ಕೇಜ್ರಿವಾಲ್ ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ.
ಸರ್ಕಾರ ರಚನೆಗೆ ಸಂಬಂಧಿಸಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಸೋಮವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಳಿಕ ಲೆ. ಗವರ್ನರ್ ನಜೀಬ್ ಜಂಗ್ರನ್ನು ಭೇಟಿಯಾದ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಸರ್ಕಾರ ರಚನೆಗೆ ಸಂಬಂಧಿಸಿ ಚರ್ಚೆ ನಡೆಸಿದರು. ಆಮ್ ಆದ್ಮಿ ಪಕ್ಷದ ಪ್ರಸ್ತಾಪದ ಕುರಿತು ಲೆ.ಗವರ್ನರ್ ಜಂಗ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವಿವರಣೆ ನೀಡಿದ್ದಾರೆ. ನಾವು ಜನಾಭಿಪ್ರಾಯ ಸಂಗ್ರಹಿಸಿದ್ದೇವೆ. ಶೇ.75ರಷ್ಟು ಮಂದಿ ಸರ್ಕಾರ ರಚನೆ ಪರ ಒಲವು ತೋರಿದ್ದಾರೆ. ಹಾಗಾಗಿ ನಾವೀಗ ಸರ್ಕಾರ ರಚನೆಗೆ ಮುಂದಾಗಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ರಾಮಲೀಲಾದಲ್ಲಿ ಪ್ರತಿಜ್ಞೆ ಸ್ವೀಕಾರ
ಜನಲೋಕಪಾಲ ಮಸೂದೆಗಾಗಿ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ನಿರಶನ ಆರಂಭಿಸಿದ ರಾಮಲೀಲಾ ಮೈದಾನದಲ್ಲೇ ಪ್ರಮಾಣವಚನ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳುವುದಾಗಿ ಭಾವಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ಮೂಲಗಳ ಪ್ರಕಾರ ಡಿ.26ರಂದು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಂತರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚಿಸಲಿದ್ದಾರೆ.