ಭಿನ್ನರಿಗೆ ಪಾಠ ಕಲಿಸಿ
ಕರ್ನಾಟಕ ಜನತಾ ಪಕ್ಷ(ಕೆಜೆಪಿ)ದ ಜತೆ ಕೈ ಜೋಡಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಲೋಕಸಭಾ ಸದಸ್ಯರಾದ...
ನವದೆಹಲಿ: ಕರ್ನಾಟಕ ಜನತಾ ಪಕ್ಷ(ಕೆಜೆಪಿ)ದ ಜತೆ ಕೈ ಜೋಡಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಲೋಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ ಮತ್ತು ಶಿವಕುಮಾರ್ ಉದಾಸಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, 'ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಈ ಇಬ್ಬರು ಕೆಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತಿದೆ. ಇದು ಹೀಗೇ ಮುಂದುವರೆದರೆ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ' ಎಂದು ತಿಳಿಸಿದ್ದಾರೆ.
ಪತ್ರದ ಪ್ರತಿಯನ್ನು ಪ್ರತಿಪಕ್ಷದ ನಾಯಕರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರಿಗೂ ರವಾನಿಸಿದ್ದಾರೆ. ಇಬ್ಬರೂ ಲೋಕಸಭಾ ಸದಸ್ಯರಾಗಿರುವುದರಿಂದ ಪಕ್ಷದ ರಾಜ್ಯಾಧ್ಯಕ್ಷರು ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರ ಇಲ್ಲ. ಅದೇನಿದ್ದರೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಪ್ರತಿಪಕ್ಷ ನಾಯಕರೊಂದಿಗೆ ಸಮಾಲೋಚಿಸಿ ತೆಗೆದುಕೊಳ್ಳಬೇಕು. ಈ ನಡುವೆ, ಈಶ್ವರಪ್ಪ ಅವರ ಪತ್ರ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್ ಉದಾಸಿ, 'ಪತ್ರ ಬರೆಯಲು ಈಶ್ವರಪ್ಪ ಇಷ್ಟು ತಡ ಮಾಡಿದ್ದೇಕೆ?' ಎಂದು ಪ್ರಶ್ನಿಸಿದ್ದಾರೆ. ಈಶ್ವರಪ್ಪ ಅವರ ಪಕ್ಷ ಮತ್ತು ಅವರ ಸರ್ಕಾರಕ್ಕೆ ಒಳ್ಳೆಯದಾಗಲಿ ಎಂದೂ ಹೇಳಿದ್ದಾರೆ.