ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಸಿಇಟಿಗೆ ಶುಲ್ಕದ್ದೇ ಬಿಕ್ಕಟ್ಟು

ಸಿಇಟಿ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ನಡುವಿನ ಜಟಾಪಟಿ ತಾರಕಕ್ಕೇರಿದೆ.

Parashurama
Updated On : 27 Feb 2013, 1:32 am

ಬೆಂಗಳೂರು: ಸಿಇಟಿ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ನಡುವಿನ ಜಟಾಪಟಿ ತಾರಕಕ್ಕೇರಿದೆ.
ಚುನಾವಣೆಯ ಹೊಸ್ತಿಲಲ್ಲಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಶುಲ್ಕ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡುತ್ತಿಲ್ಲ. ಪ್ರಸಕ್ತ ಶುಲ್ಕ ವ್ಯವಸ್ಥೆಯಲ್ಲಿ ಕಾಲೇಜು ನಡೆಸಲು ಸಾಧ್ಯವಿಲ್ಲ, ಶುಲ್ಕ ಹೆಚ್ಚಳ ಮಾಡದಿದ್ದರೆ ಪ್ರವೇಶ ಪ್ರಕ್ರಿಯೆಯನ್ನೇ ರದ್ದುಗೊಳಿಸಬೇಕಾಗುತ್ತದೆ ಎಂದು ಖಾಸಗಿ ಕಾಲೇಜುಗಳ ಒಕ್ಕೂಟ ಬೆದರಿಕೆ ಹಾಕಿದೆ. ಕಳೆದ ಶೈಕ್ಷಣಿಕ ವರ್ಷದಂತೆ ಸೀಟು ಹಂಚಿಕೆ ಹಾಗೂ ಶುಲ್ಕ ವ್ಯವಸ್ಥೆ ಇರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಒಂದೆಡೆ ಹೇಳಿಕೆ ನೀಡುತ್ತಾರೆ. ಮತ್ತೊಂದೆಡೆ ಈ ಬಗ್ಗೆ ಸರ್ಕಾರ ನಮ್ಮೊಂದಿಗೆ ಚೆರ್ಚ ನಡೆಸಿಲ್ಲ, ಸಚಿವರ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಖಾಸಗಿ ಕಾಲೇಜುಗಳ ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಇದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಕೂಡ ಶುಲ್ಕ ಹಾಗೂ ಸೀಟು ಹಂಚಿಕೆ ಕುರಿತಂತೆ ವಿವಾದ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಸಚಿವರ ಚುನಾವಣೆ ಹೇಳಿಕೆ: ಏಪ್ರಿಲ್ ಅಂತ್ಯದೊಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶುಲ್ಕ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸುತಾರಾಂ ಒಪ್ಪಿಗೆ ನೀಡುತ್ತಿಲ್ಲ. ಈ ಶುಲ್ಕ ಹೆಚ್ಚಳವೂ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರ ಮೇಲೆ ನೇರ ಪರಿಣಾಮ ಬೀರುವುದರಿಂದ ತಮ್ಮ ಸರ್ಕಾರ ಅಧಿಕಾರದಲ್ಲಿರುವುವವರೆಗೆ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಹಟಕ್ಕೆ ಬಿದ್ದಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, 'ಕಳೆದ ಶೈಕ್ಷಣಿಕ ವರ್ಷದಲ್ಲಿ ಅನುಸರಿಸಿದ್ದ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆ. ಜು.22ಕ್ಕೆ ಸಿಇಟಿ ಪ್ರಕ್ರಿಯೆ ಮುಗಿಯಲಿದೆ. ಶುಲ್ಕದಲ್ಲೂ ಯಾವುದೇ ಹೆಚ್ಚಳವಿಲ್ಲ' ಎಂದು ಘೋಷಿಸಿದ್ದಾರೆ.
ಕಾಲೇಜುಗಳ ಸಭೆಯಲ್ಲಿ ಭಿನ್ನ ಹೇಳಿಕೆ: ಕಾಮೆಡ್-ಕೆ ಹಾಗೂ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಜತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬಂದಿವೆ.
ಪಕ್ಕದ ರಾಜ್ಯಗಳಲ್ಲಿ ಕರ್ನಾಟಕದ ಎರಡುಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ. ರಾಜ್ಯದಲ್ಲೂ ಎಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು 80 ಸಾವಿರದಿಂದ 1.25 ಲಕ್ಷದವರೆಗೆ ಏರಿಸಲೇಬೇಕು ಎಂದು ಕಾಲೇಜುಗಳ ಒಕ್ಕೂಟ ಸರ್ಕಾರವನ್ನು ಆಗ್ರಹಿಸಿದೆ.
ರಾಜ್ಯ ಸರ್ಕಾರ ಶುಲ್ಕ ಪಟ್ಟಿಯನ್ನು ನಿಗದಿಪಡಿಸುವವರೆಗೂ ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಇದಾದ ಬಳಿಕವೇ ಸುಪ್ರೀಂ ಕೋರ್ಟ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಶುಲ್ಕ ಹೆಚ್ಚಳದ ಪ್ರಮಾಣವನ್ನು ಆಧರಿಸಿ ಸೀಟು ಹಂಚಿಕೆ ಪ್ರಕ್ರಿಯೆ ನಡೆಯುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಒಕ್ಕೂಟದ ಪದಾಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.
ಒಂದೊಮ್ಮೆ ಸರ್ಕಾರ ಶುಲ್ಕ ಹೆಚ್ಚಳಕ್ಕೆ ಒಪ್ಪದಿದ್ದರೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಪ್ರವೇಶವೇ ನೀಡುವುದಿಲ್ಲ. ಪ್ರವೇಶ ನೀಡಿ ನಷ್ಟ ಮಾಡಿಕೊಳ್ಳುವುದಕ್ಕಿಂತ ಪ್ರವೇಶ ನೀಡದಿರುವುದೇ ಒಳಿತು ಎಂದು
ನಿರ್ಧರಿಸಲಾಗಿದೆ ಎಂದು ಸರ್ಕಾರಕ್ಕೆ ಒಕ್ಕೂಟವು ಎಚ್ಚರಿಕೆ ನೀಡಿದೆ.
ವಿಚಿತ್ರವೆಂದರೆ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿ ಖಾಸಗಿ ಕಾಲೇಜುಗಳ ಹೇಳಿಕೆಗೆ ಉನ್ನತ ಶಿಕ್ಷಣ ಇಲಾಖೆಯ ಇಬ್ಬರು ಹಿರಿಯ ಅಧಿಕಾರಿಗಳೇ ಬೆಂಬಲವಾಗಿ ನಿಂತಿದ್ದಾರೆ. ನಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣಕ್ಕೆ ಲಕ್ಷಾಂತರ ಹಣವನ್ನು ಶುಲ್ಕವನ್ನಾಗಿ ನೀಡುತ್ತೇವೆ, ಖಾಸಗಿ ಕಾಲೇಜುಗಳು ಕೇಳುವುದರಲ್ಲಿ ನ್ಯಾಯವಿದೆ ಎಂದು ಅಧಿಕಾರಿಗಳೇ ಹೇಳಿದ್ದಾರೆ ಎಂದು ಕಾಲೇಜುಗಳ ಒಕ್ಕೂಟದ ಸದಸ್ಯರು 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.

ಸರ್ಕಾರ ನುಣುಚಿಕೊಳ್ಳಲಿದೆ?
ಚುನಾವಣೆಯ ಕಾರಣದಿಂದ ಶುಲ್ಕ ಹೆಚ್ಚಳ ವಿಷಯಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಯಾವುದೇ ನಿರ್ಣಯ ತೆಗೆದುಕೊಳ್ಳುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಚುನಾವಣೆ ಮುಗಿಯುವವರೆಗೆ ಯತಾಸ್ಥಿತಿ ಕಾಪಾಡಿಕೊಂಡು ಬಳಿಕ ಒಪ್ಪಂದಕ್ಕೆ ಸಹಿ ಹಾಕಲು ಸರ್ಕಾರ ನಿರ್ಧರಿಸಿದೆ. ಇದರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ. ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಜತೆಗೆ ಸೋಮವಾರ ನಡೆಸಿದ ಸಭೆಯ ನಿರ್ಧಾರದಂತೆ, ಕ್ಯಾಬಿನೆಟ್‌ನಲ್ಲಿ ವಿಚಾರ ಪ್ರಸ್ತಾಪಿಸುವ ಭರವಸೆ ನೀಡಲಾಗಿತ್ತು. ಆದರೆ ಕ್ಯಾಬಿನೆಟ್ ಸಭೆಯಲ್ಲಿ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.

'ಹೆಚ್ಚುವರಿ' ಮರು ಪಾವತಿಗೆ ಸೂಚನೆ
ಕಳೆದ ಶೈಕ್ಷಣಿಕ ವರ್ಷದಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದ್ದ ಕಾಲೇಜುಗಳಿಗೆ ಕಠಿಣ ಸೂಚನೆ ನೀಡಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ಸಂದರ್ಭದಲ್ಲಿ ಈ ಹಣವನ್ನು ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಸಲಾಗಿದೆ.
ಲ್ಲವಾದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ. ಮತ್ತೊಂದೆಡೆ ಹೆಚ್ಚುವರಿ ಶುಲ್ಕಕ್ಕೆ ನಿಯಂತ್ರಮ ಹೇರುವ ಸಲುವಾಗಿ ಏಕರೂಪತೆ ತರಲು ಸರ್ಕಾರ ಮುಂದಾಗಿದೆ. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಟಿಯು ಕುಲಪತಿ ಹಾಗೂ ಖಾಸಗಿ ಆಡಳಿತ ಮಂಡಳಿಗಳ ಜತೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.
-ರಾಜೀವ ಹೆಗಡೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement