ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಲಿ: ಉಮಾಶ್ರೀ
ಬಾಗಲಕೋಟೆ: ಉಡುಪಿಯ ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ವಿದ್ಯಾರ್ಥಿನಿಯ ಹೇಳಿಕೆ ಅನುಸರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಣಿಪಾಲದಲ್ಲಿ ನಡೆದ ಘಟನೆ ನಿಜಕ್ಕೂ ಅಮಾನವೀಯ. ಇಂಥ ವಿದ್ಯಮಾನಗಳು ರಾಜ್ಯಕ್ಕೆ ಶೋಭೆ ತರುವುದಿಲ್ಲ. ಮಹಿಳೆಯರ ರಕ್ಷಣೆಗೆ ಸರ್ಕಾರ ಏನೆಲ್ಲ ಕ್ರಮಗಳನ್ನು ಕೈಕೊಳ್ಳುತ್ತಿದ್ದರೂ ದುರುಳರ ಸಂತತಿ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ಈ ಬಾರಿ ಸರ್ಕಾರ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಕೊಳ್ಳುವ ಮೂಲಕ ಎಲ್ಲರಿಗೂ ಎಚ್ಚರಿಕೆಯ ಸಂದೇಶ ನೀಡಲಿದೆ ಎಂದರು.
ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಈ ಪ್ರಕರಣದ ತನಿಖೆ ಮಾಡಲಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ಇಂಥ ವಿಷಯಗಳಲ್ಲಿ ರಾಜಕಾರಣ ಮಾಡುತ್ತಿತ್ತು. ಕಾಂಗ್ರೆಸ್ ಹಾಗಲ್ಲ, ಯಾರೇ ಇರಲಿ ಪಾರದರ್ಶಕವಾಗಿ ಇಡೀ ಪ್ರಕರಣವನ್ನು ತನಿಖೆ ಮಾಡಿ ಅಪರಾಧಿಗಳು ಯಾವುದೇ ಕಾರಣಕ್ಕೂ ಶಿಕ್ಷೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.