ಕರ್ನಾಟಕ ದೆಹಲಿಯಾಗುವುದು ಬೇಡ: ಎಚ್ಡಿಕೆ
ಬೆಂಗಳೂರು: ಉಡುಪಿ ಜಿಲ್ಲೆ ಮಣಿಪಾಲದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಎಚ್.ಡಿ. ಕುಮಾರಸ್ವಾಮಿ, ಆರಂಭದಲ್ಲೇ ಇಂತಹ ಅಪರಾಧಗಳಿಗೆ ಕಡಿವಾಣ ಹಾಕಿ ಕರ್ನಾಟಕ ಮತ್ತೊಂದು ದೆಹಲಿಯಾಗಿ ಪರಿವರ್ತನೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನನಿಬಿಡ ಪ್ರದೇಶದಿಂದ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಇದನ್ನು ಗಮನಿಸಿದಾಗ ದೆಹಲಿಯಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ನೆನಪಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ದೆಹಲಿಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾದರೆ ಕಾಂಗ್ರೆಸ್ ಬಗ್ಗೆ ಜನರು ಕೆಟ್ಟದಾಗಿ ಆಡಿಕೊಳ್ಳಲು ಅವಕಾಶವಾಗುತ್ತದೆ. ಆದ್ದರಿಂದ ಆರಂಭದಲ್ಲೇ ಇಂತಹ ಪ್ರಕರಣಗಳ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದರು.