ಬಿಎಸ್‌ವೈ-ನಿರಾಣಿಗೆ 'ಲೋಕಾ' ಸಮನ್ಸ್
ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಕೆಐಎಡಿಬಿ ಭೂಮಿ ವಾಪಸ್ ಪಡೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಮುರುಗೇಶ ನಿರಾಣಿ ಅವರಿಗೆ ಲೋಕಾಯುಕ್ತ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಜುಲೈ 27ರಂದು ಖುದ್ದು ಹಾಜರಿಗೆ ಸೂಚಿಸಿದೆ.
ದೇವನಹಳ್ಳಿ ಸಮೀಪ ಬಡವರಿಗಾಗಿ ಮನೆ ನಿರ್ಮಾಣ ಯೋಜನೆಗಾಗಿ ಉದ್ಯಮಿ ಅಲಂ ಪಾಷಾ ಅವರಿಗೆ 26 ಎಕರೆ ಭೂಮಿಯನ್ನು ಕೆಐಎಡಿಬಿ ಮಂಜೂರು ಮಾಡಿತ್ತು. ಬಳಿಕ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ ನಿರಾಣಿ ನಕಲಿ ದಾಖಲೆ ಸೃಷ್ಟಿಸಿ ಮಂಜೂರು ಮಾಡಿದ್ದ ಭೂಮಿಯನ್ನು ವಾಪಸ್ ಪಡೆದಿದ್ದಾರೆ ಎಂದು ಆರೋಪಿಸಿ ಅಲಂ ಪಾಷಾ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಲೋಕಾಯುಕ್ತ ಅಧಿಕಾರಿಗಳಿಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಿರಾಣಿ ಅರ್ಜಿ ಮುಂದಕ್ಕೆ: ಕೆಐಎಡಿಬಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಅರ್ಜಿ ವಿಚಾರಣೆಯನ್ನು ಲೋಕಾಯುಕ್ತ ನ್ಯಾಯಾಲಯ ಪೂರ್ಣಗೊಳಿಸಿದೆ.