ಸರ್ಕಾರ ರಚನೆಗೆ ಆಹ್ವಾನ
ರಾಜ್ಯದಲ್ಲಿ ಸರ್ಕಾರ ರಚನೆ ಕುರಿತ ಪ್ರಸ್ತಾವನೆಯನ್ನು ಕಾಂಗ್ರೆಸ್ ರಾಜ್ಯಪಾಲರ ಮುಂದಿಟ್ಟಿದ್ದು, ರಾಜ್ಯಪಾಲ ಹಂಸರಾಜ...
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆ ಕುರಿತ ಪ್ರಸ್ತಾವನೆಯನ್ನು ಕಾಂಗ್ರೆಸ್ ರಾಜ್ಯಪಾಲರ ಮುಂದಿಟ್ಟಿದ್ದು, ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರು ಸರ್ಕಾರ ರಚಿಸುವಂತೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ.
ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನನ್ನು ಆಯ್ಕೆ ಮಾಡಿದ ಬಳಿಕ ಎಐಸಿಸಿ ರಾಜ್ಯ ಉಸ್ತುವಾರಿ ಮಧುಸೂದನ ಮಿಸ್ತ್ರಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸುವ ಪ್ರಸ್ತಾವನೆ ಸಲ್ಲಿಸಿದರು. ಇದರೊಂದಿಗೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 121 ಸ್ಥಾನ ಗಳಿಸಿರುವ ಕುರಿತ ದಾಖಲೆಗಳನ್ನೂ ರಾಜ್ಯಪಾಲರಿಗೆ ಒದಗಿಸಿ, ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವುದನ್ನು ವಿವರಿಸಿದರು. ಅದರಂತೆ ರಾಜ್ಯಪಾಲರು ಸರ್ಕಾರ ರಚನೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದಾರೆ.
ರಾಹುಲ್ ಗಾಂಧಿ ಆಗಮನ?
ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ಭೇಟಿ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರು ರಾಹುಲ್ ಅವರಿಗೆ ಆಹ್ವಾನ ನೀಡಲಿದ್ದಾರೆ.