ಸಿಂಗ್‌ಜೀ ಕುರ್ಚಿ ಬಿಡಿ
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ ಪ್ರಧಾನಿ ಮನಮೋಹನ ಸಿಂಗ್ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನವದೆಹಲಿಯಲ್ಲಿ ಭಾನುವಾರ ಸಿಂಗ್...
ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ ಪ್ರಧಾನಿ ಮನಮೋಹನ ಸಿಂಗ್ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನವದೆಹಲಿಯಲ್ಲಿ ಭಾನುವಾರ ಸಿಂಗ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಎರಡು ಸಾವಿರ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಕೆಲಕಾಲ ಘರ್ಷಣೆ ನಡೆಯಿತು.
ಈ ವೇಳೆ ಪೊಲೀಸರು ಜಲಫಿರಂಗಿಗಳನ್ನು ಬಳಸಿ ಪ್ರತಿಭಟನಾಕಾರರನ್ನು ಚದುರಿಸಿದರು. ನಂತರ ಯುವ ಮೋರ್ಚಾ ಅಧ್ಯಕ್ಷ ಅನುರಾಗ್ ಠಾಕೂರ್ ಸೇರಿ ಅನೇಕ ಮುಖಂಡರನ್ನು ಬಂಧಿಸಿ, ಬಿಡುಗಡೆ ಮಾಡಲಾಯಿತು.
ಇದಕ್ಕೂ ಮೊದಲು ಔರಂಗಜೇಬ್ ರಸ್ತೆಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಸಿಂಗ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ನಿವಾಸದ ಕಡೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ತುಘಲಕ್ ರಸ್ತೆ ಪೊಲೀಸ್ ಠಾಣೆ ಎದುರು ತಡೆದು ನಿಲ್ಲಿಸಲಾಯಿತು. ಈ ವೇಳೆ ಬ್ಯಾರಿಕೇಡ್‌ಗಳನ್ನು ಮುರಿದ ಪ್ರತಿಭಟನಾಕಾರರು ಪೊಲೀಸರ ಜತೆ ಘರ್ಷಣೆಗೆ ನಿಂತರು. ಆಗ ಜಲಫಿರಂಗಿಗಳನ್ನು ಬಳಸಿ ಪ್ರತಿಭಟನಾಕಾರರನ್ನು ನಿಯಂತ್ರಿಸಲಾಯಿತು.
ನಿಷ್ಪಕ್ಷಪಾತ ತನಿಖೆಗೆ...: ಈ ನಡುವೆ, ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಲು ಪ್ರಧಾನಿ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ವಕ್ತಾರ ಪ್ರಕಾಶ್ ಜಾವಡೇಕರ್ ಆಗ್ರಹಿಸಿದ್ದಾರೆ. ಸ್ವಾತಂತ್ರ್ಯಾನಂತರ ದೇಶ ಕಂಡ ಅತೀ ಭ್ರಷ್ಟ ಸರ್ಕಾರದ ಪ್ರಧಾನಿಯಾಗುವ ತಪ್ಪು ಸಿಂಗ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪಟ್ಟು ಬಿಡಲ್ಲ- ಜೇಟ್ಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ ಪ್ರಧಾನಿ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎನ್ನುವ ಪಟ್ಟನ್ನು ಬಿಜೆಪಿ ಯಾವುದೇ ಕಾರಣಕ್ಕೂ ಸಡಿಲಿಸಲ್ಲ ಎಂದು ಪಕ್ಷದ ಹಿರಿಯ ಮುಖಂಡ ಅರುಣ್ ಜೇಟ್ಲಿ ಹೇಳಿದ್ದಾರೆ.