ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಎಲ್ಲದಕ್ಕೂ ಅಧಿಕಾರಿಗಳೇ ಹೊಣೆ

ಜನರ ಕಣ್ಣಿಗೆ ಕಾಣುವ ರೀತಿ ಆಡಳಿತದಲ್ಲಿ ಬದಲಾವಣೆಯಾಗಬೇಕು. ಅದು ಪಾರದರ್ಶಕವಾಗಿ ಮತ್ತು ಭ್ರಷ್ಟಾಚಾರ ರಹಿತವಾಗಿರಬೇಕು.

Vishwanath S
Updated On : 29 May 2013, 12:51 pm

ಕನ್ನಡಪ್ರಭ ವಾರ್ತೆ,  ಬೆಂಗಳೂರು,  ಮೇ 28-
'ಜನರ ಕಣ್ಣಿಗೆ ಕಾಣಿಸುವ ರೀತಿ ಆಡಳಿತದಲ್ಲಿ ಬದಲಾವಣೆಯಾಗಬೇಕು. ಅದು ಪಾರದರ್ಶಕವಾಗಿ ಮತ್ತು ಭ್ರಷ್ಟಾಚಾರ ರಹಿತವಾಗಿರಬೇಕು. ಗ್ರಾಮ ಪಂಚಾಯ್ತಿ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಡಳಿತ ಚುರುಕಾಗಬೇಕು. ಇದಕ್ಕೆ ಸ್ಪಂದಿಸದೇ ಇದ್ದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.'
ಅಭಿವೃದ್ಧಿ ಆಯುಕ್ತರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯದರ್ಶಿಗಳ ಎರಡು ದಿನಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಹೇಳಿದ ಎಚ್ಚರಿಕೆಯ ಮಾತುಗಳಿವು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಳೆದ 7-8 ವರ್ಷಗಳಿಂದ ಆಡಳಿತ ವ್ಯವಸ್ಥೆ ಕುಸಿದಿತ್ತು. ಭ್ರಷ್ಟಾಚಾರ ವ್ಯಾಪಕವಾಗಿತ್ತು.             ಹೀಗಾಗಿ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುವುದು ಹೊಸ ಸರ್ಕಾರದ ಜವಾಬ್ದಾರಿ. ಅದರಂತೆ ನಮ್ಮ ಸರ್ಕಾರದ ಯೋಜನೆ ಮತ್ತು ಉದ್ದೇಶಗಳನ್ನು ನೌಕರಶಾಹಿಗೆ ತಿಳಿಸಲಾಗಿದೆ. ಅದರಂತೆ ಅವರು ಕಾರ್ಯನಿರ್ವಹಿಸಬೇಕು. ಒಂದು ವೇಳೆ ಕರ್ತವ್ಯ ಲೋಪ ಮಾಡಿದರೆ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿದರೆ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ದುರ್ಬಲ ವರ್ಗದವರು ಮತ್ತು ನಿಶ್ಯಕ್ತ ಜನರಿಗೆ ರಕ್ಷಣೆ ಕೊಡುವುದು ಸರ್ಕಾರದ ಜವಾಬ್ದಾರಿ. ಈ ಕೆಲಸದಲ್ಲಿ ಅಧಿಕಾರಿಗಳು ವಿಫಲರಾದರೆ ಮೊದಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಅದೇ ರೀತಿ ಒಳ್ಳೆಯ ಕೆಲಸ ಮಾಡುವ ಜವಾಬ್ದಾರಿಯುತ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಹೇಳಿದರು.
ಕೆಲಸಕ್ಕಾಗಿ ಬೆಂಗಳೂರಿಗೆ ಬರಬಾರದು: ತಾಲೂಕು ಮತ್ತು ಜಿಲ್ಲಾ ಮಟ್ಟಗಳಲ್ಲೇ ಎಲ್ಲಾ ಕೆಲಸಗಳು ಆಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ತಮ್ಮ ಕೆಲಸ ಆಗಿಲ್ಲ ಎಂದು ಯಾವ ವ್ಯಕ್ತಿಯೂ ಬೆಂಗಳೂರಿಗೆ ಬರಬಾರದು. ಹಾಗೇನಾದರೂ ಆದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಲೋಪವೆಸಗಿದ್ದಾರೆ ಎಂದು ಪರಿಗಣಿಸಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಎಲ್ಲಿಯೂ ನೀರಿನ ಸಮಸ್ಯೆ ಉದ್ಭವವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಹಣ ಇರುವುದರಿಂದ ಈ ಕಾರ್ಯಕ್ರಮಕ್ಕೆ ಆರ್ಥಿಕ ತೊಂದರೆ ಇಲ್ಲ.
ಆದ್ದರಿಂದ ಕುಡಿಯುವ ನೀರು, ಮೇವು ಕುರಿತಂತೆ ತಕ್ಷಣ ಕ್ರಮ ಕೈಗೊಳ್ಳಬೇಕು. ಜೂನ್ 15ರೊಳಗೆ ಮಳೆ ಬಾರದೇ ಇದ್ದರೆ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈಗಲೇ ಕಾರ್ಯಕ್ರಮ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
70 ಸಾವಿರ ಟನ್ ಪಡಿತರ ಸಂಗ್ರಹಕ್ಕೆ ಸೂಚನೆ: ಜೂನ್ ತಿಂಗಳಿನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಕ್ಕೂ 1ಕ್ಕೆ 30 ಕೆ.ಜಿ. ಅಕ್ಕಿ ವಿತರಿಸುವ ಕಾರ್ಯ ಆರಂಭವಾಗಲಿದೆ. ಇದಕ್ಕಾಗಿ ಪ್ರತಿ ತಿಂಗಳು 2.40 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು. ಈ ಪೈಕಿ 1.70 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೇಂದ್ರದಿಂದ ಬರುತ್ತದೆ. ಬಾಕಿ 70 ಸಾವಿರ ಮೆಟ್ರಿಕ್ ಟನ್ ಅಕ್ಕಿ ಸಂಗ್ರಹಿಸಿ ಅದನ್ನು ಫಲಾನುಭವಿಗಳಿಗೆ ವಿತರಿಸಲು ತಕ್ಷಣ ಕ್ರಮ ಕೈಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಅಂಗನವಾಡಿ ಮಕ್ಕಳಿಗೆ ಹಾಲು ವಿತರಿಸಲು ನಿರ್ಧಾರ
ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು 4ಕ್ಕೆ ಹೆಚ್ಚಿಸಿರುವುದರಿಂದ ಹೆಚ್ಚು ಹಾಲು ಕೆಎಂಎಫ್‌ಗೆ ಹರಿದುಬರಲಿದ್ದು, ಈ ಒತ್ತಡ ನಿವಾರಣೆಗಾಗಿ ರಾಜ್ಯದ ಎಲ್ಲಾ ಅಂಗನವಾಡಿ ಮಕ್ಕಳಿಗೆ ಹಾಲು ವಿತರಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಲಾಗಿದೆ. ಪ್ರಸ್ತಾವ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಪ್ರದೇಶಗಳಲ್ಲಿ ಅಂಗನವಾಡಿ ಮಕ್ಕಳಿಗೆ ಆಹಾರದ ಜತೆಗೆ ಹಾಲು ಮತ್ತು ಮೊಟ್ಟೆ ವಿತರಿಸಲಾಗುತ್ತಿದೆ. ಇನ್ನು ಮುಂದೆ ಎಲ್ಲಾ ಅಂಗನವಾಡಿ ಮಕ್ಕಳಿಗೂ ತಲಾ 200ರಿಂದ 250 ಗ್ರಾಂನಷ್ಟು ಹಾಲು ವಿತರಿಸಬೇಕು ಎಂಬುದು ಸರ್ಕಾರದ ಉದ್ದೇಶ. ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement