ರಾಜ್ಯೋತ್ಸವದಲ್ಲಿ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಸಿದ್ದಾಪುರ: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಲ್ಲಿಗೆ ಸಮೀಪದ ಪಾಲಿಬೆಟ್ಟದಲ್ಲಿ ಶುಕ್ರವಾರ ನಡೆದಿದೆ. ಪಾಲಿಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಜೈ ಹಿಂದ್ ಸ್ವಸಹಾಯ ಸಂಘ ವತಿಯಿಂದ ಕ್ರೀಡಾಕೂಟ ಆಯೋಜಿಸಲಾಗಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಸರ್ಕಾರಿ ಹಾಗೂ ಖಾಸಗಿ ಶಾಲೆಯ ಹಲವಾರು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡಲಾಗಿತ್ತು. ಆಹಾರ ಸೇವಿಸಿದ ವಿದ್ಯಾರ್ಥಿಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಗೆ ಸಂಜೆ ವೇಳೆ ವಾಂತಿ ಕಾಣಿಸಿಕೊಂಡು ಅಸ್ವಸ್ಥರಾದರು. ಕೂಡಲೆ ಅವರನ್ನು ಪಾಲಿಬೆಟ್ಟ ಹಾಗೂ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸ್ಕ್ರೀಂ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿರಬಹುದೆಂದು ಶಂಕಿಸಿದ ಸ್ಥಳೀಯರು ಐಸ್ಕ್ರೀಂ ವಾಹನವನ್ನು ತಡೆ ಹಿಡಿದರು. ಸಿದ್ದಾಪುರ ಠಾಣಾಧಿಕಾರಿ ಹರಿವರ್ದನ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.