ಕಾಲುಬಾಯಿ ಜ್ವರ ನಿಯಂತ್ರಣಕ್ಕೆ ಕ್ರಮ
ಬೆಂಗಳೂರು: ರಾಸುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಲುಬಾಯಿ ಜ್ವರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎ.ಎಸ್. ಪ್ರೇಮನಾಥ್ ಸಂಸ್ಥೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚಿಸಿದ್ದಾರೆ.
ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಗುರುವಾರ ಹಾಲು ಒಕ್ಕೂಟಗಳ ಪಶು ವೈದ್ಯಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕೆಎಂಎಫ್ ವ್ಯಾಪ್ತಿಯ ಎಲ್ಲಾ 13 ಹಾಲು ಒಕ್ಕೂಟಗಳ ಪಶು ವೈದ್ಯಾಧಿಕಾರಿಗಲು ಹಾಗೂ ಕೆಎಂಎಫ್ ಹಿರಿಯ ಅಧಿಕಾರಿಗಳು ಕಾಲುಬಾಯಿ ಜ್ವರ ನಿಯಂತ್ರಣ ಕುರಿತಂತೆ ಹೆಚ್ಚು ಕಾಳಜಿ ವಹಿಸಬೇಕು. ಪರಿಸ್ಥಿತಿ ನಿಯಂತ್ರಿಸಲು ಹಾಲು ಉತ್ಪಾದಕರ ಮನವೊಲಿಸಿ ರಾಸುಗಳಿಗೆ ಲಸಿಕೆ ಕಡ್ಡಾಯಗೊಳಿಸಬೇಕು ಹಾಗು ಕಾಯಿಲೆಗೊಳಗಾದ ರಾಸುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಹೇಳಿದರು. ರಾಜ್ಯದಲ್ಲಿ, ಅದರಲ್ಲೂ ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರ ವ್ಯಾಪಿಸಿದೆ. ಪ್ರಸ್ತುತ ಸಮಸ್ಯೆ ನಿಯಂತ್ರಣದಲ್ಲಿ ಇದೆಯಾದರೂ ಮುಂದೆ ಅದು ವ್ಯಾಪಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಬೆಂಗಳೂರು ಪಶುವೈದ್ಯ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ವಿಶ್ವನಾಥರೆಡ್ಡಿ, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ.ರವೀಂದ್ರ ಹೆಗ್ಡೆ ಇತರರು ಇದ್ದರು.