ವಕ್ಫ್ ಅವ್ಯವಹಾರ: ಮೊಕದ್ದಮೆಗೆ ಸರ್ಕಾರ ನಕಾರ
ಕನ್ನಡಪ್ರಭ ವಾರ್ತೆ ಬೆಂಗಳೂರು ಅ.5
ವಕ್ಫ್ ಮಂಡಳಿಯಲ್ಲಿ ಅವ್ಯವಹಾರ ನಡೆಸಿದ ಮಾಜಿ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ ನಿರಾಕರಿಸಿರುವ ರಾಜ್ಯ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಕರ್ನಾಟಕ ಮುಸ್ಲಿಂ ಸಂಘರ್ಷ ಸಮಿತಿ ನಿರ್ಧರಿಸಿದೆ.
ಸಮಿತಿಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಹಿತರಕ್ಷಣೆ ಮಾಡುವ ಬದಲು ಭ್ರಷ್ಟ ರಾಜಕಾರಣಿಗಳನ್ನು ರಕ್ಷಿಸಲು ಮುಂದಾಗಿದೆ. ಈ ವಿಚಾರವನ್ನು ಪಕ್ಷದ ಹೈಕಮಾಂಡ್ ಗಮನಕ್ಕೂ ತರಲಾಗುವುದು ಎಂದು ಸಮಿತಿ ಅಧ್ಯಕ್ಷ ಎಂ.ಜಿ. ಅಲಿ ತಿಳಿಸಿದ್ದಾರೆ. ವಕ್ಫ್ ಮಂಡಳಿಯಲ್ಲಿ ಮಾಜಿ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳು ನಡೆಸಿದ ಅವ್ಯವಹಾರದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ತನಿಖೆ ನಡೆಸಿ ಈ ಎಲ್ಲರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲು ಸರ್ಕಾರದ ಅನುಮತಿ ಕೋರಿತ್ತು.
ಆದರೆ, ಸೆ.2ರಂದು ನಡೆದ ಸಂಪುಟ ಸಭೆಯಲ್ಲಿ ಮೊಕದ್ದಮೆ ದಾಖಲಿಸಲು ಅನುಮತಿ ನೀಡಲು ನಿರಾಕರಿಸಿದೆ. ಈ ಹಗರಣದಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರು ಶಾಮೀಲಾಗಿರುವುದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಅವರು ಆರೋಪಿಸಿದ್ದಾರೆ. ಲಾಲ್‌ಬಾಗ್ ಬಳಿ ಇರುವ ವಕ್ಫ್ ಮಂಡಳಿಯ 2.3 ಎಕರೆ ಜಮೀನನ್ನು ಕಾನೂನು ಬಾಹಿರವಾಗಿ ಪರಭಾರೆ ಮಾಡಿರುವ ಬಗ್ಗೆ ಮುಸ್ಲಿಂ ಸಂಘರ್ಷ ಸಮಿತಿ ಈ ಹಿಂದೆ ಸರ್ಕಾರಕ್ಕೆ ದೂರು ನೀಡಿತ್ತು. ಅದರಂತೆ ಸರ್ಕಾರ ಈ ಕುರಿತು ಸಿಐಡಿ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ ಸಿಐಡಿ, ಹಗರಣದಲ್ಲಿ ಮಂಡಳಿಯ ಮಾಜಿ ಸದಸ್ಯರು ಮತ್ತು ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಶಿಫಾರಸು ಮಾಡಿತ್ತು. ಅದರಂತೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆರೋಪಿಗಳು ಇದರ ವಿರುದ್ಧ ಸುಪ್ರೀಂ ಕೋರ್ಟ್‌ವರೆಗೆ ಹೋಗಿದ್ದರೂ ಅವರ ಅರ್ಜಿ ತಿರಸ್ಕೃತವಾಗಿತ್ತು. ಹೀಗಾಗಿ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕು ಎಂದು ಸಿಐಡಿ ಕೋರಿದರೆ ಸರ್ಕಾರ ಈ ಕೋರಿಕೆ ತಿರಸ್ಕರಿಸಿದೆ ಎಂದು ಎಂ.ಜಿ. ಅಲಿ ಆರೋಪಿಸಿದ್ದಾರೆ.
ಈ ಮಧ್ಯೆ ಅಮಾನತ್ ಕೋ ಆಪರೇಟಿವ್ ಹಗರಣದ ವಿಚಾರದಲ್ಲೂ ಪ್ರಮುಖ ಕಾಂಗ್ರೆಸ್ ನಾಯಕ, ಕೇಂದ್ರ ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸುವ ವಿಚಾರದಲ್ಲಿ ಸಹಕಾರಿ ಸಚಿವರು ತಡೆ ನೀಡಿದ್ದಾರೆ ಎಂದು ಅವರು ಆಪಾದಿಸಿದ್ದಾರೆ.