ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬಿಎಸ್ 'ವೈನಾಟ್'; ಮೋದಿ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ...

Rashmi Kasaragodu
Updated On : 3 Sept 2013, 1:05 am

ಕನ್ನಡಪ್ರಭ ವಾರ್ತೆ, ಬೆಂಗಳೂರು, ಸೆ. 2
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಿದ್ದು, ಸೆ. 8ರಂದು ಈ ಕುರಿತು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಯಡಿಯೂರಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಪಕ್ಷದ ಎಲ್ಲಾ ವರಿಷ್ಠರು ಒಪ್ಪಿದರೆ 'ನವಭಾರತ ಯುವಭೇರಿ' ರ್ಯಾಲಿಗಾಗಿ ಅಕ್ಟೋಬರ್ನಲ್ಲಿ ರಾಜ್ಯಕ್ಕೆ ಆಗಮಿಸಲಿರುವ ನರೇಂದ್ರ ಮೋದಿ ಖುದ್ದು ಯಡಿಯೂರಪ್ಪ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ.
ಜತೆಗೆ ರಾಷ್ಟ್ರೀಯ ನಾಯಕರ ಜತೆಗೆ ತಾವೇ ಈ ವಿಚಾರ ಚರ್ಚಿಸುವುದಾಗಿ ಮೋದಿ ಅವರು ಭರವಸೆ ನೀಡಿದ್ದಾರೆ. ಹೀಗಾಗಿ ಸೆ. 8ರಂದು ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಪಕ್ಷ ಅಧಿಕೃತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಅಹಮದಾಬಾದ್ಗೆ ತೆರಳಿ ಯಡಿಯೂರಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತು ನರೇಂದ್ರ ಮೋದಿ ಅವರ ಜತೆ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮುಂದೆ ನರೇಂದ್ರ ಮೋದಿ ಅವರು ಪೂರಕವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.                


ಆದರೆ, ನಾನೊಬ್ಬನೇ ಈ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ ಮತ್ತಿತರರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
ಸೆ. 8ರಂದು ದೆಹಲಿಯಲ್ಲಿ ಸಭೆ: ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮವಾಗುತ್ತದೆ. ಹೀಗಾಗಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಬೇಕು. ಸೆಪ್ಟೆಂಬರ್ 8ರಂದು ದೆಹಲಿಯಲ್ಲಿ ರಾಷ್ಟ್ರೀಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಗೆ ನಾನೂ ಬರುತ್ತೇನೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಬಿಜೆಪಿಗೆ ಕರೆಸಿಕೊಳ್ಳುವ ವಿಚಾರವನ್ನು ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸುತ್ತೇನೆ. ರಾಜ್ಯದಿಂದಲೂ ಒಂದು ನಿಯೋಗವನ್ನು ದೆಹಲಿಗೆ ಕರೆದುಕೊಂಡು ಬನ್ನಿ. ಎಲ್ಲರೂ ಒಟ್ಟಾಗಿ ಕುಳಿತು ಒಂದು ನಿರ್ಧಾರಕ್ಕೆ ಬರೋಣ ಎಂದು ಮೋದಿ ಅವರು ರಾಜ್ಯದಿಂದ ತೆರಳಿದ್ದ ಮುಖಂಡರಿಗೆ ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ಯಡಿಯೂರಪ್ಪ ಅವರು ಮೋದಿ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿರುವುದಲ್ಲದೆ, ನಾನು ಬಿಜೆಪಿ ಸೇರುವುದಿದ್ದರೆ ರಾಷ್ಟ್ರೀಯ ನಾಯಕರೇ ಮುಂದೆ ನಿಂತು ತಮ್ಮನ್ನು ಆಹ್ವಾನಿಸಬೇಕು ಎಂದು ಯಡಿಯೂರಪ್ಪ ಅವರು ಈ ಹಿಂದೆ ನೀಡಿದ ಹೇಳಿಕೆ ಬಗ್ಗೆ ರಾಜ್ಯದಿಂದ ತೆರಳಿದ್ದ ಮುಖಂಡರು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ನರೇಂದ್ರ ಮೋದಿ, ಹೇಗಿದ್ದರೂ ಅಕ್ಟೋಬರ್ನಲ್ಲಿ ಕರ್ನಾಟಕಕ್ಕೆ ಬರುತ್ತೇನೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಒಪ್ಪಿದರೆ ಖುದ್ದು ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement