ನಗರಕ್ಕೆ ಇಂದು ಅಂಬರೀಷ್ ವಾಪಸ್
ಕೊನೆಗೂ ವಸತಿ ಸಚಿವ, ರೆಬೆಲ್ ಸ್ಟಾರ್ ಅಂಬರೀಷ್ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮ್ಯ ಪರ ಪ್ರಚಾರ ನಡೆಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು ಏ. 10
ಕೊನೆಗೂ ವಸತಿ ಸಚಿವ ರೆಬೆಲ್ ಸ್ಟಾರ್ ಅಂಬರೀಷ್ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮ್ಯ ಪರ ಪ್ರಚಾರ ನಡೆಸಲಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಮಲೇಷ್ಯಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಂಬರೀಷ್ ಶುಕ್ರವಾರ ಬೆಂಗಳೂರಿಗೆ ವಾಪಾಸ್ ಆಗಲಿದ್ದು, ಏ 14ರಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಘಟಕ ಆಯೋಜಿಸಿರುವ ಬೃಹತ್ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಮಲೇಷ್ಯಾದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅಂಬರೀಷ್, ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದು ಅನುಮಾನ ಎಂಬ ಮಾತುಗಳು ಕೇಳಿ ಬಂದಿತ್ತು. ಮಂಡ್ಯ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ ಇದಕ್ಕೆ ಇನ್ನಷ್ಟು ತುಪ್ಪ ಸುರಿದಿತ್ತು. ಜತೆಗೆ ಅವರ ಕುಟುಂಬ ವರ್ಗ ಸಂಪೂರ್ಣ ಗುಣಮುಖರಾಗುವವರೆಗೆ ಪ್ರಚಾರಕ್ಕೆ ತೆರಳುವುದು ಬೇಡ ಎಂದು ಪಟ್ಟು ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಅಂಬರೀಷ್ ಚುನಾವಣಾ ಪ್ರಕ್ರಿಯೆ ಮುಗಿದ ನಂತರವೇ ಮರಳುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಮಾಡಿರುವ ಮನವಿಗೆ ಸ್ಪಂದಿಸಿರುವ ಅವರು ಏ. 14ರಂದು ನಡೆಯುವ ಬಹಿರಂಗ ಸಭೆಯಲ್ಲಿ ರಮ್ಯ ಪರ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಂತರ ಜೆಪಿನಗರದಲ್ಲಿರುವ ತಮ್ಮ ನಿವಾಸಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮನವಿ: ಮಂಡ್ಯ ಜಿಲ್ಲಾ ಕಾಂಗ್ರೆಸ್‌ನಲ್ಲಿ ತಲೆದೋರಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಮ್ಯ ಗೆಲುವು ಕಷ್ಟವಾಗಬಹುದು ಎಂದು ಗುಪ್ತಚರ ಇಲಾಖೆ ಇತ್ತೀಚೆಗಷ್ಟೇ ವರದಿ ನೀಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ಘಟಕ ಜಿಲ್ಲೆಯಲ್ಲಿ ಒಂದು ದಿನದ ಮಟ್ಟಿಗಾದರೂ ಅಂಬರೀಷ್ ಅವರ ಪ್ರಚಾರ ಸಾನಿಧ್ಯ ಅಗತ್ಯ ಎಂದು ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಅವರು ಸ್ವದೇಶಕ್ಕೆ ವಾಪಾಸ್ ಆಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.