ಎಲ್ಲ ವಿವಿಗಳಲ್ಲಿ ಅಂಬೇಡ್ಕರ್ ಪೀಠ ಸ್ಥಾಪನೆ
ಕನ್ನಡಪ್ರಭ ವಾರ್ತೆ ಬೆಂಗಳೂರು ಏ 30
ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಅಂಬೇಡ್ಕರ್ ಪ್ರತಿಷ್ಠಾನದ ಸಭೆ ವಿಧಾನಸೌಧದಲ್ಲಿ ಬುಧವಾರ ನಡೆಯಿತು.
ಅಂಬೇಡ್ಕರ್ ವಿಚಾರಧಾರೆಯ ಪ್ರಚಾರಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಿತು. ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಅಂಬೇಡ್ಕರ್ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಈ ಪ್ರತಿಷ್ಠಾನ ಆರಂಭಿಸಲಾಗಿದೆ. ಅಂಬೇಡ್ಕರ್ರ ಜೀವನ ಚರಿತ್ರೆ, ಸಾಧನೆಗಳ ಬಗ್ಗೆ ದೇಶದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠ ಆರಂಭಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ಅದೇ ರೀತಿ ಅಂಬೇಡ್ಕರ್ ವಿಚಾರಧಾರೆಯನ್ನು ದೇಶದ ಎಲ್ಲ ಪ್ರಾದೇಶಿಕ ಭಾಷೆಗಳಿಗೆ ತರ್ಜುಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ದಲಿತ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಕೋಚಿಂಗ್ ಕ್ಲಾಸ್ ಆರಂಭಿಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಅಂಬೇಡ್ಕರ್ ಪ್ರತಿಷ್ಠಾನಕ್ಕೆ ಕೇಂದ್ರ ಸರ್ಕಾರ 330 ಕೋಟಿ ಅನುದಾನ ನೀಡಿದೆ. ಈ ಹಣವನ್ನು ಬಳಸಿಕೊಂಡು ದೆಹಲಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅಂಬೇಡ್ಕರ್ ಅಧ್ಯಯನ ಕೇಂದ್ರ ನಿರ್ಮಿಸಲಾಗುವುದು. ಇದಕ್ಕೆ ರು. 175ಕೋಟಿ ವೆಚ್ಚವಾಗಲಿದೆ ಎಂದರು.