ಎನ್ಡಿಎ ವಿರುದ್ಧ ಸೋನಿಯಾ ವಾಗ್ದಾಳಿ
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಭಾರತೀಯರಿಗೆ ಸುಳ್ಳು ...
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಭಾರತೀಯರಿಗೆ ನಕಲಿ ಕನಸುಗಳ ಮಾರಾಟ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಹೇಳಿದ್ದಾರೆ.
ರಾಜೀವ್ ಗಾಂಧಿಯವರ 70ನೇ ಜನ್ಮದಿನೋತ್ಸವ ಅಂಗವಾಗಿ ಆಯೋಜಿಸಿದ್ದ ಸಂಕಲ್ಪ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ನಕಲಿ ಕನಸುಗಳನ್ನು ಭಾರತದ ಜನತೆ ಮಾರಿದ್ದಾರೆ ಎಂದು ಟೀಕಿಸಿದ್ದಾರೆ.
ಸಂಸತ್ನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕೆಂಬುದು ರಾಜೀವ್ ಗಾಂಧಿ ಕನಸಾಗಿತ್ತು. ರಾಜ್ಯಸಭಾದಲ್ಲಿ ಕಾಂಗ್ರೆಸ್ ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡಿತು. ಆದರೆ ಕಾರಣಾಂತರಗಳಿಂದ ಲೋಕಸಭೆಯಲ್ಲಿ ಜಾರಿ ಮಾಡಲು ಆಗಲಿಲ್ಲ ಎಂದು ಅವರು ಹೇಳಿದ್ದಾರೆ.
ಆದರೆ, ಮಹಿಳಾ ಮೀಸಲಾತಿ ಮಸೂದೆ ಜಾರಿಗೊಳಿಸುವಂತೆ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ನಮ್ಮ ಪಕ್ಷ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡಿದೆ. ಆದರೆ, ಓರ್ವ ವ್ಯಕ್ತಿ ಮಾಡಿದ ತಪ್ಪನ್ನು ಇಡೀ ಪಕ್ಷ ಮಾಡಿದಂತೆ ಎನ್ಡಿಎ ಬಿಂಬಿಸಿದೆ.
ಸುಳ್ಳು ಆಶ್ವಾಸನೆಗಳನ್ನು ನೀಡಿರುವ ಬಿಜೆಪಿ, ನಕಲಿ ಕನಸುಗಳನ್ನು ಮಾರಾಟ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.