ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ಬುಧವಾರ ಹೈಕೋರ್ಟ್ ಅನುಮತಿ ನೀಡಿದೆ.
ವೈದ್ಯಕೀಯ ಪರೀಕ್ಷೆಯ ವಿರುದ್ಧ ಶ್ರೀಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಅಲ್ಲದೆ ಪೊಲೀಸರು ಆರೋಪಿಗೆ ವೈದ್ಯಕೀಯ ಪರೀಕ್ಷೆಯ ಸ್ವರೂಪ ತಿಳಿಸುವ ಅಗತ್ಯ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.
ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ಅನುಮತಿ ಕೋರಿ ಸಿಐಡಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಇದರ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದ ಶ್ರೀಗಳ ಪರ ವಕೀಲರು ವೈದ್ಯಕೀಯ ಪರೀಕ್ಷೆಯ ಸ್ವರೂಪ ತಿಳಿಸಬೇಕು ಎಂದು ವಾದಿಸಿದ್ದರು. ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯ ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ್ ಗೌಡ ಅವರು, ಪೊಲೀಸರು ನೊಂದ ಮಹಿಳೆಯಿಂದ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ ವಸ್ತುಗಳಲ್ಲಿನ ಡಿಎನ್‌ಎ ಅಂಶ ಪರೀಕ್ಷಿಸಲು ಶ್ರೀಗಳ ವೈದ್ಯಕೀಯ ಪರೀಕ್ಷೆಯ ಅಗತ್ಯ ಇದೆ. ಹೀಗಾಗಿ ಸಿಐಡಿ ಅಧಿಕಾರಿಗಳು ಸೂಚಿಸಿದಾಗ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕು ಮತ್ತು ವೈದ್ಯರು ಸೂಚಿಸಿದಂತೆ ಪರೀಕ್ಷೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕೆಂದು ಸೂಚಿಸಿದ್ದಾರೆ.