ಅಡಕೆಯ ಮಾನ ಕಾಯಲು ಕಟಿಬದ್ಧ
ಅಡಕೆ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ಹಿರಿಯ ವಕೀಲರನ್ನು...
-ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಕನ್ನಡಪ್ರಭ ವಾರ್ತೆ ವಿಧಾನಸಭೆ ಜ. 28
ಅಡಕೆ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ಹಿರಿಯ ವಕೀಲರನ್ನು ನೇಮಕ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ಆಡಕೆ ನಿಷೇಧಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಇನ್ನು ಮರಳು ಸಾಗಣೆಗೆ ಸಂಬಂಧಿಸಿದಂತೆ ಹೊರರಾಜ್ಯಗಳಿಗೆ ರಾಜ್ಯದಿಂದ ಮರಳು ಸಾಗಣೆ ಸಂಪೂರ್ಣ ನಿಷೇಧಿಸಲಾಗಿದ್ದು, ಜಿಲ್ಲೆಯಿಂದ ಜಿಲ್ಲೆಗೆ ಮರಳು ಸಾಗಣೆಗೆ ಇದ್ದ ನಿರ್ಬಂಧ ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಂಗಳವಾರ ಪ್ರತಿಪಕ್ಷ ಬಿಜೆಪಿ ಸದಸ್ಯರ ಪ್ರಸ್ತಾವನೆಗಳಿಗೆ ಉತ್ತರಿಸಿದ ಅವರು, ಅಡಕೆ ನಿಷೇಧವಾಗದಂತೆ ನೋಡಿಕೊಳ್ಳುವುದರ ಜತೆಗೆ ಮರಳು ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಹೀಗಾಗಿ ಜನರಲ್ಲಿ ಯಾವುದೇ ಆತಂಕ ಬೇಡ ಎಂದು ಹೇಳಿದರು.
ಅಡಕೆ ನಿಷೇಧ ಇಲ್ಲ: ಅಡಕೆ ನಿಷೇಧ ವಿಚಾರದಲ್ಲಿ ಯಾವುದೇ ಆತಂಕಕ್ಕೆ ಕಾರಣವಿಲ್ಲ. ಆದ್ದರಿಂದ ಈ ಕುರಿತು ಅಪಪ್ರಚಾರ ಮಾಡಿಕೊಂಡು ಹೋಗುವುದು ಬೇಡ ಎಂದೂ ಮುಖ್ಯಮಂತ್ರಿಗಳು ಪ್ರತಿಪಕ್ಷ ಬಿಜೆಪಿಗೆ ಸಲಹೆ ಮಾಡಿದ್ದಾರೆ.
ಶೂನ್ಯ ವೇಳೆಯಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಡಕೆ ನಿಷೇಧ ವಿಚಾರದಲ್ಲಿ ಸುಮ್ಮನೆ ಗೊಂದಲ ಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಅಡಕೆ ನಿಷೇಧ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ಆತಂಕವಿಲ್ಲ.
ರಾಜ್ಯ ಸರ್ಕಾರ ಮತ್ತು ಕೇಂದ್ರ ಆರೋಗ್ಯ ಸಚಿವರು ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಆದರೆ, ಅಸಿಸ್ಟೆಂಟ್ ಸಾಲಿಸಿಟರ್ ಜನರಲ್ ಅವರು ಈ ಹಿಂದೆ ಸಲ್ಲಿಸಿರುವ ಪ್ರಮಾಣಪತ್ರ ಆಧರಿಸಿ ಸುಪ್ರೀಂ ಕೋರ್ಟ್ ಅಡಕೆ ನಿಷೇಧಿಸುವ ಆದೇಶ ಹೊರಡಿಸಿದರೆ ಅಡಕೆ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕುತ್ತಾರೆ. ಆದ್ದರಿಂದ ರಾಜ್ಯ ಸರ್ಕಾರ ಪ್ರಮಾಣಪತ್ರ ವಾಪಸ್ ಪಡೆಯುವಂತೆ ಕೇಂದ್ರ ಕಾನೂನು ಸಚಿವಾಲಯದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.
ಹಿರಿಯ ವಕೀಲರ ನೇಮಕ: ಮಧ್ಯೆ ಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಸುಪ್ರೀಂ ಕೋರ್ಟ್‌ನಲ್ಲಿ ಇರುವ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕೂಡ ಪ್ರತಿವಾದಿಯಾಗಿದೆ. ಈಗಾಗಲೇ ಕೆ.ಎನ್. ಭಟ್ ಎಂಬ ಹಿರಿಯ ವಕೀಲರನ್ನು ಸರ್ಕಾರ ನೇಮಿಸಿದೆ. ಅಡಕೆ ಬೆಳೆಗಾರರಿಗೆ ತೊಂದರೆಯಾಗದ ರೀತಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಪ್ರಮಾಣಪತ್ರ ವಾಪಸ್ ಪಡೆಯಬೇಕು ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಗೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ದನಿಗೂಡಿಸಿದಾಗ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಸಿಸ್ಟೆಂಟ್ ಸಾಲಿಸಿಟರ್ ಜನರಲ್ ಅವರು ಮೌಖಿಕವಾಗಿ ಅಡಕೆ ಹಾನಿಕಾರಕ ಎಂದು ಹೇಳಿಕೆ ನೀಡಿದ್ದಾರೆ ಅಷ್ಟೆ. ಆದರೆ, ಸಿಎಂಡಿಆರ್‌ಐ ಅಡಕೆ ಹಾನಿಕರವಲ್ಲ ಎಂದು ವರದಿ ನೀಡಿದ್ದು, ಇದನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಪ್ರಮಾಣಪತ್ರ ವಾಪಸ್ ಪಡೆಯುವ ಬಗ್ಗೆ ಕೇಂದ್ರ ಕಾನೂನು ಸಚಿವರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.
ಟ್ರಾಕ್ಟರ್, ಎತ್ತಿನ ಗಾಡಿಗಳಿಗೆ ನಿರ್ಬಂಧ ಇಲ್ಲ: ಈ ಮಧ್ಯೆ ಸರ್ಕಾರದ ಗಮನ ಸೆಳೆದ ಜೆಡಿಎಸ್ ಸದಸ್ಯ ಚೆಲುವರಾಯಸ್ವಾಮಿ, ಗ್ರಾಮೀಣ ಭಾಗದಲ್ಲಿ ತಮ್ಮ ಸ್ವಂತ ಕೆಲಸಗಳಿಗೆ ಎತ್ತಿನಗಾಡಿ, ಟ್ರಾಕ್ಟರ್‌ಗಳ ಮೂಲಕ ಮರಳು ಸಾಗಣೆ ಮಾಡುವ ಬಡವರನ್ನು ಹಿಡಿದು ಅಧಿಕಾರಿಗಳು ಪ್ರಕರಣ ದಾಖಲಿಸುತ್ತಿದ್ದಾರೆ. ಇದರಿಂದ
ಮನೆ ಗೋಡೆ ದುರಸ್ತಿ, ಶೌಚಾಲಯ ನಿರ್ಮಾಣವನ್ನು ನಡೆಸಲು ಕೂಡ ಸಾಧ್ಯವಾಗುತ್ತಿಲ್ಲ ಎಂದು ಹೇಳಿದಾಗ, ಟ್ರಾಕ್ಟರ್ ಮೂಲಕ ಮತ್ತು ಎತ್ತಿನ ಗಾಡಿಗಳಲ್ಲಿ ಮರಳು ಸಾಗಿಸಲು ಯಾವುದೇ ನಿರ್ಬಂಧ ಇಲ್ಲ. ಒಂದು ವೇಳೆ ಅಂತಹ ಪ್ರಕರಣ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಮರಳು ಬಂದ್
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಗೋವಿಂದ ಕಾರಜೋಳ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ರಾಜ್ಯದ ಗಡಿ ಜಿಲ್ಲೆಗಳಿಂದ ಹೊರ ರಾಜ್ಯಗಳಿಗೆ ಮರಳು ಸಾಗಣೆ ನಿಷೇಧಿಸಲಾಗಿದೆ. ಗಡಿ ಭಾಗಗಳಲ್ಲಿ ಈಗಾಗಲೇ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಮಹಾರಾಷ್ಟ್ರಕ್ಕೆ ಮುಧೋಳ ತಾಲೂಕಿನಿಂದ ಮರಳು ಸಾಗಣೆ ತಡೆಗಟ್ಟಲು ಚೆಕ್‌ಪೋಸ್ಟ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಮರಳು ಸಮಸ್ಯೆ ನಿವಾರಿಸಲು ಹೊಸ ಮರಳು ಬ್ಲಾಕ್‌ಗಳನ್ನು ಗುರುತಿಸುವ ಪ್ರಕ್ರಿಯೆ ಚುರುಕುಗೊಳಿಸಿ ತಕ್ಷಣವೇ ಅವುಗಳನ್ನು ಹರಾಜು ಹಾಕುವಂತೆ ನಿರ್ದೇಶನ ನೀಡಲಾಗಿದೆ. ಜತೆಗೆ ಈಗಾಗಲೇ ಮರಳು ಬ್ಲಾಕ್‌ಗಳಿಗೆ ಪಡೆದಿರುವ ಟೆಂಡರ್‌ಗಳನ್ನು ಇನ್ನೂ ಒಂದು ವರ್ಷ ಮುಂದುವರಿಸಲಾಗುತ್ತಿದೆ ಎಂದರು.
ಮರಳು ಸಮಸ್ಯೆ ಕುರಿತಂತೆ ಆಡಳಿತ ಸದಸ್ಯರು ಸೇರಿದಂತೆ ಅನೇಕ ಸದಸ್ಯರು ದನಿಗೂಡಿಸಿದರು. ಹೊರರಾಜ್ಯಗಳಿಗೆ ಅಕ್ರಮ ಮರಳು ಸಾಗಣೆ ನಡೆಯುತ್ತಿದ್ದರೂ ಮೌನವಾಗಿರುವ ಅಧಿಕಾರಿಗಳು ಜಿಲ್ಲೆಯಿಂದ ಜಿಲ್ಲೆಗೆ ಮರಳು ಸಾಗಿಸಲು ಪರವಾನಗಿ ನೀಡುತ್ತಿಲ್ಲ. ಇದರಿಂದಾಗಿ ಸಾಕಷ್ಟು ಸಮಸ್ಯೆಯಾಗಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜಿಲ್ಲೆಯಿಂದ ಜಿಲ್ಲೆಗೆ ಮರಳು ಸಾಗಣೆಗೆ ಇದ್ದ ನಿರ್ಬಂಧ ತೆಗೆದುಹಾಕಲಾಗಿದೆ. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಈಗಾಗಲೇ ಸೂಚನೆ ನೀಡಲಾಗಿದೆ. ಮತ್ತೊಮ್ಮೆ ಈ ಕುರಿತು ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದರು.
ಅಡಕೆ ನಿಷೇಧಿಸದಂತೆ ಸುಪ್ರೀಂಕೋರ್ಟ್‌ನಲ್ಲಿ ಸಮರ್ಥ ವಾದ ಮಂಡಿಸುತ್ತೇವೆ. ಈ ಬಗ್ಗೆ ಭಯ ಬೇಡ. ಹಾಗೆಯೇ ಹೊರ ರಾಜ್ಯಕ್ಕೆ ಮರಳು ಸಾಗಾಟವನ್ನೂ ನಿಷೇಧಿಸಿದ್ದೇವೆ.