ಭಾಷಾ ಮಾಧ್ಯಮ: ಸಂವಿಧಾನಕ್ಕೆ ತಿದ್ದುಪಡಿಯಾಗಲಿ
ಭಾಷಾ ಮಾಧ್ಯಮ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ...
ಕನ್ನಡಪ್ರಭವಾರ್ತೆ, ಬೆಂಗಳೂರು, ಜೂ. 4
ಭಾಷಾ ಮಾಧ್ಯಮ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಸಂವಿಧಾನ ತಿದ್ದುಪಡಿಗೆ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭಾಶಯ ವ್ಯಕ್ತಪಡಿಸಿದ ನಂತರ ಸುಮಾರು 15 ನಿಮಿಷಗಳ ಕಾಲ ಸಿದ್ದರಾಮಯ್ಯ ಸೌಹಾರ್ದ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಸಲ್ಲಿಸಿರುವ ಬೇಡಿಕೆ ಬಗ್ಗೆಯೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭೇಟಿ ಸಂದರ್ಭದಲ್ಲಿ ಅಭಿವೃದ್ಧಿ ವಿಚಾರದ ಜತೆಗೆ ಭಾಷಾ ಮಾಧ್ಯಮ ವಿವಾದದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೆಚ್ಚು ಒತ್ತು ನೀಡಿದ್ದರು.
ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪಿಸುತ್ತಿದ್ದಂತೆ ಪ್ರಧಾನಿ ಮೋದಿ ಈ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿದರು. ತೀರ್ಪಿನಿಂದ ಭಾಷಾ ಮಾಧ್ಯಮ ಶಿಕ್ಷಣದ ಮೇಲಾಗುವ ಪರಿಣಾಮಗಳ ಬಗ್ಗೆ ಸಿದ್ದರಾಮಯ್ಯ ನೀಡಿದ ಎಲ್ಲ ಮಾಹಿತಿಗಳನ್ನು ತಾಳ್ಮೆಯಿಂದ ಆಲಿಸಿದರು.
ಸಭೆಗೆ ಮನವಿ: ಸುಪ್ರೀಂ ಕೋರ್ಟ್ ತೀರ್ಪಿನಿಂದ ಕೇವಲ ಕನ್ನಡಕ್ಕೆ ಮಾತ್ರವಲ್ಲ, ದಕ್ಷಿಣದ ಎಲ್ಲ ರಾಜ್ಯಗಳಿಗೆ, ಹಿಂದಿಯೇತರ ಮಾತೃಭಾಷೆ ಹೊಂದಿರುವ ರಾಜ್ಯಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಈ ಸಮಸ್ಯೆ ನಿವಾರಣೆಗೆ ಸಂವಿಧಾನ ತಿದ್ದುಪಡಿಯೊಂದೇ ಮಾರ್ಗ.
ಕೇಂದ್ರ ಸರ್ಕಾರವೇ ಈ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಬೇಕಾಗುತ್ತದೆ. ಹೀಗಾಗಿ ಆದಷ್ಟು ಬೇಗ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು, ಸಂವಿಧಾನ ತಿದ್ದುಪಡಿಗೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು ಎಂದು ತಿಳಿದು ಬಂದಿದೆ.
ಜಯಾಗೆ ಸೆಡ್ಡು: ಅದೇ ರೀತಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಾವೇರಿ ವಿವಾದ ಸಂಬಂಧ ಹೊತ್ತಿಸಿರುವ ಹೊಸ ಕಿಡಿಗೂ ಸಿಎಂ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ. ಪ್ರಧಾನಿ ಜತೆಗಿನ ಚರ್ಚೆ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಅವರು ತಮಿಳುನಾಡಿನ ಎಲ್ಲ ನಿಲುವುಗಳನ್ನು ಒಪ್ಪಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಹಿತವನ್ನು ಗಮನದಲ್ಲಿಟ್ಟುಕೊಳ್ಳುವಂತೆ ಮನವಿ ಮಾಡಿದರು ಎಂದು ತಿಳಿದು ಬಂದಿದೆ. ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪಿಸುವಂತೆ ಜಯಲಲಿತಾ ನಿಮ್ಮ ಬಳಿ ಪ್ರಸ್ತಾಪಿಸಿದ್ದಾರೆ. ಆದರೆ ಇದು ಅತಾರ್ಕಿಕ. ಕರ್ನಾಟಕ ಅನಗತ್ಯವಾಗಿ ಯಾವ ಸಂದರ್ಭದಲ್ಲೂ ಜಲ ತಗಾದೆ ತೆಗೆಯುವುದಿಲ್ಲ. ಈ ಬಾರಿಯೂ ತಮಿಳುನಾಡಿನಿಂದಲೇ ಆ ಪ್ರಯತ್ನ ಆರಂಭವಾಗಿದೆ. ಸದ್ಯಕ್ಕೆ ಕಾವೇರಿ ಮೇಲುಸ್ತುವಾರಿ ಸಮಿತಿ ಅಸ್ತಿ ತ್ವದಲ್ಲಿದೆ ಅದೇ ಸಾಕು ಎಂದು ಮನವಿ ಮಾಡಿದರು.
ಸಂಸದರೊಂದಿಗೆ ಮತ್ತೆ ಬರುವೆ : ಇದರ ಜತೆಗೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲೂ ಕೇಂದ್ರ ಸಹಾಯವನ್ನು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರ ಬಳಿ ಪ್ರಸ್ತಾಪಿಸಿದ್ದಾರೆ. ವಿಕಾಸದ ಹಾದಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಹಕಾರ ಅಗತ್ಯ. ಈ ಹಿನ್ನೆಲೆಯಲ್ಲಿ ರಾಜ್ಯದ ಬೇಡಿಕೆಗಳ ಬಗ್ಗೆ ಸಮಗ್ರ ವರದಿಯೊಂದಿಗೆ ರಾಜ್ಯದ ಜತೆಗೂಡಿ ನಿಮ್ಮನ್ನು ಭೇಟಿ ಮಾಡುವುದಾಗಿ ಸಿದ್ದರಾಮಯ್ಯ ಮನವಿ ಮಾಡಿದರು. ರಾಜ್ಯದ ಎಲ್ಲ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಸಹಕಾರ ನೀಡುವುದಾಗಿ ಮೋದಿ ಈ ಸಂದರ್ಭದಲ್ಲಿ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.
ಜಯಾ ನಿಲುವು ಒಪ್ಪಲಾಗದು: ಸಿದ್ದು
ಕಾವೇರಿ ವಿವಾದ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಎಲ್ಲ ನಿಲುವುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ. ಜಯಲಲಿತಾ ಅವರ ಬೇಡಿಕೆಯಿಂದ ರಾಜ್ಯಕ್ಕೆ ಆಗುವ ಅನನುಕೂಲತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಚರ್ಚಿಸುತ್ತೇನೆ. ರಾಜ್ಯದ ಹಿತ ಬಲಿಕೊಡುವುದು ಸಾಧ್ಯವಿಲ್ಲ ಎಂದು ಹೇಳಿದರು.